ಆರ್ಥಿಕ ನಿರ್ವಹಣೆಯಲ್ಲಿ ಕಾಂಗ್ರೆಸ್ ವಿಫಲ
ಕೋಲಾರ: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಿಫಲವಾಗಿರುವುದರಿಂದ ಬಡವರು, ಸಾಮಾನ್ಯ ವರ್ಗದವರು ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ ಎಂದು ಬಿಜೆಪಿಯ ಮುಖಂಡ ಕಟ್ಟಾಸುಬ್ರಮಣ್ಯಂ ನಾಯ್ಡು ಆರೋಪಿಸಿದರು.
ನಗರದ ಚೊಕ್ಕ ಸಭಾಂಗಣದಲ್ಲಿ ಭಾನುವಾರ ಬಿಜೆಪಿಯ ಅಹಿಂದ ಮೋರ್ಚದಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ವಾಜಪೇಯಿ ಅವರು 23 ಪಕ್ಷಗಳ ಮೈತ್ರಿಯ ಎನ್ಡಿಎ ಸರ್ಕಾರದಲ್ಲಿ ಪ್ರಧಾನಿ ಆಗಿದ್ದಾಗ ದೇಶದ ಬಡಜನತೆಗೆ ಹೊರೆಯಾಗದ ರೀತಿಯಲ್ಲಿ ಆರ್ಥಿಕ ನೀತಿಗಳನ್ನು ಜಾರಿಗೆ ತಂದಿದ್ದರು ಎಂದರು.
ಆರ್ಥಿಕ ತಜ್ಞರೇ ಆಗಿರುವ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ದೇಶದ ಆರ್ಥಿಕ ಪರಿಸ್ಥಿತಿ ಹಾಳಾಗುತ್ತಿರುವುದು ಗೊತ್ತಿದ್ದರೂ ಕಾಂಗ್ರೆಸ್ ವರಿಷ್ಠರ ಕಪಿಮುಷ್ಠಿಯಲ್ಲಿ ಸಿಕ್ಕಿರುವುದರಿಂದ ಸುಧಾರಣೆ ತರಲು ಸಾಧ್ಯವಾಗುತ್ತಿಲ್ಲವೆಂದು ಟೀಕಿಸಿದರು.
ಈ ಬಾರಿ ನರೇಂದ್ರ ಮೋದಿ ಪರ ದೇಶದ ಎಲ್ಲೆಡೆ ಗಾಳಿ ಬೀಸುತ್ತಿದೆ, ಮೋದಿ ಪ್ರಧಾನಿ ಆದಲ್ಲಿ ಗುಜರಾತ್ ಮಾದರಿಯಲ್ಲಿ ದೇಶದ ಪ್ರತಿಯೊಂದು ರಾಜ್ಯಗಳ ಅಭಿವೃದ್ಧಿ ಆಗುತ್ತದೆ, ಎಲ್ಲ ವರ್ಗಗಳ ಹಿತ ಕಾಪಾಡುತ್ತಾರೆಂಬ ವಿಶ್ವಾಸವನ್ನು ಮತದಾರರು ಹೊಂದುತ್ತಿರುವುದರಿಂದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಖಚಿತವೆಂದರು. ಬಿಜೆಪಿಯಲ್ಲಿರುವ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರು ಒಗ್ಗಟ್ಟಿನಿಂದ ಕೆಲಸ ಮಾಡಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು, ಮೋದಿ ಪ್ರಧಾನಿಯಾದಲ್ಲಿ ಖಂಡಿತ ದೇಶ ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಹಿಂದ ವರ್ಗದಲ್ಲಿ ಬಿಜೆಪಿಯ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಮೂಡಿಸಲು ಫೆ.23 ರಂದು ತುಮಕೂರಿನಲ್ಲಿ ಅಹಿಂದ ಸಮಾವೇಶ ನಡೆಸಲಾಗುತ್ತಿದ್ದು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ವರ್ಗದವರು ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಬಿಜೆಪಿಯು ಕೇಂದ್ರದಲ್ಲಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಸಹಾಯ ಮಾಡುವಂತೆ ಕೋರಿದರು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಶಾಸಕಿ ವೈ. ರಾಮಕ್ಕ, ಮಾಜಿ ಶಾಸಕ ವೈ. ಸಂಪಂಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೃಷ್ಣಾರೆಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ,ಬಿಬಿಎಂಪಿ ಸದಸ್ಯ ಶಿವಕುಮಾರ್, ಹಿರಿಯ ಮುಖಂಡ ವಿ. ಹನುಮಪ್ಪ, ಪದ್ಮ ಮುಖ್ಯಮಂತ್ರಿ ಚಂದ್ರು, ಜಯಕೃಷ್ಣ, ರವೀಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

