ಕೋಲಾರ

ನೀರಿಗಾಗಿ ಗ್ರಾಪಂ ಕಚೇರಿಗೆ ಬೀಗ!

Published On :

ಬಾಗೇಪಲ್ಲಿ: ಸರ್ಮಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ತಾಲೂಕಿನ ನಲ್ಲಪರೆಡ್ಡಿಪಲ್ಲಿ ಗ್ರಾಮಸ್ಥರು ಖಾಲಿ ಬಿಂದಿಗೆಗಳನ್ನು ಹಿಡಿದು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ, ಬೀಗ ಜಡಿದು ಪ್ರತಿಭಟಿಸಿದರು.
ತಾಲೂಕಿನ ನಲ್ಲಪರೆಡ್ಡಿ ಗ್ರಾಮ ಪಂಚಾಯತ್ ಕೇಂದ್ರವಾಗಿರುವ ನಲ್ಲಪರೆಡ್ಡಿಪಲ್ಲಿ ಗ್ರಾಮದಲ್ಲಿ ಗ್ರಾಪಂ ಪಿಡಿಒ ಮತ್ತು ಕಾರ್ಯದರ್ಶಿಗಳ ನಿರ್ಲಕ್ಷ್ಯದಿಂದ ಸುಮಾರು 6 ತಿಂಗಳ ಕಾಲ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುತ್ತಿಲ್ಲ. ಇದರಿಂದ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿದರು.
ಗ್ರಾಮದ ಜನತೆ ಸುಮಾರು ಒಂದು ಕಿ.ಮೀ ದೂರದ ರೈತರ ಕೊಳವೆ ಬಾವಿಗಳಿಂದ ನೀರು ತರುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಬಿಂದಿಗೆಗಳಲ್ಲಿ ಕುಡಿಯುವ ನೀರನ್ನು ದೂರದಿಂದ ಹೊತ್ತು ತರಬೇಕಾಗಿದೆ. ಈ ಕುರಿತು ಅನೇಕ ಬಾರಿ ಸಂಬಂಧಪಟ್ಟ ಎಲ್ಲಾ ತಾಲೂಕು ಮತ್ತು ಗ್ರಾಪಂ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಗ್ರಾಮಗಳ ಕುಡಿಯುವ ನೀರಿಗಾಗಿ ಸರ್ಕಾರ ಸಾಕಷ್ಟು ಅನುದಾನ ಮೀಸಲಿಟ್ಟಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿ ಹಣವನ್ನು ಗುಳುಂ ಮಾಡುತ್ತಿದ್ದಾರೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ಉದ್ದೇಶದಿಂದ ಸರ್ಕಾರ ಕೊರೆಯಿಸಿರುವ ಕೊಳವೆ ಬಾವಿಗಳಲ್ಲಿ ಅಳವಡಿಸಿರುವ ಗುಣಮಟ್ಟದ ಯಂತ್ರೋಪಕರಣಗಳಾದ ಪಂಪ್, ಮೋಟಾರು ಮುಂತಾದವುಗಳನ್ನು ತಮ್ಮ ಸ್ವಂತ ಜಮೀನಿಗೆ ಆಳವಡಿಸಿಕೊಂಡು, ಸಂಬಂಧಪಟ್ಟ ಜನಪ್ರತಿನಿಧಿಗಳು ತಮ್ಮ ಕಳಪೆ ಗುಣಮಟ್ಟದ ಯಂತ್ರೋಪಕರಣಗಳನ್ನು ಸಾರ್ವಜನಿಕ ಕೊಳವೆ ಬಾವಿಗಳಿಗೆ ಅಳವಡಿಸಿದ್ದಾರೆ. ಇದರಿಂದ ಎರಡು ದಿನಗಳಿಗೊಮ್ಮೆ ಗ್ರಾಮದಲ್ಲಿ ಸಾರ್ವಜನಿಕ ಕೊಳವೆಬಾವಿ ಕೆಟ್ಟು ಹೋಗುತ್ತದೆ. ಪಂಪ್. ಮೋಟರ್ ರಿಪೇರಿ ನೆಪದಲ್ಲಿ ಲಕ್ಷಾಂತರ ರು. ಹಣವನ್ನು ಗ್ರಾಪಂ ಸದಸ್ಯರು ಸೇರಿದಂತೆ ಅಧಿಕಾರಿಗಳು ದುರುಪಯೋಗ ಮಾಡುತ್ತಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಇಒ ಶ್ರೀನಿವಾಸ್, ಎರಡು ದಿನಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವುದಾಗಿ ತಿಳಿಸಿದರು. ಗ್ರಾಪಂ ಮೋಟಾರ್, ಪಂಪ್ ಅವ್ಯವಹಾರ ತನಿಖೆಗೆ ಆದೇಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.