ಕೋಲಾರ

ಜಿಲ್ಲಾಡಳಿತ ವಿರುದ್ಧ ದಲಿತರ ಹೋರಾಟ

Published On :

ಚಿಕ್ಕಬಳ್ಳಾಪುರ: ಅವ್ಯವಹಾರ, ಜತೆಗೆ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಜು. 11ರಂದು ಕಾಲ್ನಡಿಗೆ ಜಾಥಾ ಮತ್ತು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆ ಸಮನ್ವಯ ಸಮಿತಿಯ ನೂತನ ಜಿಲ್ಲಾಧ್ಯಕ್ಷ ಕೆ.ಸಿ. ರಾಜಕಾಂತ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ತಾಲೂಕಿನ ಕುಡುವತಿ ಗ್ರಾಮದ ಬಳಿ ಹತ್ತು ಎಕರೆ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗಿದೆ. ಇದರಲ್ಲಿ ಕಂದಾಯ ಇಲಾಖೆ ಪಾತ್ರವಿದೆ. ಹಿಂದೆ ಇಲ್ಲಿ ತಹಸೀಲ್ದಾರ್ ಆಗಿದ್ದ ನಟೇಶ್ ರಿಯಲ್ ಎಸ್ಟೇಟ್ ದಂಧೆ ನಡೆಸುವವರಿಗೆ ಸಹಕರಿಸಿದ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿತ್ತು. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.
ಸರ್ಕಾರಿ ನಿಯಮಗಳಂತೆ ಶೋಷಿತ ವರ್ಗಗಳ ಸಭೆಯನ್ನು ಕರೆದು ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಬೇಕು. ಆದರೆ, ಕೇವಲ ಚರ್ಚೆ ನಡೆಯುತ್ತಿದೆಯಾದರೂ ಸಮಸ್ಯೆ ಮಾತ್ರ ಪರಿಹಾರವಾಗುತ್ತಿಲ್ಲ. ಇತ್ತೀಚೆಗೆ ಸಮಸ್ಯೆಗಳ ಚರ್ಚೆಯೂ ನಿಂತು ಹೋಗಿದೆ. ಜಿಲ್ಲೆಯಲ್ಲಿ ಅಂತರ್ಜಲ ಕುಸಿಯಲು ಕಾರಣವಾಗಿರುವ ಮರಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಲಾಗುತ್ತಿದೆ. ಈ ಮೂಲಕ ಮರಳು ಮಾಫಿಯಾ ಕೋಟ್ಯಂತರ ರುಪಾಯಿ ದಂಧೆ ನಡೆಸುತ್ತಿದೆ. ಇದನ್ನು ಪೊಲೀಸ್ ಇಲಾಖೆ ಗಮನಕ್ಕೆ ತಂದರೂ ಸಹ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು. ಕೆಲವು ಅಧಿಕಾರಿಗಳನ್ನು ಬಳಸಿಕೊಂಡು ಸರ್ಕಾರಿ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವವರನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸಿ, ಭೂ ರಹಿತರಿಗೆ ಕಾನೂನಿನ ನಿಯಮಾನುಸಾರ ನೀಡಬೇಕು. ಕಾಲ ಕಾಲಕ್ಕೆ ದಲಿತರ ಸಭೆ ಕರೆದು ಸಮಸ್ಯೆಗಳನ್ನು ಚರ್ಚಿಸಬೇಕು. ಶೋಷಣೆಗೆ ಗುರಿಯಾಗುವವರೇ ಸ್ವಯಂ ದೂರನ್ನು ತಂದು ಜಿಲ್ಲಾಡಳಿತದ ಗಮನ ಸೆಳೆದರೂ ಸಹ ಸ್ಪಂದಿಸದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.
ಜು. 11ರಂದು ನಗರದಿಂದ ಚದಲಪುರ ಬಳಿ ಇರುವ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯವವರೆಗೂ ಕಾಲ್ನಡಿಗೆ ಜಾಥಾ ನಡೆಸಲಿದ್ದು, ಆ ನಂತರ ಪ್ರತಿಭಟನೆ ನಡೆಸಿ ಕಚೇರಿಯ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಈ ಹೋರಾಟದಲ್ಲಿ 16ಕ್ಕೂ ಹೆಚ್ಚು ದಲಿತ ಸಂಘಟನೆಗಳು ಭಾಗವಹಿಸಲಿವೆ ಎಂದರು. ಸಮಿತಿ ಕಾರ್ಯದರ್ಶಿ ಕೇಶವ, ದಲಿತ ಮುಖಂಡರಾದ ಸು.ಧಾ.ವೆಂಕಟೇಶ್, ಗವಿರಾಯಪ್ಪ, ನಾರಾಯಣ್ ಜೀ, ಜಿ. ನಾರಾಯಣಸ್ವಾಮಿ ಮುಂತಾದವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.