ಜಿಲ್ಲೆಯಾದ್ಯಂತ ಕಂದಾಯ ಅದಾಲತ್ ವಿಸ್ತರಣೆ
ಕ.ಪ್ರ. ವಾರ್ತೆ ಕೋಲಾರ ಜ.5
ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಂಡ ಕಂದಾಯ ಅದಾಲತ್ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿರುವುದರಿಂದ ಜಿಲ್ಲೆಯಾದ್ಯಂತ ಕಾರ್ಯಕ್ರಮ ವಿಸ್ತರಣೆಗೆ ಜಿಲ್ಲಾಧಿಕಾರಿ ಡಿ.ಕೆ. ರವಿ ನಿರ್ಧರಿಸಿದ್ದಾರೆ.
ಕೋಲಾರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ಕೆ. ರವಿ ಖುದ್ಧಾಗಿ ಭಾಗವಹಿಸಿ ಜನತೆಯ ಅರ್ಜಿಗಳನ್ನು ವಿಲೇವಾರಿ ಮಾಡಲು ಆಸಕ್ತಿ ತೋರಿದ್ದರು. ಇದಕ್ಕೆ ಕಂದಾಯ ಸಚಿವ ಶ್ರೀನಿವಾಸಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬೇರೆ ತಾಲೂಕುಗಳಲ್ಲೂ ಕಂದಾಯ ಅದಾಲತ್ ನಡೆಸಿ ಜನತೆಯ ಬಹುದಿನ ಸಮಸ್ಯೆ ನಿವಾರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ತಿಂಗಳ ಒಳಗೆ ಪ್ರತಿ ತಾಲೂಕಿನ ತಹಶೀಲ್ದಾರ್ ನೇತೃತ್ವದಲ್ಲಿ ಒಂದು ಹೋಬಳಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಕಂದಾಯ ಅದಾಲತ್ ಮುಗಿಸಬೇಕು, ಭೂಮಿ ಸಮಸ್ಯೆ, ಖಾತಾ ಬದಲಾವಣೆ, ಒತ್ತುವರಿ ತೆರವು ಮುಂತಾದ ಸಮಸ್ಯೆಗಳನ್ನು ಬಗೆಹರಿಸಬೇಕು, ಒಂದು ವೇಳೆ ಪ್ರಕರಣಗಳು ನ್ಯಾಯಾಲಯದಲ್ಲಿ ಇದ್ದಲ್ಲಿ ತಮ್ಮ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬಾಕಿ ಉಳಿದಿರುವ ಮಾಲೂರು, ಬಂಗಾರಪೇಟೆ, ಮುಳಬಾಗಿಲು ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ಇನ್ನು 3 ತಿಂಗಳಲ್ಲಿ ಕಂದಾಯ ಅದಾಲತ್ನ್ನು ಮುಗಿಸಿ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ವಿಧವೆ ವೇತನದಾರರಿಗೆ ಮತ್ತು ಪಿಂಚಣಿದಾರರಿಗೆ ಯಾವುದೇ ಕಾರಣಕ್ಕೂ ತೊಂದರೆಯನ್ನು ನೀಡಬೇಡಿ ಎಂದ ಅವರು, ಮರಣ ಪತ್ರವನ್ನು ಕಡ್ಡಾಯ ಮಾಡದೆ ಬಿಳಿ ಹಾಳೆಯಲ್ಲಿ ಬರೆಸಿಕೊಂಡು ಅಥವಾ ಊರಿನಲ್ಲಿ ವಿಚಾರಿಸಿಕೊಂಡು ವಿಧವೆ ವೇತನವನ್ನು ಮಂಜೂರು ಮಾಡಬೇಕು ಎಂದು ತಿಳಿಸಿದರು.
ಪ್ರತಿ ತಾಲೂಕಿನಲ್ಲಿ ಕಂದಾಯ ಅದಾಲತ್ನಲ್ಲಿ ವಿಧವೆ ಮತ್ತು ಪಿಂಚಣಿದಾರರ ಸಮಸ್ಯೆ ಕೇಳಿ ಬಂದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ವಿಧವೆ ಮತ್ತು ಪಿಂಚಣಿದಾರರೆ ಕೆಲಸ ಅತ್ಯಂತ ಪುಣ್ಯದ ಕೆಲಸವಾಗಿದೆ ಎಂದು ಹೇಳಿದರು.
ಪ್ರತಿ ದಿನ ಸಂಜೆ ಕನಿಷ್ಟ ಅರ್ಧ ಗಂಟೆ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿಗಳನ್ನು ಪರಿಶೀಲಿಸುವಂತಹ ಪ್ರವೃತಿಯನ್ನು ತಹಶೀಲ್ದಾರ್ಗಳು ಬೆಳಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ಕುಮಾರ್ ರಾಜು ಇದ್ದರು.
ಸಕಾಲ ಮರೆತರೆ ಸಂಬಳ ಕಟ್
ಸಕಾಲ ಯೋಜನೆ ಅಡಿಯಲ್ಲಿ ಬರುವಂತಹ ಅರ್ಜಿಗಳನ್ನು ನಿಗಧಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ಯಾವುದೇ ಮುಲಾಜಿಲ್ಲದೆ ಉಪ ತಹಶೀಲ್ದಾರ್, ರೆವಿನ್ಯೂ ಅಧಿಕಾರಿ ಮತ್ತು ಕಾರ್ಯದರ್ಶಿಗಳ ಮೇಲೆ ಕ್ರಮ ಕೈಗೊಳ್ಳವುದರ ಜತೆಗೆ ಸಂಬಳ ಕಟ್ ಮಾಡುವುದಾಗಿ ಜಿಲ್ಲಾಧಿಕಾರಿಗಳು ಶನಿವಾರ ಸಂಜೆ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರಿಂದ ಬರುವಂತಹ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕೆಂಬ ಸರ್ಕಾರದ ಸೂಚನೆಯನ್ನು ಅಧಿಕಾರಿಗಳು ಪಾಲಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಮುಂದೆ ಇದೇ ರೀತಿ ತಪ್ಪು ಕಂಡು ಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಗುಡುಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

