ಕೋಲಾರ

ರಾಜೀವ್ ಹತ್ಯೆ ಅಪರಾಧಿಗಳ ಬಿಡುಗಡೆ ಬೇಡ

Published On :

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಿಡುಗಡೆಗೊಳಿಸಲು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮುಂದಾಗಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ಪ್ರವಾಸಿ ಮಂದಿರದಿಂದ ಜಯಲಲಿತಾ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಕೆಲ ಸಮಯ ರಸ್ತೆ ತಡೆ ನಡೆಸಿದರು. ಜಯಲಲಿತಾರವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿಯವರು ತಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದ ಪ್ರಧಾನಿಗಳಲ್ಲಿ ಪ್ರಮುಖರು. ಇಂತಹ ವ್ಯಕ್ತಿಯನ್ನು ಎಲ್ ಟಿ ಟಿಇ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಬಾಂಬ್ ಸ್ಫೋಟಿಸಿ ಕೊಂದು ಹಾಕಿದರು. ಇವರಿಗೆ ಶಿಕ್ಷೆ ವಿಧಿಸಿ ಭಯೋತ್ಪಾದನೆಯನ್ನು ಮಟ್ಟ ಹಾಕಬೇಕಾಗಿತ್ತು. ಈ ನಡುವೆ ಸರ್ವೋಚ್ಛ ನ್ಯಾಯಾಲಯ ಹಂತಕರಿಗೆ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದ್ದು ಇಂತಹ ಸಮಯದಲ್ಲಿ ಚುನಾವಣೆಯ ಗಿಮಿಕ್ಗಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹಂತಕರನ್ನು ಬಂಧನ ಮುಕ್ತಗೊಳಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿಯನ್ನು ಕೊಂದ ಹಂತಕರಿಗೆ ಕಠಿಣ ಶಿಕ್ಷೆ ನೀಡದೇ ಬಿಡುವುದರಿಂದ ಮುಂದಿನ ದಿನಗಳಲ್ಲಿ ಅನೇಕ ದುರುಳರು ದೇಶ ವಿರೋಧಿಗಳಾಗಿ ನಡೆದುಕೊಳ್ಳುವಲ್ಲಿ ಹಿಂಜರಿಯುವುದಿಲ್ಲ. ಮಹಾನ್ ವ್ಯಕ್ತಿಗಳನ್ನು ಕೊಂದರೂ ಸಹ ಕಠಿಣ ಶಿಕ್ಷೆಯಾಗುವುದಿಲ್ಲ ಎಂಬ ಭಾವನೆ ಬರುತ್ತದೆ. ಈ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿಯವರನ್ನು ಕೊಂದಂತಹವರನ್ನು ಬಿಡುಗಡೆ ಮಾಡಬಾರದು. ಈ ಮೂಲಕ ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜಯಲಲಿತಾರವರು ರಾಜಕೀಯ ಮಾಡುವುದನ್ನು ಬಿಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಕಾರ್ಯಕರ್ತರಾದ ವೆಂಕಟೇಶ್, ಜೀಯಾವುಲ್ಲಾ, ಖೈಜರ್, ಅರುಣಕುಮಾರ್ ಮುಂತಾದವರು ಭಾಗವಹಿಸಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.