ಕೋಲಾರ

ಡೀಮ್ಡ್ ವಿವಿಗಳಲ್ಲಿ ಮೀಸಲಾತಿಗೆ ಒತ್ತಾಯ

Published On :

ಕೋಲಾರ: ಸರ್ಕಾರದ ಜತೆಗಿನ ಒಪ್ಪಂದದ ಅನ್ವಯ ಡೀಮ್ಡ್ ವಿವಿಗಳು ವೈದ್ಯ, ದಂತ ವೈದ್ಯ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಸೀಟುಗಳನ್ನು ಹಸ್ತಾಂತರಿಸದೇ ಇರುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕೆ.ಎನ್. ಸುರೇಶ್ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದ ಎಲ್ಲಾ ಡೀಮ್ಡ್ ವಿವಿಗಳಲ್ಲಿ ಮೀಸಲಿದ್ದ ಶೇ.25 ರಷ್ಟು ಸೀಟುಗಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ಕಳೆದ 1986 ಕೋಲಾರದಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. 2007ರಿಂದ ಈ ಕಾಲೇಜು ಡೀಮ್ಡ್ ವಿವಿಯಾದಾಗಿನಿಂದ ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸಲು ಜಿಲ್ಲೆಗೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿಗಾಗಿ ಸರ್ಕಾರದ ಗಮನಕ್ಕೆ ತರಲಾಗಿತ್ತಾದರೂ ಬಜೆಟ್ನಲ್ಲಿ ಬೇಡಿಕೆ ಈಡೇರಿಸಿಲ್ಲವೆಂದು ದೂರಿದ್ದಾರೆ. ಕಳೆದ 7 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು ಎಲ್ಲಾ ರೀತಿಯಲ್ಲೂ ಹಿಂದುಳಿದಿರುವ ಕೋಲಾರ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಕೂಡಲೇ ರಾಜ್ಯದ ಎಲ್ಲಾ ಡೀಮ್ಡ್ ವಿವಿಗಳಲ್ಲಿ ಶೇ.25ರಷ್ಟು ಮೀಸಲಾತಿಯನ್ನು ಕಲ್ಪಿಸುವಂತೆ ಸೂಚಿಸಬೇಕೆಂದು, ಕೋಲಾರ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
'ವಾಲ್ಮೀಕಿ ಜನಾಂಗ ಜೆಡಿಎಸ್ ಸ್ವತ್ತಲ್ಲ'
ಕೋಲಾರ: ವಾಲ್ಮೀಕಿ ಜನಾಂಗದ ಕೆಲ ಮುಖಂಡರು ಜೆಡಿಎಸ್ ಪರ ಹೇಳಿಕೆ ನೀಡಿದ ಮಾತ್ರಕ್ಕೆ ಇಡೀ ಸಮುದಾಯ ಜೆಡಿಎಸ್ ಸ್ವತ್ತು ಆಗುವುದಿಲ್ಲವೆಂದು ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ಎಚ್.ಎಂ. ತಿಮ್ಮರಾಯಪ್ಪ ತಿರುಗೇಟು ನೀಡಿದ್ದಾರೆ. ತಾಲೂಕಿನ ಅಮ್ಮೇರಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎಸ್.ಟಿ. ಮೋರ್ಚಾ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ ಸಮುದಾಯ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ವಾಲ್ಮೀಕಿ ಜಯಂತಿಗೆ ರಜೆ ಘೋಷಣೆ, ವಾಲ್ಮೀಕಿ ಸಮುದಾಯ ಭವನ ನಿರ್ಮಾಣ, ವಾಲ್ಮೀಕಿ ಸಮುದಾಯ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಜನಾಂಗಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆಂದು ತಿಳಿಸಿದ್ದಾರೆ. ಸಮುದಾಯದ ಕೆಲವೇ ಮುಖಂಡರು ವಾಲ್ಮೀಕಿ ಜನಾಂಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸುತ್ತದೆ ಎಂದು ಹೇಳಿಕೆ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅವರು, ಸಮುದಾಯಕ್ಕೆ ಸಹಾಯ ಮಾಡಿರುವವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ. ಎಸ್.ಟಿ. ಮೋರ್ಚಾ ತಾಲೂಕು ಅಧ್ಯಕ್ಷ ರವಿ, ಜಿಲ್ಲಾ ಉಪಾಧ್ಯಕ್ಷ ಮುನಿಸಾದಮ್ಮ, ನಾರಾಯಣಪ್ಪ, ಮುರಳಿ, ನಾರಾಯಣಸ್ವಾಮಿ, ದೇವರಾಜ್, ನಾರಾಯಣಮ್ಮ, ಮುನಿಯಪ್ಪ, ಕೃಷ್ಣ, ಉದಯ್ ಕುಮಾರ್, ಅಪ್ಪೋಜಪ್ಪ, ಇದ್ದರು.
ಅಧ್ಯಕ್ಷರ ಆಯ್ಕೆ
ಶ್ರೀನಿವಾಸಪುರ: ಗುರುವಾರ ನಡೆದ ತಾಲೂಕಿನ ಕಸಬಾ ಹೋಬಳಿಯ ಆಲವಾಟ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ವಿ. ವೆಂಕಟರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್.ಜಿ. ಗೋಪಾಲಕೃಷ್ಣಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.