ಆಡಳಿತ ಸುಧಾರಣೆಗೆ ಒತ್ತು ನೀಡಿ: ಉಮಾಶ್ರೀ
ಕನ್ನಡಪ್ರಭ ವಾರ್ತೆ ಕೋಲಾರ ಸೆ.21
ಸುದೀರ್ಘವಾಗಿ ನಡೆದ ಪ್ರಗತಿ ಪರಿಶೀಲನೆ, ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ, ಆಡಳಿತ ಸುಧಾರಣೆಗೆ ತಾಕೀತು ಹಾಗೂ ಜಿಲ್ಲಾ ಉತ್ಸವ ನಡೆಸಲು ಸೂಚನೆ.
- ಇವು ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು.
ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಕೋಲಾರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಉಮಾಶ್ರೀ, ಸುಮಾರು ನಾಲ್ಕೂವರೆ ಗಂಟೆಗಳ ಸುದೀರ್ಘ ಸಭೆ ನಡೆಸಿ ಸರ್ಕಾರಕ್ಕೆ ಒಳ್ಳೆಯ ಉದ್ದೇಶ ಇದ್ದರೂ ಅಧಿಕಾರಿಗಳ ಅಸಹಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧನೆ ಆಗುತ್ತಿಲ್ಲವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ, ವಿವಾಹ ವಿಚ್ಚೇದನ ಪ್ರಕರಣ, ಬಾಲ್ಯವಿವಾಹ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರು ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಅನುಷ್ಠಾನ ಜಿಲ್ಲೆಯಲ್ಲಿ ಸಮಾಧಾನ ತಂದಿಲ್ಲವೆಂದು ಸಚಿವೆ ಉಮಾಶ್ರೀ ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪುಡಿ ರೂಪದಲ್ಲಿ ಪೌಷ್ಟಿಕ ಆಹಾರ ಒದಗಿಸಬೇಕು. ಆದರೆ, ಪೌಷ್ಟಿಕ ಆಹಾರ ತಯಾರಿಕಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕಾಳು ರೂಪದಲ್ಲಿ ನೀಡುವ ಪೌಷ್ಟಿಕ ಆಹಾರ ನಿಲ್ಲಿಸಿ ಪುಡಿ ರೂಪದಲ್ಲೇ ನೀಡಬೇಕು. ಮತ್ತೊಮ್ಮೆ ಜಿಲ್ಲೆಗೆ ಬರುವಷ್ಟರಲ್ಲಿ ಪೌಷ್ಟಿಕ ಆಹಾರ ತಯಾರಿಕಾ ಘಟಕಗಳು ಉತ್ತಮ ರೀತಿಯಲ್ಲಿ ನಡೆಯುತ್ತಿರಬೇಕು. ಒಂದು ವೇಳೆ ನನ್ನ ಸೂಚನೆ ಪಾಲಿಸದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಶಕುಂತಲಾ ಅವರಿಗೆ ಆದೇಶಿಸಿದರು.
ಅಧಿಕಾರಿಗಳು ಕೇವಲ ಎನ್ಜಿಒ ನಂಬಿ ಕುಳಿತರೆ ಸಾಲದು. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಮಹಿಳೆಯರ ಸಬಲೀಕರಣ, ಮಹಿಳಾ ಅಭಿವೃದ್ಧಿ ನಿಗಮದ ಚಟುವಟಿಕೆಗಳ ಬಗ್ಗೆ ಗಮನಹರಿಸಿ. ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಹಾಲ್ಟೆಲ್ಗಳಲ್ಲಿ, ಅಂಗನವಾಡಿ ಕೇಂದ್ರ ಹಾಗೂ ಇನ್ನಿತರ ಕಡೆ ಮಹಿಳೆ ಮತ್ತು ಮಕ್ಕಳ ಶೋಷಣೆ ಆಗುತ್ತಿದ್ದರೂ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಕ್ಷಮೆ ಮತ್ತು ರಾಜಿ ಮಾಡಿಕೊಳ್ಳುತ್ತಾ ಹೋದರೆ ಪ್ರಯೋಜನವಾಗುವುದಿಲ್ಲ ಎಂದು ಸಚಿವೆ ಉಮಾಶ್ರೀ ಬುದ್ಧಿವಾದ ಹೇಳಿದರು. ಸ್ತ್ರೀಶಕ್ತಿ ಯೋಜನೆ, ಮಹಿಳಾ ಅಭಿವೃದ್ಧಿ ನಿಗಮದ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡುವಾಗ ಆಯಾ ಕ್ಷೇತ್ರದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು. ಕಾರ್ಯಕ್ರಮ ಏರ್ಪಡಿಸಿ ಚೆಕ್ ವಿತರಣೆ ಮಾಡುವ ಪದ್ಧತಿ ಅಳವಡಿಸಿಕೊಂಡರೆ ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು. ಬಾಲ್ಯವಿವಾಹಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ. ರಾಜಕಾರಣಿಗಳಿಗೆ ಹೆದರಿ ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಿದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ.
ಅನಿಷ್ಟ ಪದ್ಧತಿ ಕಂಡುಬಂದಲ್ಲಿ ಪ್ರಕರಣ ದಾಖಲು ಮಾಡಿ. ನಿಮಗೆ ಏನಾದ್ರು ತೊಂದರೆ ಎದುರಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಹಾಯ ಪಡೆಯುವಂತೆ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಇಲಾಖೆಯಿಂದ ಜಿಲ್ಲೆಯಲ್ಲಿ ಆಗಿರುವ ಕೆಲಸ- ಕಾರ್ಯಗಳ ಮಾಹಿತಿಯನ್ನು ಸಹಾಯಕ ನಿರ್ದೇಶಕ ವೆಂಕಟಾಚಲಪತಿ ಅವರಿಂದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಸಚಿವರು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರನ್ನು ತಮ್ಮ ಸಹಾಯಕ್ಕೆ ನೇಮಿಸಿಕೊಂಡಿರುವುದು ಸೂಕ್ತವಲ್ಲ. ಸರ್ಕಾರಿ ಶಾಲೆಯ ಶಿಕ್ಷಕರನ್ನು ಇಲಾಖೆಯ ಕೆಲಸಕ್ಕೆ ಬಳಸಿಕೊಳ್ಳುವ ಬದಲು ದಕ್ಷರೊಬ್ಬರನ್ನು ಹುಡುಕಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಗುರ್ನೀತ್ ತೇಜ್, ಜಿಲ್ಲಾಧಿಕಾರಿ ಡಿ.ಕೆ. ರವಿ, ಜಿಪಂ ಸಿಇಒ ಝುಲ್ಫಿಖಾರ್ ಉಲ್ಲಾ, ರಾಜ್ಯ ವಿಕಲಚೇತನರ ಪುನರ್ವಸತಿ ಕೇಂದ್ರದ ಅಧಿಕಾರಿ ಜಯವಿಭವಸ್ವಾಮಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸಾರಿಯಾ ಸುಸ್ತಾನ್ ಇದ್ದರು.
ಶೀಘ್ರವೇ ಸಾಂಸ್ಕೃತಿಕ ನೀತಿ ಜಾರಿ: ಉಮಾಶ್ರೀ ಪ್ರಕಟ
ಕನ್ನಡಪ್ರಭ ವಾರ್ತೆ, ಕೋಲಾರ,ಸೆ.21
ಶೀಘ್ರವೇ ಸಾಂಸ್ಕೃತಿಕ ನೀತಿಯನ್ನು ಜಾರಿಗೆ ತರಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ತಿಳಿಸಿದರು.
ಕೋಲಾರಕ್ಕೆ ಶನಿವಾರ ಭೇಟಿ ನೀಡಿದ್ದ ಅವರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕನ್ನಡ ನಾಡು, ನುಡಿಯನ್ನು ಅಭಿವೃದ್ಧಿಪಡಿಸಲು ಹಾಗೂ ಉತ್ತಮವಾದ ಸಾಂಸ್ಕೃತಿಕ ಚಟುವಟಿಕೆಗಳ ಅನುಷ್ಠಾನಕ್ಕಾಗಿ ಸಾಂಸ್ಕೃತಿಕ ನೀತಿ ಜಾರಿಗೆ ಸರ್ಕಾರ ನಿರ್ಧರಿಸಿದೆ ಎಂದರು.
ಸಾಂಸ್ಕೃತಿಕ ನೀತಿಯನ್ನು ಸಿದ್ಧಪಡಿಸಲು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕರಡು ಪ್ರತಿ ಸಿದ್ಧಪಡಿಸಿಕೊಡುವಂತೆ ಕೋರಲಾಗಿದೆ, ಇನ್ನು ಡಿಸೆಂಬರ್ ಅಂತ್ಯಕ್ಕೆ ವರದಿ ತರಿಸಿಕೊಂಡು ಇನ್ನು ಆರು ತಿಂಗಳಲ್ಲಿ ಸಾಂಸ್ಕೃತಿಕ ನೀತಿ ಜಾರಿಗೆ ತರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಸಿಕ್ಕ ಕೂಡಲೇ ನಾನು ಮತ್ತು ಇಲಾಖೆಯ ಅಧಿಕಾರಿಗಳು ನೊಂದವರ ಜೊತೆ ಚರ್ಚಿಸಿ ಸಾಂತ್ವನ ಹೇಳುತ್ತಿರುವುದಲ್ಲದೆ, ಸರ್ಕಾರದಿಂದ ಅಗತ್ಯ ರಕ್ಷಣೆ ಹಾಗೂ ಪರಿಹಾರ ಒದಗಿಸುತ್ತಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಾಯಕಲ್ಪ ನೀಡಬೇಕಾಗಿದೆ. ಸಾಕಷ್ಟು ಸಮಸ್ಯೆಗಳಿದ್ದು ಹಂತ ಹಂತವಾಗಿ ಬಗೆಹರಿಸುತ್ತೇವೆಂದರು.
ಶಾಲಾ ಮಕ್ಕಳಿಗೆ ಈಗ ನೀಡುತ್ತಿರುವ ಕೆನೆ ರಹಿತ ಹಾಲಿನ ಬದಲಿಗೆ ಹಸುವಿನ ಹಾಲನ್ನು ನೇರವಾಗಿ ಶಾಲೆಗಳಿಗೆ ಸರಬರಾಜು ಮಾಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದ್ದು ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.
ವಿಕಲಚೇತನರಿಗೆ ಶೇ.3 ಮೀಸಲಾತಿಯಡಿ ಉದ್ಯೋಗ ಕಲ್ಪಿಸಲು ಸರ್ಕಾರ ಬದ್ಧವಾಗಿದೆ, ಇದಕ್ಕಾಗಿ ಬೇರೆ ಬೇರೆ ಇಲಾಖೆಯಲ್ಲಿ ಉದ್ಯೋಗ ಅವಕಾಶಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಮಹಿಳೆಯರಿಗೆ ರಕ್ಷಣೆಯ ಜೊತೆಗೆ ಆರ್ಥಿಕವಾಗಿ ಸ್ವಾವಲಂಭಿಗಳಾಗುವುದಕ್ಕೆ ಬೇಕಾದ ಕಾರ್ಯಕ್ರಮಗಳನ್ನು ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ಕುಮಾರ್, ಕೋಲಾರ ಬ್ಲಾಕ್ ಸಮಿತಿ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಕುಮಾರ್, ಜಯದೇವ್, ರಾಜೇಶ್ ಸಿಂಗ್, ಗೋಪಾಲಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

