ಕೋಲಾರ

ಸಿಬ್ಬಂದಿ ಕಡಿತ ಆದೇಶಕ್ಕೆ ಅಕ್ಷೇಪ

Published On :

ಕೋಲಾರ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಡಿತಗೊಳಿಸಲು ಆರೋಗ್ಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜು.18ರಂದು ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖಾ ನೌಕರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಡಿಸಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿ ಕೂಡಲೇ ಮುಖ್ಯಮಂತ್ರಿಗೆ ಕಳುಹಿಸುವಂತೆ ಕೋರಿದರು. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಒಳ ರೋಗಿಗಳ ಸಂಖ್ಯೆಗೆ ತಕ್ಕಂತೆ ವೈದ್ಯರು ಮತ್ತು ಸಿಬ್ಬಂದಿ ಇರಬೇಕೆಂಬ ನಿಯಮವಿದೆ. ಅನೇಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರೆತೆಯಿಂದ ರೋಗಿಗಳಿಗೆ ಉತ್ತಮ ಸೇವೆ ನೀಡಲಾಗುತ್ತಿಲ್ಲ. ಸರ್ಕಾರ ಅಗತ್ಯ ಸಿಬ್ಬಂದಿಯನ್ನು ನೀಡುವ ಬದಲು ಇರುವ ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ಆ.15ರೊಳಗೆ ತೆರವುಗೊಳಿಸಲು ಆದೇಶಿಸಿರುವುದು ಗೇಯುವ ಎತ್ತಿಗೇ ಕೆಲಸ ಜಾಸ್ತಿ ಎಂಬಂತಾಗಿದೆ ಎಂದು ದೂರಿದ್ದಾರೆ.
ಸರ್ಕಾರ ಆರೋಗ್ಯ ಇಲಾಖೆಯಲ್ಲಿ ನೂತನ ವೈದ್ಯಕೀಯ ಸೇವೆಯನ್ನು ಪ್ರಾರಂಭಿಸಿದ್ದು, ಡಯಾಲಿಸಿಸ್, ಐಸಿಯು, ಎನ್ಐಸಿಯು ಟ್ರಾಮಾಕೇರ್ ಇತ್ಯಾದಿ ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ, ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸಿಬ್ಬಂದಿಗಿಂತಲೂ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆ ಇದೆ. ಆದರೆ ಸರ್ಕಾರ ಆದೇಶಿಸಿರುವಂತೆ ಇರುವ ಸಿಬ್ಬಂದಿಯನ್ನೇ ಕಡಿತಗೊಳಿಸುವುದಕ್ಕೆ ಮುಂದಾಗಿರುವುದು ಅವೈಜ್ಞಾನಿಕ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.
ತಕ್ಷಣ ಆರೋಗ್ಯ ಇಲಾಖೆ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಬೇಕು. ವರ್ಗಾವಣೆ ಕಾಯ್ದೆಗೆ ಅಮೂಲಾಗ್ರ ಬದಲಾವಣೆ ತರಬೇಕು. ಆಹಾರ ಸುರಕ್ಷತಾ ಕಾಯಿದೆ ವ್ಯಾಪ್ತಿಯ ಅಂಕಿತ ಅಧಿಕಾರಿಗಳ ಹುದ್ದೆಗಳಿಗೆ ವೈದ್ಯಾಧಿಕಾರಿಗಳನ್ನೇ ನೇಮಕ ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸಲ್ಲಿಸುವಾಗ ವೈದ್ಯಧಿಕಾರಿಗಳ ಸಂಘದ ಪದಾಧಿಕಾರಿಗಳಾದ ಡಾ.ಎಚ್. ಮಂಜುನಾಥ್, ಬಾಬು, ಮಹೇಂದ್ರ ಪ್ರಸಾದ್, ಬಾಲಸುಂದರ್, ನಟರಾಜ್, ಮುರಳಿಮೋಹನ್, ವೆಂಕಟೇಶ್, ತಬಸೂಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.