ದಲಿತರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ
ಕ.ಪ್ರ.ವಾರ್ತೆ ಮಾಲೂರು ಸೆ.20
ತಾಲೂಕಿನಲ್ಲಿ ಇತ್ತೀಚೆಗೆ ದಲಿತರ ಮೇಲೆ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ದೌರ್ಜನ್ಯ ನಡೆಯುತ್ತಿದ್ದು, ತಾಲೂಕು ಆಡಳಿತ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ದಲಿತ ಸಿಂಹ ಸೇನೆಯ ಅಧ್ಯಕ್ಷ ತಿ. ಶ್ರೀನಿವಾಸ್ ಹೇಳಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ ಲಕ್ಕೂರು ಹೋಬಳಿಯ ಬಾಳಿಗಾಮಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರಿಂದ ನಿರಂತರವಾಗಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ಹಲ್ಲೆ, ಜಾತಿ ನಿಂದನೆ ತಾಜಾ ಉದಾಹರಣೆಯಾಗಿದ್ದು, ತಾಲೂಕು ಆಡಳಿತ ಮೌನ ವಹಿಸುತ್ತಿರುವುದು ನೋವಿನ ಸಂಗತಿ ಎಂದರು.
ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ದಲಿತರ ಮೇಲೆ ದೌರ್ಜನ್ಯವೆಸಗುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರ ವಿರುದ್ಧ ಈಗಾಗಲೇ ಮೂರ್ನಾಲ್ಕು ಜಾತಿನಿಂದನೆ ಪ್ರಕರಣ ದಾಖಲಾಗಿದ್ದರೂ ಇದುವರೆಗೂ ಅತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರ ಹಿಂದಿನ ಶಕ್ತಿ ಯಾವುದು ಎಂದು ತಾಲೂಕು ಆಡಳಿತ ತಿಳಿಸಬೇಕು ಎಂದು ಆಗ್ರಹಿಸಿದರು.
ಬುಧವಾರ ತಾಲೂಕಿನ ಇಂದುಮಂಗಲ ಗ್ರಾಮದ ದಲಿತ ಮುನಿವೆಂಕಟಪ್ಪ ಅವರ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಈ ಕುರಿತು ದೂರು ನೀಡಿದರೂ ಇದುವರೆಗೂ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಿಲ್ಲ ಎಂದು ಆರೋಪಿಸಿದರು.
ಕೂಡಲೇ ದಲಿತರಿಗೆ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಜಿಲ್ಲಾದ್ಯಾಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ದಲಿತ ವೆಂಕಟರಾಜು, ರಾಮಾಂಜಿ, ಎನ್. ವೆಂಕಟೇಶ್, ವೆಂಕಟಸ್ವಾಮಿ, ತಂಬಹಳ್ಳಿ ನಾರಾಯಣಸ್ವಾಮಿ ಇದ್ದರು.
ದಲಿತರ ಮೇಲೆ ದೌರ್ಜನ್ಯವೆಸಗುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರ ವಿರುದ್ಧ ಈಗಾಗಲೇ ಮೂರ್ನಾಲ್ಕು ಜಾತಿನಿಂದನೆ ಪ್ರಕರಣ ದಾಖಲಾಗಿದ್ದರೂ ಇದುವರೆಗೂ ಅತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಂಡಿಲ್ಲ
- ತಿ. ಶ್ರೀನಿವಾಸ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

