ಮತದಾನ ಜಾಗೃತಿಗೆ ವಿದ್ಯಾರ್ಥಿಗಳ ಬಳಕೆಗೆ ಚಿಂತನೆ
ಕೋಲಾರ: ಕೋಲಾರ ಮೀಸಲು ಕ್ಷೇತ್ರದಲ್ಲಿ ಮತದಾನ ಪ್ರಮಾಣ ಕನಿಷ್ಠ ಶೇ.80ಕ್ಕಿಂತ ಹೆಚ್ಚು ಮಾಡುವ ಉದ್ದೇಶದಿಂದ ಮತದಾರರನ್ನು ಜಾಗೃತಿಗೊಳಿಸುವ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ ಮತದಾನ ಪ್ರಮಾಣ ಪುರುಷರಿಗಿಂತ ಕಡಿಮೆ ಆಗಿದೆ. ಸುಮಾರು 100 ಗ್ರಾಮಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ, ಈ ಹಿನ್ನಲೆಯಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಎನ್ಸಿಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಬಳಸಿಕೊಂಡು ವೆಬ್ಕ್ಯಾಸ್ಟ್ ಮಾಡಲು ಉದ್ದೇಶಿಸಲಾಗಿದೆ ಎಂದರು.
2009ರ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಶೇ.69.35 ರಷ್ಟು ಮತದಾನ ನಡೆದಿದ್ದು, ಇದರಲ್ಲಿ ಪುರಷರು ಶೇ.71.24 ಮತ್ತು ಮಹಿಳೆಯರು ಶೇ.69ರಷ್ಟು ಮತ ಚಲಾಯಿಸಿದ್ದಾರೆ. ಅದೇ ರೀತಿ 2013ರ ಕೋಲಾರ ವಿಧಾನ ಸಭಾ ಚುನಾವಣೆಯಲ್ಲಿ ಶೇ.81.49 ರಷ್ಟು ಮತದಾನ ನಡೆದಿದ್ದು, ಇದರಲ್ಲಿ ಪುರಷರು ಶೇ.82.58 ಮತ್ತು ಮಹಿಳೆಯರು 80.39 ರಷ್ಟು ಮತ ಚಲಾಯಿಸಿದ್ದಾರೆ ಎಂದರು. ಇವೆರಡು ಚುನಾವಣೆಯಲ್ಲಿ ಮಹಿಳೆಯರ ಮತದಾನ ಪ್ರಮಾಣ ಕಡಿಮೆಯಾಗಿರುದನ್ನು ಮನಗಂಡು ಮತದಾನದ ಜಾಗೃತಿ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ವಿವರಿಸಿದರು.
ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಸುಮಾರು 20 ಸಾವಿರ ಪದವಿ ವಿದ್ಯಾರ್ಥಿಗಳನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಇವರಿಗೆ ಮೊದಲು ಮತದಾನದ ಅರಿವು ಮೂಡಿಸಿ ನಂತರ ಗ್ರಾಮಗಳಲ್ಲಿರುವ ಮತದಾನದರಿಗೆ ಜಾಗೃತಿ ಮೂಡಿಸಲು ಕಳುಹಿಸಲಾಗುವುದು ಎಂದು ಹೇಳಿದರು. ಮತದಾನ ಪ್ರಮಾಣ ಹೆಚ್ಚಿಸಲು ಈಗಾಗಲೇ ಸ್ವೀಪ್ ಸಮಿತಿಯಿಂದ ಬೀದಿ ನಾಟಕ, ಕರಪತ್ರ ವಿತರಣೆ, ಜಾಥಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ, ವೆಬ್ಕ್ಯಾಸ್ಟ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುವ ಕಾಲೇಜುಗಳಿಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದರು. ಲ್ಯಾಬ್ಟ್ಯಾಪ್ ಇರುವ ವಿದ್ಯಾರ್ಥಿಗಳನ್ನು ವೆಬ್ಕ್ಯಾಸ್ಟಿಂಗ್ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಇಂಟರ್ ನೆಟ್ವ್ಯವಸ್ಥೆಯನ್ನು ನಾವು ಮಾಡಿಕೊಡುವುದಾಗಿ ತಿಳಿಸಿದರು. ರಾಜಕೀಯ ಪಕ್ಷಗಳೊಂದಿಗೆ ಸಂಬಂಧವಿರಿಸಿಕೊಂಡಿರುವ ವಿದ್ಯಾರ್ಥಿಗಳನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದಿಲ್ಲ ಮತ್ತು ಸ್ತ್ರೀ ಶಕ್ತಿಗಳು ಬಳಕೆ ಮಾಡಿಕೊಳ್ಳದೆ ಇರಲು ನಿರ್ಧರಿಸಲಾಗಿದೆ, ಚುನಾವಣಾ ಕಾರ್ಯದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸ್ವೀಪ್ ಸಮಿತಿ ಹಾಗೂ ಮಾಧ್ಯಮ ಸಮಿತಿಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ, ಎಲ್ಲಾ ಕಾಲೇಜುಗಳಿಗೆ ಹೋಗಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲಾಗುತ್ತದೆ ಎಂದು ಹೇಳಿದರು.
ಕೋಲಾರ ಲೋಕಸಭಾ ವ್ಯಾಪ್ತಿಯ ಬ್ಯಾಂಕ್ಗಳಲ್ಲಿ ಯಾರಾದರೂ ಈ ಅವಧಿಯಲ್ಲಿ ಅನುಮಾನಸ್ಪದವಾಗಿ 10ಲಕ್ಷ ರು.ಗಳನ್ನು ಡ್ರಾ ಮಾಡಿದರೆ ಮತ್ತು ಠೇವಣಿ ಮಾಡಿದರೆ ವಿವರ ನಿಡುವಂತೆ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂಸಿದರು. ಗೋಷ್ಠಿಯಲ್ಲಿ ಚುನಾವಣಾ ವೆಚ್ಚ ವೀಕ್ಷಕರಾದ ಮರುಗೈಯನ್, ಸುದರ್ಶನ ಸಾಗರ್, ಅಪರ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

