ಕೋಲಾರ

ಪರಮಶಿವಯ್ಯ, ಎತ್ತಿನಹೊಳೆಗೆ ಏಕಕಾಲದಲ್ಲಿ ಗುದ್ದಲಿಪೂಜೆ ನೆರವೇರಿಸಿ

Published On :

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯಲ್ಲಿ ಜ.31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯವರಿಂದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವಿಸಲಾಗುತ್ತಿದೆ ಎಂದು ತಿಳಿಸಿರುವ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೇಳಿಕೆಗೆ ಶಾಶ್ವತ ನೀರಾವರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಮಶಿವಯ್ಯ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಗೆ ಏಕ ಕಾಲದಲ್ಲಿ ಗುದ್ದಲಿ ಪೂಜೆ ನೆರವೇರಿಸಬೇಕು. ಇಲ್ಲದಿದ್ದಲ್ಲಿ ಮುದ್ದೇನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸುವುದಕ್ಕೆ ಬಿಡುವುದಿಲ್ಲ. ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆರ್. ಆಂಜನೇಯರೆಡ್ಡಿ, ಬಯಲುಸೀಮೆ ಜಿಲ್ಲೆಗಳ ಕೆರೆಗಳ ನೀರು ತುಂಬಿಸುವ ಪರಮಶಿವಯ್ಯ ವರದಿ ಜಾರಿ ಮಾಡಬೇಕು ಎಂದು 2012ರಲ್ಲಿ ನಿರ್ಣಾಯಕ 65 ದಿನಗಳ ಕಾಲ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರ ಪರಮಶಿವಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಪರಮಶಿವಯ್ಯನವರ ವರದಿಯಿಂದ ಮಾತ್ರ ಈ ಭಾಗದ ಕೆರೆಗಳನ್ನು ತುಂಬಿಸಲು ಸಾಧ್ಯ. ಆದರೆ, ಈ ಭಾಗದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
18ರಂದು ಸಭೆ: ಸಂಚಾಲಕ ಕೆ.ಸಿ. ರಾಜಾಕಾಂತ್ ಮಾತನಾಡಿ, ಜ.18ರಂದು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಂಸದರ ಸಭೆ ಕರೆಯಲಾಗುವುದು. ಎತ್ತಿನಹೊಳೆ ಹಾಗೂ ಪರಮಶಿವಯ್ಯ ಯೋಜನೆಗೆ ಏಕ ಕಾಲದಲ್ಲಿ ಗುದ್ದಲಿ ಪೂಜೆ ನೆರವೇರಿಸಬೇಕು ಎಂದು ಆ ಸಭೆಯಲ್ಲಿ ಒತ್ತಾಯಿಸುತ್ತೇವೆ. ಸಭೆಗೆ ಜನಪ್ರತಿನಿಧಿಗಳು ಹಾಜರಾಗದಿದ್ದರೆ ಜ.31 ರಂದು ನಡೆಸಲಿರುವ ಜಿಲ್ಲಾ ಬಂದ್‌ನಲ್ಲಿ ಸಭೆಗೆ ಹಾಜರಾಗದ ಜನಪ್ರತಿನಿಧಿಗಳ ಪ್ರತಿಕೃತಿಗಳನ್ನು ದಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮುಖಂಡರಾದ ಕಾಮ್ರೆಡ್ ಲಕ್ಷ್ಮಯ್ಯ, ಯಲುವಹಳ್ಳಿ ಸೊಣ್ಣೇಗೌಡ, ಬಿ.ಹೆಚ್. ನರಸಿಂಹಯ್ಯ, ಸು.ದಾ. ವೆಂಕಟೇಶ್, ಅಗಲಗುರ್ಕಿ ಚಲಪತಿ, ಮಂಚನಬಲೆ ಶ್ರೀನಿವಾಸ್, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಭಕ್ತರಹಳ್ಳಿ ಬೈರೇಗೌಡ, ಮೋಹನ್, ಸುಷ್ಮಾ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.