ಭೋಗನಂದೀಶ್ವರ ದೇಗುಲ ಅಭಿವೃದ್ಧಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಜ.5
ಐತಿಹಾಸಿಕ ತಾಲೂಕಿನ ನಂದಿಯ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ, ಪರಿಸರ ಖಾತೆ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ, ಒಂಭತ್ತೂವರೆ ಕೋಟಿ ರು. ವೆಚ್ಚದಲ್ಲಿ ದೇವಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮುಜರಾಯಿ ಇಲಾಖೆಗೆ ಸೇರಿರುವ ಪುರಾತನ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯವು ವಿಶ್ವ ವಿಖ್ಯಾತಿಯನ್ನು ಗಳಿಸಿದೆ. ಬೇರೆ ಬೇರೆ ಕಡೆಗಳಿಂದ ಪ್ರವಾಸಿಗಳು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ.ಈ ಹಿನ್ನೆಲೆಯಲ್ಲಿ ಆಲಯವನ್ನು ಮತ್ತಷ್ಟು ಆಕರ್ಷಕ ಪ್ರವಾಸಿ ತಾಣವನ್ನಾಗಿ ರೂಪಿಸುವ ಅಗತ್ಯವಿರುವುದನ್ನು ಮನಗಂಡು ಅಭಿವೃದ್ಧಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ 9 ಕೋಟಿ ರೂಗಳನ್ನು ಬಿಡುಗಡೆ ಮಾಡಿಸಿದ್ದು ಇಂಡಿಯನ್ ಆಯಿಲ್ ಕಾರ್ಪೋರೇಷನ್, ಪುರಾತತ್ವ ಇಲಾಖೆ ಮತ್ತು ರಾಜ್ಯ ಸರ್ಕಾರದ ಪ್ರವಾಸೋದ್ಯಮ, ಮುಜರಾಯಿ, ಕನ್ನಡ ಸಂಸ್ಕೃತಿ ಇಲಾಖೆಯ ನೇತೃತ್ವದಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.ಇದಕ್ಕಾಗಿ ಇಲ್ಲಿನ ಶೃಂಗತೀರ್ಥ ಕಲ್ಯಾಣ ಅಭಿವೃದ್ಧಿ, ಶೌಚಾಲಯ ವ್ಯವಸ್ಥೆ, ಪ್ರವಾಸಿಗರಿಗೆ ವಸತಿ ಸೌಲಭ್ಯ, ದೇವಾಲಯದ ಅಭಿವೃದ್ಧಿ ಸೇರಿದಂತೆ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ.ಒಟ್ಟಾರೆ ಪ್ರವಾಸಿ ತಾಣಗಳಾದ ಕೋನಾರ್ಕ್, ವೈಶಾಲಿ, ಖಜೋರಾ ಮಾದರಿಯಲ್ಲಿ ನಂದಿಯ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯ ಆಕರ್ಷಕ ಪ್ರವಾಸಿ ತಾಣವನ್ನಾಗಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ ವಿಶಾಲ್ ಮಾತನಾಡಿ, ದೇವಾಲಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ನಂದಿಗೆ ಸಮೀಪವಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್ ಬಳಿ ಮೂರು ಎಕರೆ ಸರ್ಕಾರಿ ಜಾಗವಿದ್ದು ಇದನ್ನು ಯಾತ್ರಿಕರ ವಸತಿಗೃಹ ಮತ್ತು ಇತರೆ ಅಭಿವೃದ್ಧಿಗಾಗಿ ಬಳಕೆ ಮಾಡಿಕೊಳ್ಳಬಹುದೆಂದು ಗಮನ ಸೆಳೆದಾಗ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವಂತೆ ಸಚಿವರು ಸೂಚನೆ ನೀಡಿದರು.
ನಂದಿ ಗಿರಿಧಾಮದಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಗಿರಿಧಾಮಕ್ಕೆ ಆಗಮಿಸುವ ಪ್ರವಾಸಿಗರರಿಗೆ ಅನುಗುಣವಾಗಿ ಮತ್ತಷ್ಟು ಸೌಕರ್ಯಗಳನ್ನು ಒದಗಿಸಬೇಕಾಗಿರುವುದಕ್ಕೂ ಒತ್ತು ಕೊಡಲಾಗಿದೆ ಎಂದ ಅವರು, ಚಿಕ್ಕಬಳ್ಳಾಪುರಕ್ಕೆ ಸಮೀಪದಲ್ಲಿರುವ ಆವತಿಯಲ್ಲಿ ನಾಡಪಭ್ರು ಕೆಂಪೇಗೌಡರ ದೇವಾಲಯದ ಅಭಿವೃದ್ಧಿ, ದೇವನಹಳ್ಳಿಯಲ್ಲಿ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಜನ್ಮಸ್ಥಳ ಅಭಿವೃದ್ಧಿಗಾಗಿ 6 ಕೋಟಿ ರು. ವೆಚ್ಚದ ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ಜಿಲ್ಲಾ ರಕ್ಷಣಾಧಿಕಾರಿ ದಿವ್ಯ ಗೋಪಿನಾಥ್, ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಸೋಮಶೇಖರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೀಣಾ ರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದಸ್ವಾಮಿ, ಕಾಂಗ್ರೆಸ್ ಮುಖಂಡರಾದ ಜಿ.ಆರ್. ಶ್ರೀನಿವಾಸನ್, ರಾಮಸ್ವಾಮಿ, ಮೋಹನ್ ರೆಡ್ಡಿ, ವೈ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ನಂದಿ ಉತ್ಸವ
ಈ ಹಿಂದೆ ಜಿಲ್ಲೆಯಲ್ಲಿ ನಂದಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಕಾರ್ಯಕ್ರಮವನ್ನು ಆಚರಿಸಬೇಕೆನ್ನುವುದರ ಬಗ್ಗೆ ಮಾತುಗಳು ನಡೆದು ಅನೇಕ ಬಾರಿ ಚರ್ಚೆ ನಡೆಸಲಾಯಿತಾದರೂ ಸಹ ಚುನಾವಣೆ, ಬರದ ಹಿನ್ನೆಲೆಯಲ್ಲಿ ಆಚರಿಸಿರಲಿಲ್ಲ. ಈ ವರ್ಷ ಮಹಾಶಿವರಾತ್ರಿ ನಂದಿ ಜಾತ್ರೆಯೊಳಗೆ ನಂದಿ ಉತ್ಸವವನ್ನು ಆಚರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಎತ್ತಿನಹೊಳೆ ಯೋಜನೆ
ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಮತ್ತು ಕೆರೆಗಳಿಗೆ ನೀರನ್ನು ತುಂಬಿಸಲು ಎತ್ತಿನಹೊಳೆ ನೀರಾವರಿ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಮಟ್ಟದಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇಷ್ಟೊತ್ತಿಗಾಗಲೇ ಯೋಜನೆಯ ಶಂಕುಸ್ಥಾಪನೆ ಕಾರ್ಯ ಮುಗಿದು ಹೋಗಬೇಕಾಗಿತ್ತು.
ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಯಿತು. ಈಗ ಮುಖ್ಯಮಂತ್ರಿಗಳು ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಚಾಲನೆ ನೀಡಲು ಉತ್ಸುಕರಾಗಿದ್ದು ಇದಕ್ಕಾಗಿ ಜ.31 ರಂದು ಮುಹೂರ್ತ ನಿಗದಿ ಮಾಡಿದ್ದು ಅಂದು ಮಧ್ಯಾಹ್ನ 3 ಗಂಟೆಗೆ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಮಗಾರಿ ಶಂಕುಸ್ಥಾಪನೆನೆರವೇರಿಸಲಿದ್ದಾರೆ. ಆದಷ್ಟು ಬೇಗ ಕಾಮಗಾರಿಯು ತ್ವರಿತವಾಗಿ ಮುಗಿದು ಈ ಭಾಗಕ್ಕೆ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

