ಕನ್ನಡ ನಾಡಿನ ಸಾಕ್ಷಿಪ್ರಜ್ಞೆ ಡಾ.ರಾಜ್
ಕನ್ನಡಪ್ರಭ ವಾರ್ತೆ, ಕೋಲಾರ, ಏ.24
ಕನ್ನಡ ಚಿತ್ರ ರಂಗದ ಮೇರು ನಟ, ಪದ್ಮಭೂಷಣ ಡಾ.ರಾಜ್ಕುಮಾರ್ ಅವರಿಗೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಡಾ.ರಾಜ್ ಅಭಿಮಾನಿಗಳು ಕೇಂದ್ರ ಸರ್ಕಾರವನ್ನು ಒಕ್ಕೊರಲಿನಿಂದ ಒತ್ತಾಯಿಸಿದರು.
ನಗರದ ಗಾಂಧಿ ಚೌಕದಲ್ಲಿ ಗುರುವಾರ ಜಿಲ್ಲಾ ಕನ್ನಡ ಪರ ಸಂಘಟನೆಗಳ ಒಕ್ಕೂಟ ಮತ್ತು ಜಿಲ್ಲಾ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ.ರಾಜ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರರಾದ ವಕೀಲ ಕೆ.ಆರ್.ಧನರಾಜ್,ಅ.ಕೃ. ಸೋಮಶೇಖರ್, ಕಲಾವಿದ ವಿಷ್ಣು, ಜಯದೇವ ಪ್ರಸನ್ನ, 'ಕನ್ನಡ ಚಿತ್ರರಂಗದ ಧ್ರವತಾರೆ ಡಾ.ರಾಜಕುಮಾರ್ ಕೇವಲ ಚಿತ್ರನಟರಾಗಿ ಮಾತ್ರವಲ್ಲದೆ ಕನ್ನಡನಾಡು, ನುಡಿಯ ಅಭಿವೃದ್ಧಿಗಾಗಿ ಶ್ರಮಿಸಿದ ಧೀಮಂತ ಕನ್ನಡ ಹೋರಾಟಗಾರ. ಇವರ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ಕೂಡಲೇ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು' ಎಂದು ಆಗ್ರಹಿಸಿದರು.
ಡಾ. ರಾಜ್ ಹೆಸರಿಡಿ: ಕೋಲಾರದ ಸರ್ಕಾರಿ ಕಿರಿಯ ಕಾಲೇಜಿನ ಪಕ್ಕದಲ್ಲಿ ನಿರ್ಮಿಸಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜ್ ಅವರ ಹೆಸರಿಡಬೇಕೆಂದು ಕಳೆದ ಎರಡು ವರ್ಷಗಳಿಂದ ಜಿಲ್ಲಾ ಆಡಳಿತವನ್ನು ಒತ್ತಾಯಿಸುತ್ತಾ ಬಂದಿದ್ದೇವೆ. ತಾತ್ವಿಕವಾಗಿ ಒಪ್ಪಿದ್ದ ಅಧಿಕಾರಿಗಳು ಭರವಸೆ ಈಡೇರಿಸಿಲ್ಲ. ಕ್ರೀಡಾಂಗಣಕ್ಕೆ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಎಂದು ಹೆಸರಿಟ್ಟು ನಾಮಫಲಕ ಬರೆಸಿದ್ದು, ಲೋಕಸಭಾ ಚುನಾವಣೆಯ ಬಳಿಕ ಜಿಲ್ಲಾಡಳಿತ ಡಾ.ರಾಜ್ ಒಳಾಂಗಣ ಕ್ರೀಡಾಂಗಣ ಎಂದು ನಾಮಕರಣ ಮಾಡಿ ನಾಮಫಲಕ ಬರೆಸದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
ಕನ್ನಡ ಹೋರಾಟಗಾರ ಮಾಲೂರಿನ ಸಿದ್ದಪ್ಪ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕೆ.ಎಸ್.ಗಣೇಶ್ ಅವರಿಗೆ ಡಾ.ರಾಜ್ ಹೆಸರಿನಲ್ಲಿ ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಆರ್. ತ್ಯಾಗರಾಜ್, ಕರ್ನಾಟಕ ರಕ್ಷಣಾ ಸಮಿತಿಯ ಎಂ.ಆರ್. ಚೇತನ್ಬಾಬು, ಬಂಗಾರಪೇಟೆ ಶ್ರೀನಿವಾಸ್, ಕೋ.ನಾ.ಪ್ರಭಾಕರ್, ನಾ.ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

