ಕೋಲಾರ

ಮೋದಿ ಪ್ರಧಾನಿಯಾಗುವುದು ಕನಸು: ಸಿಎಂ

Published On :

ಕೋಲಾರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಮತ್ತು ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.
ನಗರದ ಹೊರವಲಯದಲ್ಲಿರುವ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕೋಮುವಾದಿ ಪಕ್ಷವನ್ನು ದೇಶದ ಜನರು ಅಧಿಕಾರಕ್ಕೆ ತರುವುದಿಲ್ಲ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿರನ್ನು ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದಕ್ಕೆ ಮೋದಿ ಪ್ರಧಾನಿಯಾಗೇಬಿಟ್ಟೆ ಎಂಬಂತೆ ಬೀಗುತ್ತಿದ್ದಾರೆ ಇದು ಅವರ ಭ್ರಮೆ ಅಷ್ಟೆ ಎಂದರು.
ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಜೆಡಿಎಸ್‌ನವರು ವಚನಭ್ರಷ್ಟರಾದರಿಂದ ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವಂತಾಯಿತು, ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ನಡೆಯಬಾರದೆಲ್ಲಾ ನಡೆಯಿತು. ಬಿಜೆಪಿ ಆಡಳಿತವಿರುದ್ಧ ಜನರು ಮತಹಾಕಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದರು. ಜೆಡಿಎಸ್ ಜಾತ್ಯತೀತ ಹೆಸರಲ್ಲಿ ಜಾತಿವಾದ ಮಾಡುತ್ತಿದೆ ಬಿಜೆಪಿ ಕೋಮುವಾದಿ ಪಕ್ಷ ಎರಡೂ ಪಕ್ಷಗಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಗಂಟೆಯಲ್ಲಿ ರೈತಪರ 6 ಯೋಜನೆಗಳನ್ನು ಜಾರಿಗೆ ತಂದೆ. ಎರಡು ಲೋಕಸಭೆ ಕ್ಷೇತ್ರಗಳಿಗೆ ನಡೆದ ಉಪ ಸಮರದಲ್ಲಿ ಬಿಜೆಪಿ ಜೆಡಿಎಸ್ ಅನೈತಿಕ ಹೊಂದಾಣಿಕೆ ಮಾಡಿಕೊಂಡರೂ ಎರಡರಲ್ಲಿಯೂ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಕೋಟೆಯಾಗಿ ಮಾಡಿ ಪಕ್ಷವನ್ನು ಜಯಭೇರಿ ಬಾರಿಸುವಂತೆ ಜನರು ಮಾಡಿದ್ದಾರೆ. ರಾಜ್ಯ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಜನರ ಮುಂದೆ ತಂದು ಜಾಗೃತಿ ಮೂಡಿಸಬೇಕು ಎಂದರು.
ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಮಾಜಿ ವಿಧಾನಸಭೆ ಸ್ವೀಕರ್ ಕೆ.ಆರ್. ರಮೇಶ್ ಕುಮಾರ್ ಮಾತನಾಡಿ, ಮುಖಂಡರ ಮತ್ತು ಕಾರ್ಯಕರ್ತರ ನಡುವೆ ಉಂಟಾಗಿರುವ ಸಣ್ಣಪುಟ್ಟ ಗೊಂದಲಗಳನ್ನು ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ತಿಳಿಗೊಳಿಸಬೇಕು ಮತ್ತು ಕಾರ್ಯಕರ್ತರು ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರಮಸಬೇಕೆಂದು ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ನಜೀರ್ ಅಹ್ಮದ್, ಸುದರ್ಶನ್, ಬಿಸೇಗೌಡ, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ವಾಣಿಕೃಷ್ಣಾರೆಡ್ಡಿ, ರೂಪಶಶಿಧರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.