ಕೋಲಾರ

ಮಾಹಿತಿ ಇಲ್ಲದ ಅಧಿಕಾರಿಗಳ ವಿರುದ್ಧ ಅಧ್ಯಕ್ಷರ ಗರಂ

Published On :

ಚಿಕ್ಕಬಳ್ಳಾಪುರ: ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗದೇ ಗೊಂದಲದ ಅಂಕಿ ಅಂಶಗಳನ್ನು ಹೇಳಿದ ಅಧಿಕಾರಿಗಳ ವರ್ತನೆಗೆ ಜಿಪಂ ಅಧ್ಯಕ್ಷ ಚಿನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರೂ ಅಧಿಕಾರಿಗಳು ಕಾಟಾಚಾರಕ್ಕೆ ಸಭೆಗೆ ಬರುತ್ತಿದ್ದಾರೆ. ಇಂತಹ ಸಭೆಗಳನ್ನು ನಡೆಸುವುದಾದರೂ ಏತಕ್ಕೆ ಎಂದು ಕಿಡಿಕಾರಿದರು. ತಾಪಂ ಸಭಾಂಗಣದಲ್ಲಿ ಬುಧವಾರ ಜಿಪಂ ಅಧ್ಯಕ್ಷ ಚಿನ್ನಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಬಹುತೇಕ ಮಂದಿ ಅಧಿಕಾರಿಗಳು ಗೈರು ಹಾಜರಾಗಿದ್ದರು.
ಮತ್ತೆ ಕೆಲ ಅಧಿಕಾರಿಗಳು ಅಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಆಗಮಿಸಿದ್ದರು. ಅಧ್ಯಕ್ಷರು ಮತ್ತು ಸದಸ್ಯರು ಕೇಳುತ್ತಿದ್ದ ಪ್ರಶ್ನೆಗಳಿಗೆಲ್ಲಾ ಉತ್ತರ ಹೇಳಲು ತಡಬಡಾಯಿಸಿ ಸಭೆಯಲ್ಲಿದ್ದವರು ಅಸಮಾಧಾನಗೊಳ್ಳುವಂತೆ ಮಾಡಿದರು. ಗ್ರಾಮ ನೈರ್ಮಲ್ಯವನ್ನು ಕಾಪಾಡುವ ಸಲುವಾಗಿ ಸರ್ಕಾರ ಪ್ರತಿ ಗ್ರಾಪಂಗೆ 10 ಸಾವಿರ ರು.ಗಳನ್ನು ನೀಡುತ್ತಿದೆ. ಆದರೆ, ಇದರ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳಲಾಗುತ್ತಿಲ್ಲ ಎಂದು ಜಿಪಂ ಅಧ್ಯಕ್ಷ ಚಿನ್ನಪ್ಪ, ಕೂಡಲೇ ಗ್ರಾಮ ನೈರ್ಮಲ್ಯ ಸಮಿತಿಗಳ ಸಭೆಯನ್ನು ನಡೆಸಬೇಕು. ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವಂತೆ ಮಾಡಬೇಕೆಂದು ಸೂಚನೆ ನೀಡಿದರು. ರೇಷ್ಮೆ ಬೆಳೆಗಾರರಿಗೆ ಮತ್ತು ಅವರನ್ನು ಅವಲಂಬಿತ ಕುಟುಂಬದ ಸದಸ್ಯರಿಗೆ ಸರ್ಕಾರ ಆರೋಗ್ಯ ಕಾರ್ಡು ವಿತರಿಸುತ್ತಿದೆ. 52 ರು.ಗಳನ್ನು ಪಾವತಿಸಿ ಕಾರ್ಡನ್ನು ಪಡೆದರೆ, ರೈತ ಮತ್ತು ಅವರ ಕುಟುಂಬದವರು 20 ಸಾವಿರ ರು. ವರೆಗೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಆದರೆ, ಈ ಬಗ್ಗೆ ಜಾಗೃತಿ ಮೂಢಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಬಿಸಿಯೂಟ, ಕ್ಷೀರಭಾಗ್ಯ, ಅನ್ನಭಾಗ್ಯ ಯೋಜನೆ, ಆಶ್ರಯ ಮನೆ ಯೋಜನೆ ಹಾಗೂ ಕುಡಿಯುವ ನೀರಿನ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಸಭೆಗಳಿಗೆ ಸರಿಯಾಗಿ ಮಾಹಿತಿ ತರದೇ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಸದಸ್ಯರಾದ ಮಂಜುಳ, ಅನಿತಾ, ಮುನೇಗೌಡ, ತಾಪಂ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಲಕ್ಷ್ಮಮ್ಮ ಆಂಜನಪ್ಪ, ಕಾರ್ಯ ನಿರ್ವಹಣಾಧಿಕಾರಿ ಗಣಪತಿ ಸಾಕ್ರೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.