ಕೋಲಾರ

ಫ್ಲೋರೈಡ್ ರಹಿತ ನೀರಿನ ಘಟಕ ಸ್ಥಾಪನೆಗೆ ತೀರ್ಮಾನ

Published On :

ಗುಡಿಬಂಡೆ: ತಾಲೂಕಿನಾದ್ಯಂತ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ಕೇಂದ್ರದಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ತಾಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ತಾಪಂ ಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವುದು ಕಂಡು ಬಂದಿದೆ. ಈ ನೀರಿನ ಸೇವನೆಯಿಂದಾಗಿ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ತಡೆಗಟ್ಟಲು ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧೀಕರಿಸಿದ ಕಿರು ನೀರಿನ ಘಟಕಗಳನ್ನು ಅಳವಡಿಸಬೇಕೆಂದು ಸಲಹೆ ಮಾಡಿದರು. ಇದಕ್ಕೆ ಸ್ಪಂದಿಸಿದ ಸಭೆ ಯಾವುದೇ ಚರ್ಚೆ ಇಲ್ಲದೆ ಅನುಮೋದನೆ ನೀಡಿತು.
ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜ್ಯೋತಿಪ್ರಕಾಶ್ ಮಾತನಾಡಿ, ಇಲಾಖೆಯಿಂದ ಕೈಗೊಂಡಿದ್ದ 120 ಕಿರು ನೀರು ಪೂರೈಕೆ ಯೋಜನೆಗಳ ಪೈಕಿ 52 ಪೂರ್ಣಗೊಂಡಿದ್ದು 56 ಪ್ರಗತಿಯಲ್ಲಿವೆ. ಇವುಗಳಲ್ಲಿ 36 ಅಂಗನವಾಡಿ ಕೇಂದ್ರಗಳು ಮತ್ತು 13 ಶಾಲೆಗಳು ಸೇರಿವೆ. 13-14ನೇ ಸಾಲಿನಲ್ಲಿ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 113 ಕೊಳವೆ ಬಾವಿಗಳನ್ನು ಕೊರೆಯಲಾಗಿದ್ದು 79 ಸಫಲವಾಗಿದ್ದು 24 ವಿಫಲವಾಗಿವೆ. ಉಳಿದಂತೆ ರಸ್ತೆ ಕಾಮಗಾರಿಗಳ ಪೈಕಿ ದಪ್ಪರ್ತಿ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ರು. 11ಲಕ್ಷ ಬಿಡುಗಡೆಯಾಗಿದ್ದು, ಕ್ರಿಯಾಯೋಜನೆ ತಯಾರಿಸಲಾಗಿದೆ. ಪೋಲಂಪಲ್ಲಿ ರಸ್ತೆ ದುರಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಿ ಎರಡು ವರ್ಷಗಳೇ ಕಳೆದಿದ್ದು ಹಣ ಬಿಡುಗಡೆಯಾಗಿಲ್ಲವೆಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯಿಂದ 13-14ನೇ ಸಾಲಿನಲ್ಲಿ ಸುಮಾರು ರು. 5 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿದ್ಯಾರ್ಥಿವೇತನ ನೀಡುವಿಕೆ, ಹಾಸ್ಟೆಲ್ ಪುನರಾರಂಭ ಮುಂತಾದ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಒಟ್ಟು 138 ಮಿ.ಮೀ. ಮಳೆಯಾಗಿದೆ. ಹಿಗಾಗಿ ಮುಂಗಾರು ಹಂಗಾಮಿಗಾಗಿ ಇಲಾಖೆ ಸಿದ್ಧತೆ ನಡೆಸಿದ್ದು, ರಸಗೊಬ್ಬರ, ಬಿತ್ತನೆಬೀಜ, ಕೀಟನಾಶಕ ಮುಂತಾದುವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಡಲಾಗಿದೆ. ತಾಲೂಕಿನ 105 ಗ್ರಾಮಗಳಲ್ಲಿ ಮಣ್ಣು ಮಾದರಿ ಪರೀಕ್ಷೆಗೆ ವ್ಯವಸ್ತೆ ಮಾಡಲಾಗಿದೆ. 11 ಸಾವಿರ ಎಕರೆ ಪ್ರದೇಶದಲ್ಲಿ ಇಳುವರಿ ಹೆಚ್ಚಿಸಲು ಭೂಚೇತನ ಯೋಜನೆ ಜಾರಿಗೊಳಿಸಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು. ಸಭೆಯಲ್ಲಿ ತಾಪಂ ಅಧ್ಯಕ್ಷೆ ಆನಂದಮ್ಮ, ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.