ನಾಳೆ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
-ಪಾ.ಶ್ರೀ.ಅನಂತರಾಮ್
ಕೋಲಾರ: ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಸಲುವಾಗಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕೋರಲು ಜಿಲ್ಲೆಯ ಜನಪ್ರತಿನಿಧಿಗಳು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.
ಸೆ.25 ರಂದು ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳನ್ನು ಮುಂಚಿತವಾಗಿಯೇ ಮನವರಿಕೆ ಮಾಡಿ, ಅದಕ್ಕೆ ಪರಿಹಾರ ಪಡೆಯುವುದು ಮಂಗಳವಾರದ ಸಭೆಯ ಉದ್ದೇಶವಾಗಿದೆ.
ಮುಖ್ಯಮಂತ್ರಿಗಳ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಜಿಲ್ಲಾ ಆಡಳಿತದ ವತಿಯಿಂದ ಏನೆಲ್ಲಾ ಬೇಡಿಕೆಗಳನ್ನು ಮಂಡಿಸಬೇಕೆಂದು ಸೋಮವಾರ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳೊಟ್ಟಿಗೆ ಪೂರ್ವಭಾವಿ ಸಭೆ ನಡೆಸಿದರು.
ಯಾವ ವಿಚಾರಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಸಭೆಯಲ್ಲಿ ಚರ್ಚಿಸಲಾಯಿತಲ್ಲದೆ, ಬೇಡಿಕೆ ಪಟ್ಟಿಯ ತಯಾರಿಕೆಯ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ ಡಿ.ಕೆ.ರವಿ ಅವರಿಗೆ ವಹಿಸಲಾಯಿತು.
ಪ್ರಮುಖ ಬೇಡಿಕೆಗಳು: ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಸೋಲಾರ್ ವಿದ್ಯುತ್ಗೆ ಶೇ.75 ರಷ್ಟು ಸಹಾಯಧನ, ಹನಿ ನೀರಾವರಿಗೆ ಶೇ.100 ಸಹಾಯಧನ, ರಸ್ತೆಗಳ ಸಮಗ್ರ ಅಭಿವೃದ್ಧಿ, ಕೋಚಿಮುಲ್ನಲ್ಲಿ ಸಂಗ್ರಹಣೆ ಆಗುವ ಹಾಲನ್ನು ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟಕ್ಕೆ ಅವಕಾಶ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಲ್ಲಿನ ಹೂಳು ತೆಗೆದು ಕೆರೆಗಳ ಅಭಿವೃದ್ಧಿಗಾಗಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 11 ಸಾವಿರ ಕೋಟಿ ರು.ಗಳ ಸಮಗ್ರ ಯೋಜನೆಗೆ ಅನುಮತಿ ಪಡೆಯಲು ಲಾಬಿ ಮಾಡುವುದು ಹಾಗೂ ರೇಲ್ವೆ ಕೋಚ್ ಕಾರ್ಖಾನೆಗೆ ಬೇಕಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ತ್ವರಿತಗತಿಯ ಕ್ರಮ ಸೇರಿದಂತೆ ಇನ್ನಿತರ ವಿಚಾರಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹೆಚ್ಚಿನ ಅನುದಾನ ಪಡೆಯುವುದಕ್ಕೆ ಪ್ರಯತ್ನಿಸಲಾಗುತ್ತಿದೆ.
ಮುಖ್ಯಮಂತ್ರಿಗೆ ಮನವಿ: ಮಂಗಳವಾರ ಜಿಲ್ಲಾ ಆಡಳಿತದ ಕಡೆಯಿಂದ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪ್ರವಾಸ ಕಾರ್ಯಕ್ರಮದ ಸಿದ್ಧತೆ, ಬೇಡಿಕೆಗಳ ವಿವರ ಸಲ್ಲಿಕೆಯಾಗುತ್ತಿರುವುದರಿಂದ ಈ ಕುರಿತು ಮನವರಿಕೆ ಮಾಡಿಕೊಡುವ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಾರಿಗೆ ಮನವೊಲಿಸಲು ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಂದರ್ಶನಕ್ಕಾಗಿ ಅನುಮತಿ ಪಡೆದಿದ್ದಾರೆ.
ಘೋಷಣೆಗೆ ಒತ್ತಾಯ: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಜಿಲ್ಲೆಯ ಶಾಸಕರೊಟ್ಟಿಗೆ ಭೇಟಿಯಾಗಿ ನೀರಿನ ಸಮಸ್ಯೆ, ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಸೆ.25ರ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಘೋಷಣೆ ಮಾಡುವಂತೆ ಒತ್ತಾಯಿಸುವುದು ಈ ಸಂದರ್ಶನದ ಪ್ರಮುಖ ಉದ್ದೇಶವಾಗಿದೆ.
ಗೊಂದಲ ನಿವಾರಿಸಲಿ: ಬುಧವಾರ(ಸೆ.25) ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಕೋಲಾರ ತಾಲೂಕಿನ ವೇಮಗಲಲ್ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಧ್ಯಾಹ್ನ 2.30ಕ್ಕೆ ಕೋಲಾರಕ್ಕೆ ಆಗಮಿಸುವರು. ಸಂಜೆ ಕವಿ ಕನಕದಾಸರ ವಿಚಾರಗೋಷ್ಠಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಬೆಂಗಳೂರಿಗೆ ತೆರಳದಿದ್ದಾರೆ. ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ವಿರ್ಜಾ ಮೆಹ್ದಿ ಪ್ರಕಟಿಸಿರುವ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದಲ್ಲಿ ಶಾಶ್ವತ ನೀರಾವರಿ ಯೋಜನೆಯ ಅನುಷ್ಟಾನದ ಬಗ್ಗೆ ಪ್ರಸ್ತಾಪ ಇಲ್ಲದಿರುವುದರಿಂದ ಸಹಜವಾಗಿಯೇ ಜನತೆ ಶಾಶ್ವತ ನೀರಾವರಿಗಾಗಿ ಒತ್ತಾಯಿಸುವ ಸಾಧ್ಯತೆಗಳು ಹೆಚ್ಚಿರುವುದರಿಂದ ಜಿಲ್ಲಾ ಆಡಳಿತ ಮತ್ತು ಜನಪ್ರತಿನಿಧಿಗಳು ಜನತೆಯ ಭಾವನೆಗಳನ್ನು ತಿಳಿಸಿ, ಸಮಾಧಾನಕರವಾದ ಸಂದೇಶ ಸಿಗುವಂತೆ ಮಾಡಿದಲ್ಲಿ ಮಾತ್ರ ಜನತೆಯಲ್ಲಿನ ಗೊಂದಲ, ಸಂಶಯ ನಿವಾರಣೆ ಆಗುತ್ತದೆ.
ವಿಶೇಷ ಪ್ಯಾಕೇಜ್ ನೀಡಲಿ: ಈಗಾಗಲೇ ಅನೇಕ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಸ್ಥಿತಿಗತಿಗೆ ಅನುಗುಣವಾಗಿ ಪರಿಹಾರ ಘೋಷಣೆ ಮಾಡಿರುವ ಮುಖ್ಯಮಂತ್ರಿಗಳು ಯಾವುದೇ ನದಿ-ನಾಲೆ ಇಲ್ಲದೆ, ಮಳೆಯಾಶ್ರಿತ ಪ್ರದೇಶವಾಗಿರುವ ಕೋಲಾರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮೂಲಕ ಜನತೆಯ ಹಿತ ಕಾಪಾಡಲಿ ಎಂಬುದು ಎಲ್ಲರ ನಿರೀಕ್ಷೆಯಾಗಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಇದನ್ನು ಸಾಕಾರಗೊಳಿಸಲಿ ಎಂಬುದು ಒತ್ತಾಸೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

