ಕೋಲಾರ

12ರಿಂದ ಸಂಚಾರಿ ನ್ಯಾಯಾಲಯ, ಸಾಕ್ಷರತಾ ರಥ

Published On :

ಚಿಕ್ಕಬಳ್ಳಾಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಮೇ 12 ರಿಂದ ಮೇ 29 ರವರೆಗೆ ಸಂಚಾರಿ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ ಸಂಚರಿಸಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ರಾಜಿ ಮೂಲಕ ಅನೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ.ಎಸ್. ಬೆಳ್ಳುಂಕೆ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಷಯಕ್ಕೂ ವ್ಯಾಜ್ಯಗಳು ನ್ಯಾಯಾಲಯದ ಮೆಟ್ಟಿಲೇರುತ್ತಿರುವುದರಿಂದ ಒತ್ತಡ ಹೆಚ್ಚಾಗುತ್ತಿದ್ದು ಜನರು ಸಹ ಅನವಶ್ಯಕವಾಗಿ ತೊಂದರೆಗೆ ಸಿಲುಕಿಕೊಳ್ಳುತ್ತಿದ್ದಾರೆ. ಇದಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಹಂತದ ನ್ಯಾಯಾಲಗಳಲ್ಲಿರುವ ವ್ಯಾಜ್ಯಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಸ್ಪರ ರಾಜಿ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಅದರಂತೆ ಮೇ 12 ರಿಂದ ಮೇ 29 ರವರೆಗೆ ನಡೆಯಲಿರುವ ಸಂಚಾರಿ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ ಸಂಚಾರ ಸಂದರ್ಭದಲ್ಲಿ ಜಿಲ್ಲೆಯಲ್ಲೂ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದು ಇದರಿಂದ ಅತಿ ಕಡಿಮೆ ಖರ್ಚು, ಕಡಿಮೆ ಅವಧಿಯಲ್ಲಿ ಸಂಪೂರ್ಣವಾಗಿ, ಹೆಚ್ಚು ಪರಿಣಾಮಕಾರಿಯಾಗಿ, ನ್ಯಾಯ ಸಿಕ್ಕಿ ಎಲ್ಲರಿಗೂ ಅನುಕೂಲವಾಗುತ್ತದೆ ಎಂದರು.  ಈಗಾಗಲೇ ನ್ಯಾಯಾಲಯದಲ್ಲಿ ಬಾಕಿ ಇರುವ ಅಥವಾ ವ್ಯಾಜ್ಯಪೂರ್ವ ಪ್ರಕರಣಗಳು, ರಾಜಿ ಮಾಡಬಹುದಾದ ಸಣ್ಣ ಪುಟ್ಟ ಕ್ರಿಮಿನಲ್, ಸಿವಿಲ್, ಜೀವನಾಂಶ, ಹಣ ವಸೂಲಿ, ಭೂಸ್ವಾಧೀನ, ಮೋಟಾರು ವಾಹನ ಹಾಗೂ ಇತರ ವಿಷಯಗಳಿಗೆ  ಸಂಬಂಧಿಸಿದಂತಹ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜಿಯಾದ ನಂತರ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ ಎಂದರು.  ಸಾರ್ವಜನಿಕರಿಗೆ ನ್ಯಾಯಾದಾನ ದೊರಕಿಸಿ ಕೊಡುವುದರ ಜೊತೆಗೆ ಅವರ ಹಕ್ಕುಗಳ ಬಗ್ಗೆ ಕಾನೂನು ಅರಿವು ಮೂಡಿಸಲು ಕಾನೂನು ಸಾಕ್ಷರತಾ ಮುಂದಾಗಲಿದ್ದು ಇದರ ಜೊತೆಗೆ ಲೋಕ ಅದಾಲತ್ ಕೂಡ ನಡೆಯಲಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಮೇ 12 ರಿಂದ 14  ರವರೆಗೆ ಇದರ ಅನುಕೂಲವನ್ನು ಪಡೆಯಬಹುದು. ಅದೇ ರೀತಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲೂ ಕಾನೂನು ಸಾಕ್ಷರತಾ ಸಂಚರಿಸಲಿದೆ ಎಂದರು.
ಸಂಚಾರಿ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ಸಂಚಾರ ಕಾರ್ಯಕ್ರಮದ ಉದ್ಘಾಟನೆಯನ್ನು ಮೇ 12 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ನೆರವೇರಿಸಲಿದ್ದಾರೆ. ಎಸ್ಪಿ ಡಾ. ದಿವ್ಯಾ ಗೋಪಿನಾಥ್ ಹಾಗೂ ವಕೀಲರ ಸಂಘದ, ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್. ಶೋಭ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.