ಕೋಲಾರ

ಕುಮಾರಸ್ವಾಮಿ ನಾಮಪತ್ರ ನಾಳೆ

Published On :

ಚಿಕ್ಕಬಳ್ಳಾಪುರ: ಜೆಡಿಎಸ್‌ನ ಪ್ರಮುಖ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಲೋಕಸಭೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಮಾ.26ರಂದ ನಾಮಪತ್ರ ಸಲ್ಲಿಸಲಿದ್ದಾರೆ.
ಕುಮಾರಸ್ವಾಮಿ ಅವರ ಸ್ಪರ್ಧೆಯಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕದನ ಕಣವಾಗಿ ಮಾರ್ಪಾಡಾಗಲಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಎಸ್‌ಪಿ, ಬಿಎಸ್‌ಪಿ, ಜೆಡಿಯು ಸೇರಿದಂತೆ ಇತರೆ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಆದರೆ, ಜೆಡಿಎಸ್ ಅಭ್ಯರ್ಥಿಯ ಬಗ್ಗೆ ತಿಳಿಯದೇ ಪ್ರಾರಂಭದಲ್ಲಿ ಗೊಂದಲ ಮೂಢಿತ್ತು. ಮೊದಲಿಗೆ ಆದಿಕೇಶವಲು ಅಳಿಯ, ಉದ್ಯಮಿ ಶ್ರೀನಿವಾಸಮೂರ್ತಿ, ಮಧುಸೀತಪ್ಪ, ಕೆ.ಪಿ.ಬಚ್ಚೇಗೌಡರವರ ಹೆಸರು ಕೇಳಿ ಬಂದಿತ್ತು. ಇವರ ಪೈಕಿ ಒಬ್ಬರು ಅಭ್ಯರ್ಥಿಯಾಗಲಿದ್ದಾರೆ ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ನಂತರದ ರಾಜಕೀಯ ಬೆಳವಣಿಗೆಗಳ ನಡುವೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿಯೇ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೆಲ ದಿನಗಳು ಹರಿದಾಡಿ ಸ್ವಲ್ಪ ಮಟ್ಟಿಗೆ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತಂದಿತ್ತು. ಆದರೆ, ನಂತರ ಕುಮಾರಸ್ವಾಮಿಯೇ ಸ್ಪರ್ಧಿಸಲಿದ್ದಾರೆಂಬ ಸುದ್ದಿ ಕಾರ್ಯಕರ್ತರಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿತ್ತು. ನಿರೀಕ್ಷೆಯಿಂತೆ ಇದೀಗ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಮಾ.26ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸಭೆಯಲ್ಲಿ ಘೋಷಣೆಯಾಗಿತ್ತು: ಇತ್ತೀಚೆಗೆ ಚಿಕ್ಕಬಳ್ಳಾಪುರ ನಗರದ ಹೊರ ವಲಯದಲ್ಲಿರುವ ನಂದಿ ಕೋಲ್ಡ್ ಸ್ಟೋರೇಜ್ ಬಳಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕುಮಾರಸ್ವಾಮಿ ಅವರೇ ಅಭ್ಯರ್ಥಿ ಎಂದೇ ಘೋಷಿಸಲಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಮಾತ್ರ ಇದಕ್ಕೆ ತಕ್ಷಣಕ್ಕೆ ಒಪ್ಪಿಕೊಂಡಿರಲಿಲ್ಲ. ತಾವು ಸ್ಪರ್ಧಿಸಿದರೆ ಒಂದೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತ ಕುಳಿತಕೊಳ್ಳಬೇಕಾಗುತ್ತದೆ ಅಂದಿದ್ದರು. ಅಲ್ಲದೆ, ಈ ಬಗ್ಗೆ ರಾಮನಗರದಲ್ಲಿ ಸಭೆ ಕರೆದು ಅಲ್ಲಿನ ಕಾರ್ಯಕರ್ತರ ಅಭಿಪ್ರಾಯ ಪಡೆದಿದ್ದರು.  ಇಷ್ಟೆಲ್ಲಾ ಆದ ಎರಡ್ಮೂರು ದಿನಗಳ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಇನ್ನೂ ಜೆಡಿಎಸ್ ಅಭ್ಯರ್ಥಿ ಘೋಷಣೆಗೆ ಕಾಯುತ್ತಿದ್ದ ಇತರೆ ಪಕ್ಷಗಳಿಗೆ ಕುಮಾರಸ್ವಾಮಿ ಸ್ಪರ್ಧೆ ಬಿಸಿ ತಗುಲಿದರೆ, ಕೊನೆಗೂ ಕುಮಾರಸ್ವಾಮಿ ಸ್ಪರ್ಧೆಯ ವಿಷಯದಲ್ಲಿ ಯಶಸ್ವಿಯಾದೆವು ಎಂದು ವಿಜಯೋತ್ಸವ ಆಚರಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.