ಕೋಲಾರ

ತಾಪಂ ಸಭೆ: ಹಲವು ಸಮಸ್ಯೆಗಳ ಚರ್ಚೆ

Published On :

ಚಿಕ್ಕಬಳ್ಳಾಪುರ: ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಆರೋಗ್ಯ, ಪಶು ಸಂಗೋಪನಾ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.
ತಾಪಂ ಸಭಾಂಗಣದಲ್ಲಿ ಅಧಿಕಾರಿಗಳಿಂದ ಪ್ರಗತಿಯ ಮಾಹಿತಿಯನ್ನು ಪಡೆದುಕೊಂಡು ಆದಷ್ಟು ಬೇಗ ತಮ್ಮ ತಮ್ಮ ಇಲಾಖೆಗಳಿಂದ ಜನರಿಗೆ ಸಿಗಬೇಕಾದ ಸವಲತ್ತುಗಳನ್ನು ಸೂಕ್ತ ಸಮಯದಲ್ಲಿ ತಲುಪಿಸಿ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಲಾಯಿತು.
ತಾಲೂಕಿನಾದ್ಯಂತ ವಾರ್ಷಿಕ 1361 ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ನಿಗದಿಪಡಿಸಿದ್ದು, ಈ ಸಾಲಿನಲ್ಲಿ ಇಲ್ಲಿಯವರೆಗೆ 126 ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 906 ವಂಕಿಧಾರಣೆ ಗುರಿಯಲ್ಲಿ ಈಗಾಗಲೇ 83 ವಂಕಿಧಾರಣೆ ಮಾಡಲಾಗಿದೆ. 252 ಮಕ್ಕಳಿಗೆ ಕ್ಷಯ ರೋಗ ನಿರೋಧಕ ಚುಚ್ಚುಮದ್ದು ನೀಡಲಾಗಿದೆ. ಇನ್ನೂ ನಾಯಿಕಡಿತ ಹಾಗೂ ಹಾವು ಕಡಿತಕ್ಕೆ ಔಷಧ ಲಭ್ಯವಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ತಾಲೂಕಿನಾದ್ಯಂತ ಈಗಾಗಲೇ 734 ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮಾಡಲಾಗಿದೆ. ಜಾನುವಾರುಗಳಿಗೆ ಸಾಮಾನ್ಯವಾಗಿ ತಗಲುವ ಕಾಲುಬಾಯಿ ರೋಗ, ಕರಳು ಬೇನೆ ಹಾಗೂ ಗಂಟಲು ಬೇನೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಲಸಿಕೆಗಳನ್ನು ನೀಡಲಾಗುತ್ತಿದೆ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದರು.
ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಪ್ರಮುಖವಾಗಿ ಕಾಡುತ್ತಿದ್ದು, ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಟ್ಟು ನಿಟ್ಟಾಗಿ ಸೂಚನೆ ನೀಡಲಾಗಿದೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ತಿಳಿಸಿದಾಗ, ತಾಲೂಕಿನಲ್ಲಿ ಒಟ್ಟು ಸ್ಥಳಾಂತರಗೊಳ್ಳಬೇಕಾದ 13 ಇಂಥ ಪ್ರಕರಣಗಳಿದ್ದು ಈಗಾಗಲೇ 10 ಟ್ರಾನ್ಸ್‌ಫಾರ್ಮರ್ ಗಳ ಸ್ಥಳಾಂತರವು ಪೂರ್ಣಗೊಂಡಿದೆ. ಇನ್ನೂ ಮೂರು ಪ್ರಕರಣಗಳು ಬಾಕಿ ಇವೆಯೆಂದು ಬೆಸ್ಕಾಂ ನ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.
ನಂತರ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಬೇಸಿಗೆ ರಜೆ ಅವಧಿಯಲ್ಲಿಯೂ ಸಹ ಮಧ್ಯಾಹ್ನದ ಊಟ ವಿತರಿಸಲಾಗಿದೆ. ತಾಲೂಕಿನಾದ್ಯಂತ ಕಳೆದ ಬೇಸಿಗೆ ರಜೆ ಅವಧಿಯಲ್ಲಿ 17152 ಮಕ್ಕಳು ಮಧ್ಯಾಹ್ನದ ಬಿಸಿಯೂಟವನ್ನು ಸವಿದಿದ್ದಾರೆ ಅಕ್ಷರ ದಾಸೋಹ ಅಧಿಕಾರಿ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಕೆಲ ವಿದ್ಯಾರ್ಥಿಗಳು ಶೇ.94 ರಷ್ಟು ಅಂಕವನ್ನು ಮತ್ತು ಪಿಯುಸಿ ಯಲ್ಲಿ ಶೇ.82 ರಷ್ಟು ಅಂಕಗಳಿಸಿದ್ದಾರೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ತಾ.ಪಂ.ಸದಸ್ಯರಾದ ಓಬಳಪ್ಪ, ವೆಂಕಟನಾರಾಯಣಪ್ಪ, ಮೋಹನ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.