ಕೋಲಾರ

ಮೋದಿ ಅಲೆ ಮಾಧ್ಯಮಗಳ ಸೃಷ್ಟಿ

Published On :

ಕೋಲಾರ: ರಾಷ್ಟ್ರದಲ್ಲಿ ನರೇಂದ್ರ ಮೋದಿ ಅಲೆ ಹೆಚ್ಚಾಗಿದೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಆರೋಪಿಸಿದರು.
ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮೋ ಅಲೆ ಇದೆ ಎಂಬುದು ವಾಸ್ತವಾಂಶಕ್ಕೆ ದೂರವಾಗಿದೆ.
ಪ್ರಜಾಪ್ರಭುತ್ವಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮೋದಿಯವರನ್ನು ಚುನಾವಣೆಗೆ ಮುನ್ನವೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಮೂಲಕ ಅಪಚಾರವೆಸಗಿದೆ, ಯಾವ ಪಕ್ಷ ಬಹುಮತ ಗಳಿಸುತ್ತದೋ ಆ ಪಕ್ಷದಿಂದ ಗೆದ್ದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುವುದು ಪ್ರಜಾತಂತ್ರದ ಪದ್ಧತಿ.
ಆದರೆ, ಬಿಜೆಪಿಯವರು ನೀತಿ, ನಿಯಮ, ಸಿದ್ಧಾಂತಗಳನ್ನು ಗಾಳಿ ತೂರಿದ್ದಾರೆಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ಸಿಗೆ 20 ಸ್ಥಾನ: ಯುಪಿಎ ಸರ್ಕಾರದ ಸಾಧನೆ ಹಾಗೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ 8 ತಿಂಗಳ ಸಾಧನೆ ಕಾಂಗ್ರೆಸ್‌ಗೆ ವರದಾನವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುವ ಆಶಾಭಾವನೆ ಹೊಂದಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯುಪಿಎ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯಿದೆ, ಆಹಾರ ಭದ್ರತೆ ಕಾಯಿದೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದರೆ, ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಮುಂತಾದ ಯೋಜನೆಗಳಿಂದಾಗಿ ಬಡವರು ನೆಮ್ಮದಿಯಿಂದ ಜೀವನ ಮಾಡುವಂತಾಗಿರುವುದರಿಂದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತಹಾಕುವುದು ನಿಶ್ಚಿತವೆಂದರು.
ಜಾಫರ್ ಷರೀಫ್‌ಗೆ ಸೂಕ್ತ ಸ್ಥಾನಮಾನ
ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ. ಜಾಫರ್ ಷರೀಫ್ ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂಬುದು ಪಕ್ಷದ ಎಲ್ಲಾ ಕಾರ್ಯಕರ್ತರ ಅಭಿಪ್ರಾಯವಾಗಿದ್ದು ಹೈಕಮಾಂಡ್ ಶೀಘ್ರವೇ ಈ ಕುರಿತು ಉತ್ತಮ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಸುದ್ದಿಗಾರರೂಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಜಾಫರ್ ಷರೀಫರ ಆಶೀರ್ವಾದ ಸಿಗಲಿದೆ, ಜೊತೆಗೆ ಪಕ್ಷಕ್ಕೆ ಹಾಗೂ ನಮ್ಮಂತಹವರಿಗೆ ಮಾರ್ಗದರ್ಶಕರಾಗಿರಬೇಕೆಂದು ಮನವಿ ಮಾಡಿದರು. ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಯುವಕರೊಬ್ಬರಿಗೆ ಅವಕಾಶ ನೀಡಿದೆ, ಇದರಿಂದ ಷರೀಫರಿಗೆ ಕೊಂಚ ಅಸಮಾಧಾನವಾಗಿದ್ದರೂ ಪಕ್ಷ ಬಿಡುವ ನಿರ್ಧಾರ ಕೈಗೊಳ್ಳಲಾರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಈಗಾಗಲೇ ಹೈಕಮಾಂಡ್‌ಗೆ ಪತ್ರ ಬರೆದು ಜಾಫರ್ ಷರೀಫ್ ಅವರಿಗೆ ಸೂಕ್ತ ಸ್ಥಾನ ಕಲ್ಪಿಸಬೇಕೆಂದು ಮನವಿ ಮಾಡಿದ್ದು ಶೀಘ್ರವೇ ಸಮಸ್ಯೆ ನಿವಾರಣೆ ಆಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.