ಬಚ್ಚೇಗೌಡ, ಎಚ್ಡಿಕೆ ಉಮೇದುವಾರಿಕೆ ಇಂದು
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಅಖಾಡಕ್ಕಿಳಿಯುವ ಸಲುವಾಗಿ ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿಗೆ ನಾಮಪತ್ರಗಳು ಸಲ್ಲಿಕೆಯಾಗುವ ನಿರೀಕ್ಷೆ ಇದೆ.
ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ, ಜೆಡಿಯು ಪಕ್ಷದಿಂದ ಜಿ.ಕೆ.ಸಿ. ರೆಡ್ಡಿ, ಸಿಪಿಎಂನ ಜಿ.ವಿ. ಶ್ರೀರಾಮರೆಡ್ಡಿ, ಆಮ್ಆದ್ಮಿ ಪಕ್ಷ ಆರ್ಕೇಶ್, ಸಮಾಜವಾದಿ ಪಾರ್ಟಿ ರಾಬಿನ್ ಮಾಥ್ಯೂಸ್, ಬಹುಜನ ಸಮಾಜವಾದಿ ಪಾರ್ಟಿ (ಕರ್ನಾಟಕ) ಚಿತ್ರ ಪ್ರಸಾದ್ ಮತ್ತು ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 15 ನಾಮಪತ್ರಗಳು ಸ್ವೀಕಾರಗೊಂಡಿದ್ದು ಕಡೆಯ ದಿನವಾದ ಬುಧವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಜೆಡಿಎಸ್ ಪಕ್ಷ ಬುಧವಾರ ರ್ಯಾಲಿ ಮತ್ತು ಸಮಾವೇಶ ಕೈಗೊಂಡಿದ್ದು ನಾಮಪತ್ರ ಸಲ್ಲಿಸುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಪಕ್ಷದ ಹಿರಿಯ ಮುಖಂಡರು, ಶಾಸಕರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಬುಧವಾರ ರ್ಯಾಲಿ ಹಮ್ಮಿಕೊಂಡಿದ್ದಾರೆ. ನಗರದ ಶ್ರೀದೇವಿ ಪ್ಯಾಲೇಸ್ನಿಂದ ಪ್ರಾರಂಭವಾಗಲಿರುವ ರ್ಯಾಲಿಯಲ್ಲಿ ಬಿಜೆಪಿ ಮುಖಂಡ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವ ಆರ್. ಅಶೋಕ್ ಸೇರಿದಂತೆ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ನಂತರ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಸಮಾವೇಶ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಂಗಳವಾರ ನಾಮಪತ್ರ: ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಉಳಿದಿರುವಾಗ ಮಾ.25 ರಂದು ಮೂರು ಪಕ್ಷೇತರರು ಸೇರಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬಿಎಸ್ಪಿಯಿಂದ ಚಿತ್ರಪ್ರಸಾದ್, ಆಮ್ಆದ್ಮಿ ಪಕ್ಷದಿಂದ ಆರ್ಕೇಶ್ (ಎರಡನೇಯದು), ಪಕ್ಷೇತರ ಅಭ್ಯರ್ಥಿಗಳಾಗಿ ನಂಜಪ್ಪ, ಗೋಪಾಲಗೌಡ, ಜಿ.ಎನ್. ರವಿ ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಪಕ್ಷೇತರ ಅಭ್ಯರ್ಥಿ ನಂಜಪ್ಪರೊಬ್ಬರೇ 4 ನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

