ಕೋಲಾರ

ಮಾನಸಿಕ ಬೆಳವಣಿಗೆಗೆ ಯೋಗ ಸಹಕಾರಿ

Published On :

ಚಿಕ್ಕಬಳ್ಳಾಪುರ: ಯೋಗಾಭ್ಯಾಸ ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆಯ ಜೊತೆಗೆ ಸದೃಢತೆಯನ್ನು ಸಾಧಿಸುವಲ್ಲಿ ಸಹಕಾರಿ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಅಭಿಪ್ರಾಯಪಟ್ಟರು.
ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದೊಂದಿಗೆ ಆಯುಷ್ ಇಲಾಖೆ ಶಿಡ್ಲಘಟ್ಟ ತಾಲೂಕಿನ ಶಿಕ್ಷಕರಿಗಾಗಿ ಆಯೋಜಿಸಿದ್ದ 7 ದಿವಸಗಳ ಶಿಕ್ಷಕರಿಗೆ ಯೋಗ, ಆರೋಗ್ಯ ಪ್ರಶಿಕ್ಷಣ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿ, ವ್ಯಕ್ತಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢನಾಗಿದ್ದಲ್ಲಿ ತನ್ನ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಭಾರತವು ಸಹಸ್ರಾರು ವರ್ಷಗಳಿಂದ ಪಾರಂಪರಿಕ ಔಷಧ ಶಾಸ್ತ್ರಕ್ಕೆ ಪ್ರಖ್ಯಾತವಾಗಿದ್ದು,ಆಯುರ್ವೇದದಲ್ಲಿ ಎಲ್ಲ ರೋಗಗಳಿಗೆ ಪರಿಹಾರವಿದೆ.ಈಗ ಆಯುರ್ವೇದ ಶಾಸ್ತ್ರವು ವಿಶ್ವಮಾನ್ಯತೆಯನ್ನು ಪಡೆಯುವ ಹಂತದಲ್ಲಿದೆಯೆಂದು ತಿಳಿಸಿದರು.
ಅಮೆರಿಕಾದಂತಹ ಮುಂದುವರಿದ ರಾಷ್ಟ್ರವೂ ಇತ್ತೀಚಿನ ದಿನಗಳಲ್ಲಿ ಆಯುರ್ವೇದ ಔಷಧ ಶಾಸ್ತ್ರ ಕುರಿತಂತೆ ಅನೇಕ ಸಂಶೋಧನೆಗಳನ್ನು ನಡೆಸುತ್ತಿದ್ದು ಇದು ಆಯುರ್ವೇದ ಶಾಸ್ತ್ರದ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ತಿಳಿಸಿದರು.
ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಮಾತನಾಡಿ, ಪಾಶ್ಚಾತ್ಯರು ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ, ನಡೆನುಡಿಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಆದರೆ, ಭಾರತೀಯರು ಪಾಶ್ಚಾತ್ಯ ಸಂಸ್ಕೃತಿಯತ್ತ ಒಲವು ತೋರುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಯುಷ್ ಇಲಾಖೆಯ ನಿರ್ದೇಶಕ ವಿಜಯಕುಮಾರ್ ಗೋಗಿ, ಯೋಗ ಶಿಕ್ಷಣ ಮಾನವನ ದೈಹಿಕ ಹಾಗೂ ಮಾನಸಿಕ ಶುದ್ಧೀಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ. ಅಜಿತ್ ಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ನಾಗರಾಜಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಸನಾವುಲ್ಲಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.