ಎತ್ತಿನಹೊಳೆಗೆ ಮತ್ತೆ ವಿರೋಧ
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಎತ್ತಿನಹೊಳೆ ಯೋಜನೆಗೆ ಮಾ.3 ರಂದು ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿರುವುದರ ನಡುವೆ ಶಾಶ್ವತ ನೀರಾವರಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ತಾಂತ್ರಿಕ ದೋಷಗಳು ಮತ್ತು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಯದೇ ಏಕಾಏಕಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.
ಬಯಲು ಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕುಸಿಯುತ್ತಿರುವ ಅಂತರ್ಜಲ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದು ಫ್ಲೋರೈಡ್ ನೀರನ್ನು ಅನಿವಾರ್ಯವಾಗಿ ಈ ಭಾಗದ ಜನರು ಸೇವನೆ ಮಾಡಬೇಕಾಗಿರುವುದು ಗಂಭೀರ ಸಮಸ್ಯೆಯಾಗಿದೆ. ಇದರಿಂದ ಕುಡಿಯುವ ನೀರಿನ ಸರಬರಾಜು ಮತ್ತು ಕೆರೆಗಳನ್ನು ತುಂಬಿಸಲು ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸಬೇಕೆಂದು ಕಳೆದೊಂದು ದಶಕದಿಂದ ನೀರಾವರಿ ಹೋರಾಟಗಾರರು ನಾನಾ ರೀತಿಯಲ್ಲಿ ಹೋರಾಟ ಮಾಡುತ್ತಿದ್ದು 200 ಟಿಎಂಸಿ ನೀರನ್ನು ಒದಗಿಸುವ ಡಾ. ಪರಮಶಿವಯ್ಯನವರ ವರದಿಯಾಧಾರಿತ ನೀರಾವರಿ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರ ಮಧ್ಯೆ ರಾಜ್ಯ ಸರ್ಕಾಕಾರ ಹಾಸನದ ಸಕಲೇಶಪುರದಿಂದ ಎತ್ತಿನಹೊಳೆ ಯೋಜನೆಯ ಮೂಲಕ ಈ ಭಾಗಗಳಿಗೆ 24 ಟಿಎಂಸಿ ನೀರನ್ನು ಕೊಡಲು ಮುಂದಾಗಿದೆ. ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇತ್ತ ಶಾಶ್ವತ ನೀರಾವರಿ ಹೋರಾಟಗಾರರು ಸಾಧಕ ಬಾಧಕಗಳ ಬಗ್ಗೆ ಚರ್ಚೆಚೆ ನಡೆಸದೇ ಏಕಾಏಕಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಎತ್ತಿನಹೊಳೆ ಯೋಜನೆಯ 3 ಸಾವಿರ ಕೋಟಿ ರು. ವೆಚ್ಚದ ಮೊದಲ ಹಂತದ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾ.3 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಭರವಸೆ ನೀಡಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾಕಾರ ಎತ್ತಿನಹೊಳೆ ಯೋಜನೆ ಜಾರಿಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೇ ಜನರ ದಿಕ್ಕು ತಪ್ಪಿಸುವ ನಿರ್ಧಾರವನ್ನು ಕೈಗೊಂಡಿದೆ. ಸಂಬಂಧಪಟ್ಟ ಜಿಲ್ಲೆಗಳ ಜನಪ್ರತಿನಿಧಿಗಳು, ನೀರಾವರಿ ಹೋರಾಟಗಾರರನ್ನು ಕರೆದು ಸಭೆಯನ್ನೇ ನಡೆಸಿಲ್ಲ. ಅಲ್ಲದೇ ಎತ್ತಿನಹೊಳೆ ಯೋಜನೆಯ ಬಗ್ಗೆ ಇರುವ ತಾಂತ್ರಿಕ ದೋಷಗಳನ್ನು ಬಗೆಹರಿಸುವ ಗೋಜಿಗೆ ಹೋಗುತ್ತಿಲ್ಲ. ಬದಲಿಗೆ ಸ್ವಾರ್ಥ ಲಾಭಕ್ಕಾಗಿ ಕೇವಲ ಶಂಕುಸ್ಥಾಪನೆ ನೆರವೇರಿಸುವ ಕೆಲಸಕ್ಕೆ ಮುಂದಾಗಿದೆ ಎಂದು ನೀರಾವರಿ ಹೋರಾಟಗಾರರು ಆರೋಪಿಸಿದ್ದಾರೆ. ಎತ್ತಿನಹೊಳೆ ಯೋಜನೆಗೆ ನಾವು ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ. ಡಾ. ಪರಮಶಿವಯ್ಯನವರ ವರದಿಯ ಜೊತೆಗೆ ಯಾವುದೇ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಿ, ಪ್ರಮುಖವಾಗಿ ಎತ್ತಿನಹೊಳೆ ಯೋಜನೆಯಿಂದ ಲಭ್ಯವಾಗುವ ನೀರಿನ ಪ್ರಮಾಣ, ಎದುರಾಗುವ ಸಮಸ್ಯೆಗಳು, ತಾಂತ್ರಿಕ ವರದಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜನರಿಗೆ ಸ್ಪಷ್ಟವಾಗಿ ತಿಳಿಸಿ ಗೊಂದಲ ಬಗೆಹರಿಸಬೇಕು. ಇದಕ್ಕಾಗಿ ಕರಾವಳಿ ಮತ್ತು ಬಯಲುಸೀಮೆ ಜಿಲ್ಲೆಗಳು ಸೇರಿದಂತೆ ಎರಡೂ ಭಾಗದ ಜನರ ಸಭೆಯನ್ನು ಕರೆದು ಚರ್ಚೆ ನಡೆಸಲಿ, ಅದು ಬಿಟ್ಟು ನೀರಾವರಿ ರಾಜಕೀಯ ಮಾಡಲು ಮುಂದಾದರೆ ಸಹಿಸುವುದಿಲ್ಲ. ಈ ಹಿಂದೆ ಜ.31 ರಂದು ಶಂಕುಸ್ಥಾಪನೆಗೆ ಮುಂದಾದಾಗ ಮುಖ್ಯಮಂತ್ರಿಗಳ ಜಿಲ್ಲೆಗೆ ಆಗಮಿಸಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ ನಡೆಸಲಾಯಿತು. ಮಾ.3 ರಂದು ಚಿಕ್ಕಬಳ್ಳಾಪುರವಲ್ಲಾ, ಹಾಸನದಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಂದಾದರೂ ಬಿಡುವುದಿಲ್ಲ ಎಂದು ಚಿಕ್ಕಬಳ್ಳಾಪುರ ಸಿಟಿಜನ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನೀರಾವರಿ ಹೋರಾಟಗಾರರಾದ ಸುಷ್ಮಾ ಶ್ರೀನಿವಾಸ್, ಚಲಪತಿ, ಸು.ಧಾ. ವೆಂಕಟೇಶ್, ಚಲಪತಿ, ಬಿ.ಎಚ್. ನರಸಿಂಹಯ್ಯ, ಶ್ರೀನಿವಾಸ್, ಯಲುವಹಳ್ಳಿ ಸೊಣ್ಣೇಗೌಡ, ಮಳ್ಳೂರು ಹರೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

