ಕೋಲಾರ

ಚಿಕ್ಕಬಳ್ಳಾಪುರ ಲೋಕಸಭೆಗೆ ಬಿ.ಎನ್. ಬಚ್ಚೇಗೌಡ ಬಿಜೆಪಿ ಅಭ್ಯರ್ಥಿ?

Published On :

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಸಂಭವನೀಯ ಅಭ್ಯರ್ಥಿ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ತಮ್ಮ ಹಾಜರಿಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಕ್ಷೇತ್ರದ ದೇವ ಮೂಲೆ ಎಂಬ ಭಾವನೆಯಲ್ಲಿ ಎರಡ್ಮೂರು ದಿನಗಳ ಹಿಂದೆ ಬಾಗೇಪಲ್ಲಿ ತಾಲೂಕಿನ ವಿವಿಧ ದೇಗುಲಗಳಿಗೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ ನಂತರ ಅಲ್ಲಲ್ಲಿ ಪ್ರಮುಖ ಮುಖಂಡರನ್ನೊಳಗೊಂಡಂತೆ ಸಭೆಗಳನ್ನು ನಡೆಸಿದ್ದು ಇನ್ನೂ ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಬಿಜೆಪಿ ತಿಳಿಸಿರುವುದರ ನಡುವೆ ಚುನಾವಣಾ ಪ್ರಚಾರಕ್ಕೆ ಮುಂದಡಿಯಿಟ್ಟಿದ್ದಾರೆ.
ಬಚ್ಚೇಗೌಡರ ಫ್ಲೆಕ್ಸ್, ಬ್ಯಾನರುಗಳು ಈಗಾಗಲೇ ಎಲ್ಲೆಡೆ ರಾರಾಜಿಸುತ್ತಿವೆ. ಇದರಿಂದ ಬಿ.ಎನ್ .ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ ಎಂಬ ಮಾತುಗಳಿಗೆ ಪುಷ್ಟಿ ಸಿಕ್ಕಿದೆ.
ತಾಲೂಕಿನ ಆವಲಗುರ್ಕಿ ಮತ್ತು ಅಗಲಗುರ್ಕಿ ಗ್ರಾಮದಲ್ಲಿ ರ್ಯಾಲಿಗಳನ್ನು ನಡೆಸಿದ ಬಚ್ಚೇಗೌಡ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ದೇಶದ ಪ್ರಧಾನಿಯನ್ನಾಗಿಸಲು ಬಿಜೆಪಿಗೆ ಮತವನ್ನು ಹಾಕಬೇಕೆಂದು ಕೋರಿದರು.   
ಮಂಗಳೂರು ಕಡೆಯ ಜನರಿಂದ ಮೂರು ಬಾರಿ ಚುನಾವಣೆಯಲ್ಲಿ ಸೋಲಿನ ರುಚಿಯನ್ನೇ ಕಂಡಿದ್ದ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವಾಗ ಸ್ವಯಂ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಅದರ 18 ಅಂಶಗಳಲ್ಲಿ ವಿಶ್ವ ಬ್ಯಾಂಕಿನಿಂದ ಹಣ ತಂದು ಈ ಭಾಗದ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ತುಂಬಿಸುತ್ತೇನೆ. ಕ್ಷೇತ್ರದಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ ಮಾಡುತ್ತೇನೆ ಎಂದೆಲ್ಲಾ ಹೇಳಿದರು. ಆದರೆ, ಇದುವರೆಗೂ ಅವರು ಮಾತು ಉಳಿಸಿಕೊಂಡಿಲ್ಲ ಎಂದು ಆರೋಪಿಸಿದರು.
ಕೇಂದ್ರದಲ್ಲಿ ವಾಜಪೇಯಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 5 ಲಕ್ಷ ಕೋಟಿ ಬಜೆಟ್ ಮಂಡಿಸಿ ದೇಶದಲ್ಲಿ ನದಿ ಜೋಡಣೆ ಮಾಡಲು ಮುಂದಾಗಿದ್ದರು. ಆದರೆ ನಂತರ ಬಂದ ಕಾಂಗ್ರೆಸ್ ಸರ್ಕಾರ ಅದನ್ನು ಮೂಲೆಗುಂಪು ಮಾಡಿತು ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಯಿಂದ ಅವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿದೆ. ಬೆಲೆ ನಿಯಂತ್ರಣ ಮಾಡಲು ಅದರಿಂದಾಗುತ್ತಿಲ್ಲ. ಜೊತೆಗೆ ಜಗತ್ತು ದೇಶದ ಕಡೆ ನೋಡುವಷ್ಟು ಭ್ರಷ್ಟಾಚಾರವನ್ನು ನಡೆಸಿದೆ ಎಂದ ಅವರು,ದೇಶದ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ನರೇಂದ್ರ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕೆಂದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್‌ಜೀ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಮಂಜುನಾಥ್, ಜಿಲ್ಲೆಯ ಉಸ್ತುವಾರಿ ರವೀಂದ್ರ, ತಾಲೂಕು ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಮುಖಂಡರಾದ ಎ.ವಿ. ಬೈರೇಗೌಡ, ಕೃಷ್ಣಾರೆಡ್ಡಿ, ಪ್ರೇಮಲೀಲಾ ವೆಂಕಟೇಶ್, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ತಮ್ಮೇಶ್ ಗೌಡ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.