ಪರಮೇಶ್ವರ್ಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಜ.3
ಬೆಂಗಳೂರು ಅರಮನೆ ಕಿಂಗ್ಸ್ ಕೋರ್ಟ್ ಆವರಣದಲ್ಲಿ ಜ.6 ರಂದು ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಎಸ್ಸಿ ವಿಭಾಗದ ರಾಜ್ಯಾಧ್ಯಕ್ಷ ಎನ್. ಮಂಜುನಾಥ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡು ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಅದೇ ರೀತಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಹ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಶೋಷಿತ ವರ್ಗಗಳ ಅಭಿವೃದ್ಧಿಗೆ ಪಣತೊಟ್ಟು ಶ್ರಮಿಸುತ್ತಿದೆ ಎಂದರು.
ಮೀಸಲಾತಿಯಲ್ಲಿ ಲೋಕಸಭಾ ಸಂಸದರಾಗಿ ಪಕ್ಷದಿಂದ ಆಯ್ಕೆಯಾಗಿರುವವರಿಗ ಕಾಂಗ್ರೆಸ್ ಹೆಚ್ಚಿಗೆ ಸಚಿವ ಸ್ಥಾನವನ್ನು ಕೊಟ್ಟಿರುವುದು. ಅಲ್ಲದೇ ಪರಿಶಿಷ್ಟ ಜಾತಿಗೆ ಸೇರಿದ ಪರಮೇಶ್ವರ್ ಅವರಿಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ರಾಜ್ಯದಲ್ಲಿ ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸುವ ಜವಾಬ್ದಾರಿಯನ್ನು ಕೊಟ್ಟಿರುವುದು ಶೋಷಿತ ವರ್ಗಗಳ ಮೇಲೆ ಪಕ್ಷಕ್ಕಿರುವ ಅಭಿಮಾನವನ್ನು ತಿಳಿಸುತ್ತದೆ ಎಂದರು.
ಪ್ರಸ್ತುತ ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂಬ ಒತ್ತಾಯ ಎಲ್ಲೆಡೆ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಶೋಷಿತ ವರ್ಗಗಳ ಸಂರಕ್ಷಣೆ, ದೌರ್ಜನ್ಯವನ್ನು ತಡೆಯಲು ಈ ಹಿಂದೆ ಸರ್ಕಾರದ ಮಟ್ಟದಲ್ಲಿ ಉಸ್ತುವಾರಿ ಸಮಿತಿಯನ್ನು ರಚಿಸಿದ್ದು ಕೂಡಲೇ ಸಮಿತಿಯ ಸಭೆಯನ್ನು ಕರೆಯಲು ಮುಖ್ಯಮಂತ್ರಿಗಳು ಮುಂದಾಗಬೇಕೆಂದು ಒತ್ತಾಯಿಸಿದರು.
ಜ.6 ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ಅರಮನೆಯ ಕಿಂಗ್ಸ್ ಕೋರ್ಟ್ ಆವರಣದಲ್ಲಿ ನಡೆಯಲಿರುವ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಮಟ್ಟದ ಸಮಾವೇಶವನ್ನು ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆ.ರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ವಹಿಸಲಿದ್ದಾರೆ. ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಗುರುತಿನ ಚೀಟಿ ವಿತರಿಸಲಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಎಂ.ವಿ. ಕೃಷ್ಣಪ್ಪ,ಸಂದೀಪ್ ಚಕ್ರವರ್ತಿ, ಅನಸೂಯಮ್ಮ ನಟರಾಜನ್, ಶ್ರೀನಿವಾಸ್, ಸುಬ್ಬರಾಯಪ್ಪ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

