ಎಬಿವಿಪಿ, ಡಿವೈಎಫ್ಐ ಪ್ರತಿಭಟನೆ
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ನಡೆದ ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ದುಷ್ಕರ್ಮಿಗಳ ವಿರುದ್ಧ ಕಠಿಣ ಶಿಕ್ಷೆ ಕೈಗೊಳ್ಳುವುದರ ಜೊತೆಗೆ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿ ಬಂದಿದೆ.
ನಗರದಲ್ಲಿ ಮೆರವಣಿಗೆ ಹೊರಟು ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರು ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ದೆಹಲಿ ಮಾದರಿಯಲ್ಲಿ ಬೆಂಗಳೂರಲ್ಲೂ ವಿದ್ಯಾರ್ಥಿನಿಯ ಮೇಲೂ ಅತ್ಯಾಚಾರ ನಡೆದಿದ್ದು, ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ವಿಷಯವಾಗಿದೆ. ಆರೋಪಿ ನಾಸೀರ್ ಹೈದರ್ ಅನ್ನು ಗಲ್ಲಿಗೇರಿಸಬೇಕು. ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಅಲ್ಲದೆ, ಈ ಬಗ್ಗೆ ದೂರು ಕೊಟ್ಟರೂ ಸ್ವೀಕರಿಸದ ಹಾಗೂ ಬೆದರಿಕೆ ಪ್ರಕರಣ ದಾಖಲಿಸಿಕೊಂಡು ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಯಿತು.
ಇದೇ ವೇಳೆ, ಮಾರತ್ಹಳ್ಳಿಯ ಬಳಿ ತೂಬರಹಳ್ಳಿ ಸಮೀಪ ಖಾಸಗಿ ಶಾಲೆಯಲ್ಲಿ ಬಾಲಕಿಯ ಮೇಲೆ ರೇಪ್ ನಡೆದಿದೆ. ಬೈಂದೂರಿನ ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾವೆಸಗಿ ಕೊಲೆ ಮಾಡಲಾಗಿದೆ. ಇಂಥ ಪ್ರಕರಣಗಳು ಸಾಕಷ್ಟು ಇತ್ತೀಚೆಗೆ ಕಂಡು ಬರುತ್ತಿದ್ದು, ರಾಜ್ಯ ಸರ್ಕಾರ ಕೈಚೆಲ್ಲಿ ಕುಳಿತಿರುವುದು ಖಂಡನೀಯ. ಕೂಡಲೇ ಆರೋಪಿಗಳ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ಮಮತಾ, ಲಕ್ಷ್ಮೀ, ಸೌಮ್ಯ, ಚಂದ್ರಿಕಾ, ಸೌಡಮ್ಮ ಮತ್ತು ನಗರ ಕಾರ್ಯದರ್ಶಿ ಅರುಣ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರಳಿ, ಮಂಜುನಾಥ್ ಮುಂತಾದವರಿದ್ದರು.
ರಾಜಿನಾಮೆಗೆ ಆಗ್ರಹ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಕೆ.ಜೆ.ಜಾರ್ಜ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎರ್ದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ತಮ್ಮೇಶ್ ಗೌಡ ಆಗ್ರಹಿಸಿದ್ದಾರೆ.
ಕಠಿಣ ಕ್ರಮ ಕೈಗೊಳ್ಳಲು ಡಿವೈಎಫ್ಐ ಆಗ್ರಹ
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ಐ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕೆಲವು ಸಮಯ ರಸ್ತೆ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ಬಿಟ್ಟು ಅತ್ಯಾಚಾರ ಪ್ರಕರಣಗಳ ರಾಜ್ಯವಾಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿತು. ಬೆಂಗಳೂರಿನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ದೂರು ಕೊಟ್ಟರೂ ಸಹ ಪೊಲೀಸ್ ಅಧಿಕಾರಿ ನಿರ್ಲಕ್ಷ್ಯ ವಹಿಸಿ ಪ್ರಕರಣದ ದಿಕ್ಕು ತಪ್ಪಿಸಲು ಮುಂದಾಗಿದ್ದು ಸರ್ಕಾರದ ದುರಾಡಳಿತಕ್ಕೆ ನಿದರ್ಶನ. ಅಲ್ಲದೇ ಗೃಹ ಸಚಿವರು ಸಹ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದು ವಿಷಾದನೀಯ ಎಂದು ಪ್ರತಿಭಟನಾಕಾರರು ಹೇಳಿದರು. ಪ್ರತಿಭಟನೆಯಲ್ಲಿ ಕುಂದಲಗುರ್ಕಿ ಮುನೀಂದ್ರ, ಶ್ರೀನಿವಾಸ್ , ರಮೇಶ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

