ಕೋಲಾರ

ಮಕ್ಕಳ ಆರೋಗ್ಯ ಕಾಪಾಡಿ

Published On :

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ತಯಾರಿಕೆಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿದ್ದರೂ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ತಾ.ಪಂ. ಮಾಜಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮರವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆರೋಗ್ಯ, ತೋಟಗಾರಿಕೆ, ಕೃಷಿ, ರೇಷ್ಮೆ, ಶಿಕ್ಷಣ, ಪಶುಸಂಗೋಪನಾ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಬಳಕೆ ಮಾಡುತ್ತಿರುವುದರ ಬಗ್ಗೆ ಚರ್ಚಿಸಲಾಯಿತು.
ಈ ಹಿಂದಿನ ಸಭೆಗಳಲ್ಲೂ ಸಹ ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ತರಕಾರಿ, ಕಳಪೆ ಗುಣಮಟ್ಟದ ಆಹಾರ ಪದಾರ್ರ್ಥಗಳನ್ನು ಬಳಸುತ್ತಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಡುಗೆ ತಯಾರಿಸುವುದರ ಪೂರ್ವ ಗುಣಮಟ್ಟವನ್ನು ಪರಿಶೀಲನೆ ನಡೆಸಬೇಕೆನ್ನುವುದರ ಬಗ್ಗೆ ಚರ್ಚಿಸಲಾಗಿದೆ. ಆದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ವೆಂಕಟನಾರಾಯಣಮ್ಮ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮರಾಜ್ ಅರಸ್, ಆಹಾರ ತಯಾರಿಸುವಲ್ಲಿ ಸ್ವಚ್ಛತೆ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆ ಮಾಡಿ ಒಳ್ಳೆಯ ಆಹಾರವನ್ನು ಮಕ್ಕಳಿಗೆ ನೀಡಬೇಕೆಂದು ಸೂಚಿಸಲಾಗಿದೆ. ಎಲ್ಲಾದರೂ ಲೋಪಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದರು.
ಹಿಂದುಳಿದ ವರ್ಗಗಳ ಇಲಾಖೆಯು ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಮಾತ್ರ ವಿದ್ಯಾರ್ಥಿ ವೇತನವನ್ನು ನೀಡುತ್ತಿರುವುದರಿಂದ ಅನೇಕ ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಈ ರೀತಿ ತಾರತಮ್ಯ ಮಾಡುತ್ತಿರುವುದೇತಕ್ಕೆ ಎಂದು ತಾ.ಪಂ. ಮಾಜಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಪ್ರಶ್ನಿಸಿದಾಗ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಹಿಂದೆ ಸರ್ಕಾರ ನೀಡಿರುವ ಗುರಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಉಳಿದವರಿಗೆ ಹಣ ನೀಡಲಾಗಲಿಲ್ಲ. ಈಗ ಸಮಸ್ಯೆ ಇಲ್ಲ ಎಂದು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೃಷಿಕರಿಗೆ ಕೃಷಿ ಇಲಾಖೆಯಿಂದ ಗಿಡಗಳನ್ನು ಉಚಿತವಾಗಿ ನೀಡುತ್ತಿದ್ದರೂ ನೀರಾವರಿ ಸಮಸ್ಯೆಯಿಂದ ರೈತರು ನಿರುತ್ಸಾಹವನ್ನು ತೋರುತ್ತಿದ್ದು ಈ ಹಿಂದೆ ನೀಡಿದಂತಹ ಗಿಡಗಳು  ಬೆಳೆದಿರುವುದು ಎಲ್ಲೂ ಕಂಡು ಬರುತ್ತಿಲ್ಲ. ಇದರಿಂದ ಈ ಅನುದಾನವನ್ನು ರೈತರಿಗೆ ಕೃಷಿ ಉಪಕರಣಗಳನ್ನು ನೀಡಲು ಬಳಸಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಸದಸ್ಯ ಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮಕ್ಕಳಿಗೆ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲು ಸರ್ಕಾರ ಜಾರಿಗೆ ತಂದಿರುವ ಆರ್ ಟಿಇ ಕಾಯ್ದೆಯನ್ನು ಸದುಪಯೋಗಪಡಿಸಿಕೊಳ್ಳುವುದರಲ್ಲಿ ಮತ್ತು ವಿವಿಧ ಇಲಾಖೆಗಳು ಅಭಿವೃದ್ಧಿ ಕೆಲಸಗಳಲ್ಲಿ ಶೇ.100 ರಷ್ಟು ಸಾಧನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಓಬಳೇಶಪ್ಪ, ಮಾಜಿ ಉಪಾಧ್ಯಕ್ಷೆ ಭಾರತಿ, ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ, ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.