ಮೊಯ್ಲಿ ವಿರುದ್ಧ ಬಾಯಿ ಬಡಕೊಂಡು ಪ್ರತಿಭಟನೆ!
ಚಿಕ್ಕಬಳ್ಳಾಪುರ: ಒಂದೇ ಸಮನೆ ಲಬೋ ಲಬೋ ಎಂದು ಬಾಯಿ ಬಡಿದುಕೊಂಡು ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪ್ರತಿಕೃತಿಯನ್ನು ದಹಿಸುವ ಮೂಲಕ ಜೆಡಿಎಸ್ ಮುಖಂಡರು ಎತ್ತಿನಹೊಳೆ ಯೋಜನೆಯನ್ನು ತರಾತುರಿಯಾಗಿ ಜಾರಿಗೆ ತರಲು ಮುಂದಾಗಿರುವ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ರಸ್ತೆಗಳಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿಯವರ ಪ್ರತಿಕೃತಿಯ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಶಿಡ್ಲಘಟ್ಟ ವೃತ್ತದಲ್ಲಿ ದಹಿಸಿ ಧಿಕ್ಕಾರ ಕೂಗಿದರು. ಡಿಪಿಆರ್ ತಯಾರಿಸದೆ, ಪರಿಸರ ಇಲಾಖೆಯ ಅನುಮತಿಯನ್ನು ಪಡೆಯದೆ ಏಕಾಏಕಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿರುವ ಮೊಯ್ಲಿ ಅವರಿಗೆ ಬುದ್ಧಿ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಕಳೆದ ಅನೇಕ ದಶಕಗಳಿಂದ ಬಯಲುಸೀಮೆಯ ಜಿಲ್ಲೆಗಳಲ್ಲಿ ಅಂತರ್ಜಲ ಕುಸಿತ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನೀರಾವರಿ ತಜ್ಞ ಡಾ.ಪರಮಶಿವಯ್ಯನವರು ರೂಪಿಸಿರುವ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಈಗಾಗಲೇ ಇಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಈ ಭಾಗದಲ್ಲಿ ನೀರಾವರಿ ಗಂಭೀರ ಸಮಸ್ಯೆಯಾಗಿ ಪರಿಣಿಮಿಸಿದೆ. ಆದರೂ ಜನರ ಪ್ರಮುಖ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.
ಮಂಗಳೂರು ಕಡೆ ಸೋತು ಸುಣ್ಣವಾಗಿದ್ದ ವೀರಪ್ಪ ಮೊಯ್ಲಿ ಈ ಭಾಗಕ್ಕೆ ಬಂದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಡಾ. ಪರಮಶಿವಯ್ಯನವರ ವರದಿಯನ್ನು ಅನುಷ್ಠಾನಗೊಳಿಸಲಾಗುವುದಾಗಿ ಭರವಸೆ ನೀಡಿದ್ದರು. ಅದರಂತೆ ಚುನಾವಣೆಯಲ್ಲಿ ಗೆದ್ದರು. ಆದರೆ, ಕಳೆದ ನಾಲ್ಕು ವರ್ಷಗಳಿಂದಲೂ ಜನರ ದಿಕ್ಕು ತಪ್ಪಿಸಿಕೊಂಡು ಬಂದರೆ ಹೊರತು ಕೇಂದ್ರದಲ್ಲಿರುವ ತಮ್ಮ ಸರ್ಕಾರದ ಮೇಲೆ ಒತ್ತಡವನ್ನು ಹೇರಲಿಲ್ಲ. ಯೋಜನೆಗೆ ಅನುದಾನವನ್ನು ತರಲಿಲ್ಲ. ಈಗ ಮತ್ತೊಮ್ಮೆ ಚುನಾವಣೆಯನ್ನು ಸುಳ್ಳು ಭರವಸೆಯ ಮೂಲಕ ಗೆಲ್ಲುವ ಪ್ರಯತ್ನದಲ್ಲಿದ್ದಾರೆ ಎಂದು ಆರೋಪಿಸಿದರು.
ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮೊಯ್ಲಿ ಅವರು ಜ.31ರಂದು ಎತ್ತಿನಹೊಳೆ ಯೋಜನೆಗೆ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಟೆಂಡರ್ ಕರೆದಿಲ್ಲ. ಡಿಪಿಆರ್ ತಯಾರಾಗಿಲ್ಲ. ಅಗತ್ಯವಿರುವ ಇಲಾಖೆಗಳಿಂದ ಅನುಮತಿಯನ್ನು ಪಡೆದುಕೊಂಡಿಲ್ಲ. ಆದರೂ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಹೇಳಿರುವ ಅವರಿಗೆ ಬುದ್ಧಿ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ನೀರಾವರಿ ಹೋರಾಟದಲ್ಲಿ ಯಾರೇ ಆಗಲಿ ರಾಜಕಾರಣ ಮಾಡುವುದು ಸರಿಯಲ್ಲ.
ಇದು ಜನರ ಉಳಿವು ಅಳಿವಿಗೆ ಸಂಬಂಧಿಸಿದ್ದಾಗಿದೆ. ಆದರೂ ಸಹ ಮೊಯ್ಲಿ ಅವರು ಜನರ ದಿಕ್ಕು ತಪ್ಪಿಸುತ್ತಿದ್ದು ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಇಂಥ ಧೋರಣೆಯನ್ನು ಬಿಡದಿದ್ದರೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಪಿ.ಎನ್.ಮುನೇಗೌಡ, ತಾಪಂ ಕೃಷ್ಣಮೂರ್ತಿ, ನಗರಸಭಾ ಸದಸ್ಯ ಪಿ.ಶ್ರೀನಿವಾಸ್, ಮುಖಂಡರಾದ ಕೆ.ಟಿ.ನಾರಾಯಣಸ್ವಾಮಿ, ಕೆ.ಆರ್.ರೆಡ್ಡಿ, ಮುನಿರಾಜು ಮುಂತಾದವರು ಭಾಗವಹಿಸಿದ್ದರು.
31ರಂದು ಎತ್ತಿನಹೊಳೆ ಯೋಜನೆಗೆ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಟೆಂಡರ್ ಕರೆದಿಲ್ಲ. ಡಿಪಿಆರ್ ತಯಾರಾಗಿಲ್ಲ. ಅಗತ್ಯವಿರುವ ಇಲಾಖೆಗಳಿಂದ ಅನುಮತಿಯನ್ನು ಪಡೆದುಕೊಂಡಿಲ್ಲ. ಆದರೂ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಹೇಳಿರುವ ಅವರಿಗೆ ಬುದ್ಧಿ ಇಲ್ಲವೇ?
ಟಿ ಕೆ.ಪಿ.ಬಚ್ಚೇಗೌಡ, ಮಾಜಿ ಶಾಸಕ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

