ಕೋಲಾರ

ಪೊಲೀಸರಿಗೆ ಸಹಕಾರ ಅಗತ್ಯ

Published On :

ಕೋಲಾರ: ಸಾರ್ವಜನಿಕರ ಆಸ್ತಿ ರಕ್ಷಣೆಗಾಗಿ ತಮ್ಮ ಬದುಕನ್ನು ಮುಡುಪಾಗಿಡುವ ಪೊಲೀಸರಿಗೆ ನೈತಿಕ ಸ್ಥೈರ್ಯ ತುಂಬುವುದು ಹಾಗೂ ಸಹಕಾರ ನೀಡುವುದು ನೆಮ್ಮಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಕವಾಯತು ವಂದನೆ ಸ್ವೀಕರಿಸಿ ಮಾತನಾಡಿದ ಅವರು,ಪೊಲೀಸರು ಸಮಾಜಕ್ಕಾಗಿ ಶ್ರಮಿಸುತ್ತಿರುವುದರಿಂದ ನಾವು ಇವರಿಗೆ ಚಿರಋಣಿಗಳಾಗಿರಬೇಕೆಂದರು. ಜನರ ಒಳತಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಪೊಲೀಸರನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಇತರರಿಗೂ ಉತ್ತಮ ರೀತಿಯಲ್ಲಿ ಕೆಲಸ ಮಾಡುವುದಕ್ಕೆ ಪ್ರೇರಣೆ ಸಿಗುತ್ತದೆ ಎಂದರು.
ನಿವೃತ್ತ ಪೊಲೀಸ್ ಅಧಿಕಾರಿ ವಿ.ಎಂ. ಸೊಣ್ಣಪ್ಪ ಧ್ವಜಾರೋಹಣ ಮತ್ತು ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಸಮಾಜದ ರಕ್ಷಣೆ ಮಾಡುವಾಗ ಸಾಕಷ್ಟು ಪೊಲೀಸ್ ಅಧಿಕಾರಿಗಳು ಕೈ-ಕಾಲುಗಳನ್ನು ಕಳೆದುಕೊಂಡು ಮಾನಸಿಕ ತೊಂದರೆ ಅನುಭವಿಸುತ್ತಿದ್ದು, ಇಂತಹವರಿಗೆ ಸರ್ಕಾರ ಇನ್ನು ಹೆಚ್ಚಿನ ಸವಲತ್ತುಗಳನ್ನು ನೀಡಬೇಕೆಂದರು.
ನಿವೃತ್ತ ಪೊಲೀಸರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಲು, ವಾಸಕ್ಕೆ ಸ್ವಂತ ಮನೆ ಇಲ್ಲವೇ ನಿವೇಶನ ಹೊಂದಲು ಕಷ್ಟವಾಗುತ್ತಿದೆ. ಸರ್ಕಾರ ನಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿ ಮೀಸಲಾತಿ ಕಲ್ಪಿಸಬೇಕು. ಪೊಲೀಸ್ ಇಲಾಖೆಗೆ ಸೇರುವವರಿಗೆ ಕಾಲಕಾಲಕ್ಕೆ ಬಡ್ತಿ ನೀಡಬೇಕು, ಬೇರೆ ರಾಜ್ಯಗಳ ಮಾದರಿಯಲ್ಲಿ ಪೊಲೀಸ್ ಸಿಬ್ಬಂದಿಯ ಸಮವಸ್ತ್ರ, ಕ್ಯಾಪ್‌ಗಳನ್ನು ಬದಲಾಯಿಸಬೇಕು ಎಂದ ಅವರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಇಲಾಖೆಯ ನೌಕರರ ಭರವಸೆಗಳನ್ನು ಈಡೇರಿಸಬೇಕು ಎಂದರು.
ಡಿವೈಎಸ್ಪಿ ಕೆ. ಅಶೋಕ ಕುಮಾರ್ ವರದಿ ವಾಚಿಸಿ ಧ್ವಜದಿನಾಚರಣೆ ಅಂಗವಾಗಿ ಪ್ರತಿ ವರ್ಷ ಪೊಲೀಸ್ ಧ್ವಜಗಳನ್ನು ಮುದ್ರಿಸಿ ಇವುಗಳನ್ನು ಗಣ್ಯವಕ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಿಸಿ ಧ್ವಜ ಸಮಾರಂಭದ ವಂತಿಕೆಯ ಮೊತ್ತವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಯ ಉಳಿತಾಯ ಖಾತೆಯಲ್ಲಿ ಜಮಾ ಮಾಡಲಾಗುವುದು ಎಂದು ತಿಳಿಸಿದರು.
ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಯ ಉಳಿತಾಯ ಖಾತೆಯಲ್ಲಿ ರು. 1,32.334 ಉಳಿಕೆಯಿದೆ. ಕಳೆದ ವರ್ಷ ಧ್ವಜಗಳ ಮಾರಾಟದಿಂದ ರು. 1,09,400 ಸಂಗ್ರಹಿಸಲಾಗಿದ್ದು ಇದರಲ್ಲಿ ರು. 54700 ಕಲ್ಯಾಣ ನಿಧಿಗೆ ಜಮಾ ಮಾಡಲಾಗಿದೆ. ಕಳೆದ ವರ್ಷದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಅಂತ್ಯ ಸಂಸ್ಕಾರಕ್ಕಾಗಿ ರು. 15 ಸಾವಿರ  ಮತ್ತು 18 ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ ರು. 88,195 ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಈ ವರ್ಷ ನಿವೃತ್ತರಾದ 19 ಮಂದಿ ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಡಿ.ಕೆ. ರವಿ. ಜಿಲ್ಲಾ ರಕ್ಷಣಾಧಿಕಾರಿ ಅಜಯ್ ಹಿಲೋರಿ ಸನ್ಮಾನಿಸದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಮೀಲ್, ಗೃಹರಕ್ಷಕ ದಳದ ಕಮ್ಯಾಂಡರ್ ಮರಿಸ್ವಾಮಿ, ರೆಡ್ ಕ್ರಾಸ್ ಸಂಸ್ಥೆಯ ವಿ.ಪಿ. ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.