ಕೋಲಾರ

ಬೆಂವಿವಿ ರಗಳೆ; ವಿದ್ಯಾರ್ಥಿಗಳ ಪ್ರತಿಭಟನೆ

Published On :

ಕ.ಪ್ರ.ವಾರ್ತೆ ಕೋಲಾರ ಸೆ. 18
ಪ್ರತಿ ಬಾರಿ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಯಲ್ಲಿ ಲೋಪವೆಸಗುತ್ತಿರುವ ಬೆಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಪದವಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕುಳಿತು ಬೆಂಗಳೂರು ವಿವಿಯ ವಿರುದ್ಧ ಧಿಕ್ಕಾರ ಕೂಗಿದರು.
2013ರ ಮೇ ತಿಂಗಳಲ್ಲಿ ನಡೆದ 2 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶವನ್ನು ಈ ಬಾರಿಯೂ ತಡವಾಗಿ ಪ್ರಕಟಿಸಲಾಗಿದೆಯಲ್ಲದೆ ಬಿಕಾಂ ಮತ್ತು ಬಿಎ 4ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಕಾರ್ಪೋರೆಟ್ ಅಕೌಂಟಿಂಗ್ ಹಾಗೂ ಸಿಎಬಿ ವಿಷಯದಲ್ಲಿ ಸುಮಾರು 200 ವಿದ್ಯಾರ್ಥಿಗಳ ಫಲಿತಾಂಶ ಗೈರು ಹಾಜರೆಂದು ಪ್ರಕಟಿಸುವ ಮೂಲಕ ಅಗನತ್ಯ ರಗಳೆಗೆ ಎಡೆಮಾಡಿಕೊಟ್ಟಿದ್ದಾರೆಂದು ವಿದ್ಯಾರ್ಥಿನಿಯರು ದೂರಿದರು. ಇದೇ ರೀತಿ ಬಿಎ ಪರೀಕ್ಷಾರ್ಥಿಗಳ ಫಲಿತಾಂಶದಲ್ಲೂ ಲೋಪ ಕಂಡು ಬಂದಿದೆ. ಬೆಂಗಳೂರು ವಿವಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಆಗಿರುವ ತಪ್ಪಿಗೆ ಪೋಷಕರು ನಮ್ಮ ಮೇಲೆ ಅನುಮಾನ ಪಡುವಂತಾಗಿದೆ. ಕೂಡಲೇ ಸರ್ಕಾರ ವಿವಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯುವ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಬಿ. ಸುರೇಶ್‌ಗೌಡ, ಬೆಂಗಳೂರು ವಿವಿಯ ಅವಾಂತಗಳಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದ್ದು, ಇನ್ನು ಮುಂದೆ ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ಲೋಪ ಆಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕೆಂದರು.
ಜಿಲ್ಲಾಧಿಕಾರಿ ಡಿ.ಕೆ. ರವಿ ಅವರಿಗೆ ವಿದ್ಯಾರ್ಥಿನಿಯರು ಮನವಿ ಪತ್ರ ಸಲ್ಲಿಸಿ, ಪ್ರತಿ ಬಾರಿಯೂ ತಪ್ಪು ಮಾಡುತ್ತಿರುವ ವಿವಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಪಾರಸ್ಸು ಮಾಡಬೇಕು ಹಾಗೂ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ಎಸ್.ವಿ. ಶರಣ್ಯ, ಪಿ. ಪವಿತ್ರ, ಎಸ್.ಎ. ಶುಭ, ಆರ್. ಪಲ್ಲವಿ, ದೀಕ್ಷಿತಾ, ಕೆ.ವಿ. ಪ್ರಿಯಾಂಕ, ಟಿ.ಎನ್. ರಮ್ಯ, ಕೆ.ಜೆ. ವನಿತ ಹಾಗೂ ಕೆ. ಅಶೋಕ್ ಇದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಕೆ. ರವಿ, ಬೆಂಗಳೂರು ವಿವಿಯ ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಸಮಸ್ಯೆ ತಿಳಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.