ಕೋಲಾರ

ಮೊಯ್ಲಿಗೆ ವೆಚ್ಚದ ಕುತ್ತು!

Published On :

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಪ್ರತಿ ಅಭ್ಯರ್ಥಿಗೆ ನಿಗದಿಪಡಿಸಿದಕ್ಕಿಂತಲೂ ಹೆಚ್ಚು ಹಣ ವೆಚ್ಚ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿರುವ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಸಂಸತ್ ಸದಸ್ಯತ್ವ ರದ್ದುಪಡಿಸಬೇಕೆಂದು ಚುನಾವಣಾ ಆಯೋಗವನ್ನು ಬಿಜೆಪಿ ಒತ್ತಾಯಿಸಿದೆ.
2014ರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ವೀರಪ್ಪ ಮೊಯ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಅವರನ್ನು ಸೋಲಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಪ್ರತಿ ಅಭ್ಯರ್ಥಿಗಳು ಖರ್ಚು ಮಾಡಿದ ಹಣವನ್ನು ಲೆಕ್ಕ ಹಾಕಿದ್ದು ಚುನಾವಣಾ ನೀತಿ ಸಂಹಿತೆ ಪ್ರಕಾರ ಒಬ್ಬ ಅಭ್ಯರ್ಥಿ ತನ್ನ ಪ್ರಚಾರಕ್ಕಾಗಿ 70 ಲಕ್ಷ ಮಾತ್ರ ಖರ್ಚು ಮಾಡಲು ಅವಕಾಶವಿದೆ. ಇಲ್ಲಿ ವೀರಪ್ಪ ಮೊಯ್ಲಿ 72,29,180 ಖರ್ಚು ಮಾಡಿದ್ದಾರೆ. ಈ ಮೂಲಕ ಮೊಯ್ಲಿ ಅವರಿಂದ ಹೆಚ್ಚುವರಿಯಾಗಿ 2,29,180 ಹಣ ಖರ್ಚಾಗಿದೆ. ಇದು ನೀತಿ ಸಂಹಿತೆಗೆ ವಿರುದ್ಧವಾದುದು. ಇದನ್ನು ಬಿಜೆಪಿ ಅಸ್ತ್ರವನ್ನಾಗಿಸಿಕೊಂಡು ಇದೀಗ ಹೋರಾಟ ನಡೆಸಲು ಮುಂದಾಗಿದೆ.
ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಿ ಆಯ್ಕೆಯಾಗಿರುವ ಎಂ.ವೀರಪ್ಪ ಮೊಯ್ಲಿ ಅವರ ಸಂಸದ ಸ್ಥಾನವನ್ನು ರದ್ದುಪಡಿಸಬೇಕು. ಮತಗಳಿಕೆಯಲ್ಲಿ ಎರಡನೇ ಸ್ಥಾನವನ್ನು ಪಡೆದಿರುವ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಅವರನ್ನು ನೂತನ ಸಂಸದರನ್ನಾಗಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ವಿಶಾಲ್ ಅವರಿಗೆ ಬಿಜೆಪಿ ಮನವಿ ಪತ್ರ ಸಲ್ಲಿಸಿದೆ.
ಶನಿವಾರ ಬಿ.ಎನ್. ಬಚ್ಚೇಗೌಡರ ಪುತ್ರ ಶರತ್ಗೌಡ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಜಿಲ್ಲಾಡಳಿತ ಭವನಕ್ಕೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುವ ಮೂಲಕ ಚುನಾವಣಾಧಿಕಾರಿಗಳ ಗಮನ ಸೆಳೆದಿದ್ದಾರೆ. ಹೆಚ್ಚು ಹಣವನ್ನು ಖರ್ಚು ಮಾಡುವ ಮೂಲಕ ಮೊಯ್ಲಿ ಮೋಸದಿಂದ ಗೆಲವು ಸಾಧಿಸಿದ್ದಾರೆ. ಈ ಬಗ್ಗೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಗಮನವನ್ನು ಸೆಳೆಯಲಾಗುತ್ತಿದೆ. ಪ್ರಕರಣವನ್ನು ತ್ವರಿತವಾಗಿ ಚುನಾವಣಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿ ವಿಳಂಬ ಮಾಡಿದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಮುಂದಿನ ಬೆಳವಣಿಗೆಗಳನ್ನು ನೋಡಿಕೊಂಡು ನ್ಯಾಯಾಲಯದಲ್ಲಿ ಮೊಯ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದನ್ನು ಪ್ರಶ್ನಿಸಲಾಗುವುದು ಎಂದು ಮುಖಂಡ ಶರತ್ಗೌಡ ತಿಳಿಸಿದ್ದಾರೆ. ಬಿಜೆಪಿ ಮುಖಂಡರಾದ ಡಾ.ಮಂಜುನಾಥ್, ಅಗಲಗುರ್ಕಿ ಚಂದ್ರಶೇಖರ್, ಲಕ್ಷ್ಮೀನಾರಾಯಣ ಗುಪ್ತ, ರಾಮಣ್ಣ, ನಾರಾಯಣಪ್ಪ ಮುಂತಾದವರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.