ಕೋಲಾರ

ಶ್ರಮಿಕರ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಲಿ

Published On :

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿಕರ ಅಭಿವೃದ್ಧಿಗೆ ವಿಶೇಷ ಆಸಕ್ತಿಯ ಜೊತೆಗೆ ದುಡಿಯುವ ಕೈಗಳಿಗೆ ಶಕ್ತಿ ತುಂಬುವಂತಹ ಯೋಜನೆಗಳನ್ನು ಜಾರಿಗೆ ತರಬೇಕಾಗಿದೆ ಎಂದು ಕೋಲಾರ ಎಪಿಎಂಸಿ ಅಧ್ಯಕ್ಷೆ ರಾಜೇಶ್ವರಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗು ಜಿಲ್ಲಾ ಕಾರ್ಮಿಕರ ಇಲಾಖೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನಾ ಪ್ರಚಾರ ಸಂಘ ವತಿಯಿಂದ ಹೊರವಲಯದ ಎಂಪಿಎಂಸಿ ಮಾರುಕಟ್ಟೆಯಲ್ಲಿ ಕೂಲಿ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು -ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದರೂ ಆ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ವಿಷಾಧಿಸಿದರು. ಕಾರ್ಮಿಕ ವರ್ಗದ ಮಕ್ಕಳು ಶಿಕ್ಷಣ ವಂಚಿತರಾಗದಂತೆ ಶೈಕ್ಷಣಿಕ ಸವಲತ್ತುಗಳನ್ನು ನೀಡಬೇಕೆಂದು ಸಲಹೆ ನೀಡಿದರು.
2ನೇ ಜಿಲ್ಲಾ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ ಮಾತನಾಡಿ, ಸರ್ಕಾರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಕಾರ್ಮಿಕರು ಇಂತಹ ಯೋಜನೆಗಳ ಲಾಭ ಪಡೆದು ಸಾಮಾಜಿಕವಾಗಿ ಮೇಲೆ ಬರಬೇಕು, ಕಾನೂನು ಅರಿವು ಪಡೆದು ಹಕ್ಕುಗಳನ್ನು ಪ್ರತಿಪಾದಿಸಬೇಕೆಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆಂಗಬಾಲಯ್ಯ ಮಾತನಾಡಿ, ಜನ ಸಾಮಾನ್ಯರಿಗೆ ಕನಿಷ್ಠ ಕಾನೂನಿನ ಅರಿವು ಇದ್ದಾಗ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ, ಕಾರ್ಮಿಕರಿಗೆ ಕಾನೂನಿನ ತೊಡಕು ಉಂಟಾಗಿ ಕೋರ್ಟ್ ಮೆಟ್ಟಿಲೇರುವ ಪರಿಸ್ಥಿತಿ ಬಂದಾಗ ಕಾನೂನು ಪ್ರಾಧಿಕಾರವು ಅಂತಹವರ ನೆರವಿಗೆ ಬಂದು ಉಚಿತವಾಗಿ ನ್ಯಾಯ ಕೊಡಿಸುವ ಅನುಕೂಲವನ್ನು ಸರ್ಕಾರ ಮಾಡಿಕೊಟ್ಟಿದೆ, ವಕೀಲರ ಫೀಸು ಸೇರಿದಂತೆ, ಕೋರ್ಟಿನ ಎಲ್ಲ ರೀತಿಯ ಶುಲ್ಕವನ್ನೂ ಪ್ರಾಧಿಕಾರವೇ ಭರಿಸುತ್ತದೆ ಎಂದು ಹೇಳಿದರು.
ವಕೀಲರು ಹಾಗೂ ಜಾಗೃತಿ ಸೇವಾ ಸಂಸ್ಥೆಯ ಅಧ್ಯಕ್ಷರೂ ಆದ ಕೆ.ಆರ್. ಧನರಾಜ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಸತೀಶ್, ಜಿಲ್ಲಾ ಕಾರ್ಮಿಕ ಇಲಾಖಾಧಿಕಾರಿ ರಾಜಗೋಪಾಲ್, ಕೃಷಿ ಉತ್ಪನ್ನ ಮಾರುಕಟ್ಟೆ ಹಮಾಲರ ಸಂಘದ ಅಧ್ಯಕ್ಷ ಬಾಬು, ಜಂಟಿ ಕಾರ್ಯದರ್ಶಿ ಅಯೂಬ್ಖಾನ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.