ಡಿಸಿ ಕ್ರಮಕ್ಕೆ ನಗರಸಭೆ ಗರಂ
ಚಿಕ್ಕಬಳ್ಳಾಪುರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಕೆಲ ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಗಳಿಂದ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಮತ್ತು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೇರೆ ಕಡೆ ಜಿಲ್ಲಾಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಭೆಗಳನ್ನು ಸಕಾಲಕ್ಕೆ ಕರೆದು ಚರ್ಚಿಸಿ ತುರ್ತು ಕ್ರಮ ಕೈಗೊಳ್ಳುತ್ತಿದ್ದರೆ, ಚಿಕ್ಕಬಳ್ಳಾಪುರದಲ್ಲಿ ಜನಪ್ರತಿನಿಧಿಗಳನ್ನು ನಿರ್ಲಕ್ಷ್ಯಿಸುತ್ತಿರುವುದು ನ್ಯಾಯಸಮ್ಮತವಲ್ಲ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ನಗರದಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡಲು ರಾಜ್ಯ ಸರ್ಕಾರ ತುರ್ತಾಗಿ 1 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಿಂದ ಕೊಳವೆ ಬಾವಿಗಳನ್ನು ಕೊರೆಸುವುದರ ಜೊತೆಗೆ ಖಾಸಗೀ ಟ್ಯಾಂಕರ್ಗಳ ಮೂಲಕ ನೀರನ್ನು ಒದಗಿಸಲು ಸೂಚಿಸಿದೆ. ಈಗಾಗಲೇ ತಲಾ ಒಂದು ಟ್ಯಾಂಕರ್ಗೆ 375 ರು.ಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆಯಾದರೂ ಜಿಲ್ಲಾಧಿಕಾರಿಗಳು ಟೆಂಡರ್ ಕರೆಯುವಲ್ಲಿಯೇ ವಿಳಂಬ ಮಾಡುತ್ತಿರುವುದರಿಂದ ನಗರದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತಿದೆ ಎಂದರು.
ಹಿರಿಯ ಸದಸ್ಯ ಎಸ್.ಎಂ. ರಫಿಕ್ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ನಗರಸಭಾ ಸದಸ್ಯರಾಗಿರುವ ನಾವೂ ಜನರಿಗೆ ಉತ್ತರ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮೊಂದಿಗೆ ಸಭೆ ಕರೆಸಿ ಚರ್ಚೆ ನಡೆಸಬೇಕಾಗಿತ್ತು. ಆದರೆ, ಇದುವರೆಗೂ ಈ ಕೆಲಸವಾಗಿಲ್ಲ. ಬದಲಿಗೆ ನಗರಸಭಾ ಯೋಜನಾ ನಿರ್ದೇಶಕರು ಮತ್ತು ಪೌರಾಯುಕ್ತರು ನೀಡಿರುವ ತಪ್ಪು ಮಾಹಿತಿ ಪಡೆದು ಪರಿಹಾರ ಕಾರ್ಯ ಕೈಗೊಳ್ಳಲು ಮುಂದಾಗಿರುವುದರಿಂದ ಸಮಸ್ಯೆ ಬಗೆಹರಿಯದೇ ಜನರು ಸಂಕಷ್ಟಕ್ಕೆ ಗುರಿಯಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗರಸಭಾ ಕೌನ್ಸಿಲ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸದಸ್ಯರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಾರ್ಯಗಳನ್ನು ಕೈಗೊಂಡು ಜನರ ಸಮಸ್ಯೆ ದೂರ ಮಾಡಬೇಕೆಂದು ಒತ್ತಾಯಿಸಿದರು. ಸಭೆಯಲ್ಲಿ ನಗರಸಭಾ ಉಪಾಧ್ಯಕ್ಷ ಜಬೀನ್ ತಾಜ್, ಸದಸ್ಯರಾದ ಗಜೇಂದ್ರ, ಮಂಜುನಾಥ್ ಚಾರಿ, ಕಿಸಾನ್ ಕೃಷ್ಣಪ್ಪ, ನಿರ್ಮಲಪ್ರಭು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

