ಕೋಲಾರ

ರೋಗ ಮುಕ್ತ ತಾಲೂಕಿಗೆ ಪ್ರಯತ್ನ: ಶಾಸಕ ಸುಬ್ಬಾರೆಡ್ಡಿ

Published On :

ಬಾಗೇಪಲ್ಲಿ: ತಾಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ರೋಗ ಮುಕ್ತ ತಾಲೂಕನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭರವಸೆ ನೀಡಿದರು.
ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಪುರಸಭಾ ಕಾರ್ಯಾಲಯ, ರೆಡ್‌ಕ್ರಾಸ್ ಸಂಸ್ಥೆ ಹಾಗೂ ಸರ್ಕಾರಿಯ ಸಂಯುಕ್ತ ಆಶ್ರಯದಲ್ಲಿ ಪುರಸಭೆಯ ಶೇ.22.75 ಹಾಗೂ ಶೇ.22.25 ರ ಅನುದಾನದಲ್ಲಿ ಎಸ್ಸಿ, ಎಸ್.ಟಿ, ಅಲ್ಪಸಂಖ್ಯಾತರು ಸೇರಿದಂತೆ ಹಿಂದುಳಿದ ವರ್ಗಗಳ ಜನರಿಗಾಗಿ ಏರ್ಪಡಿಸಲಾಗಿದ್ದ ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನುರಿತ ತಜ್‌ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಿ ಬಾಳಬೇಕೆಂಬ ದೃಷ್ಟಿಯಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ವಿವಿಧ ರೀತಿಯ  ಕಾಯಿಲೆಗಳಿಂದ ನರಳುತ್ತಿರುವ ಬಡ ರೋಗಿಗಳು  ಸರ್ಕಾರದಿಂದ ಹಮ್ಮಿಕೊಳ್ಳುವಂತಹ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಅನೇಕ ಬಡ ಮಹಿಳೆಯರು ಗೌಪ್ಯ ಕಾಯಿಲೆಗಳಿಂದ ನರಳುತ್ತಿದ್ದರೂ ಅವರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ದುಪ್ಪಟ್ಟು ಹಣ ನೀಡಿ ಚಿಕಿತ್ಸೆ ಪಡೆಯಲು ಮುಂದಾಗುವುದಿಲ್ಲ. ಇದರಿಂದ ಪಟ್ಟಣದ ನಾಗರಿಕರಿಗೆ ನೆರವಾಗಲಿ ಎಂಬ ಉದ್ದೇಶದಿಂದ ವಿಶೇಷವಾಗಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಅವರ ಅನುಮತಿ ಪಡೆದುಕೊಂಡು ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಆರೋಗ್ಯ ಶಿಬಿರಗಳನ್ನು ಗ್ರಾಮೀಣ ಭಾಗದಲ್ಲಿ, ತಾಲೂಕಿನ ಹೊಬಳಿ ಮಟ್ಟಕ್ಕೂ ವಿಸ್ತರಿಸಲಾಗುವುದು, ಶಸ್ತ್ರ ಚಿಕಿತ್ಸೆಗೆ ಒಳಗಾದ ಅರ್ಹರನ್ನು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತ ಚಿಕಿತ್ಸೆ  ಕೊಡಿಸಲಾಗುವುದು ಹಾಗೂ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಲಾಗಿದ್ದು, ಪಟ್ಟಣದ ಜನತೆಗೆ ಫ್ಲೋರೈಡ್ ರಹಿತ ಶುದ್ಧವಾದ ಕುಡಿಯುವ ನೀರು ನೀಡಲಾಗುವುದು ಎಂದರು.
ಶಿಬಿರದಲ್ಲಿ ಭಾಗವಹಿಸಿದ್ದ ರೋಗಿಗಳಿಗೆ ನುರಿತ ವೈದ್ಯರ ತಂಡದಿಂದ ಚಿಕಿತ್ಸೆಯ ಜೊತೆಗೆ ಉಚಿತವಾಗಿ ಔಷಧಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಉಷಾರಾಣಿಪ್ರಭು, ಉಪಾಧ್ಯಕ್ಷ ನರಸಿಂಹಮೂರ್ತಿ, ತಹಸೀಲ್ದಾರ್ ಎಂ.ಎ.ಪದ್ಮ, ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎ.ಜಿ. ಸುಧಾಕರ್, ಎಸ್.ಐ. ವಿ. ಮುನಿರೆಡ್ಡಿ, ಸದಸ್ಯರಾದ ನಲ್ಲಪ್ಪ, ಭಾಸ್ಕರ್, ವೇಣು, ಎ.ವಿ.ಮಧುಸೂಧನ ರೆಡ್ಡಿ, ಮಮತ ನಾಗರಾಜು, ಚನ್ನಮ್ಮಮೂರ್ತಿ, ರಾಧಮ್ಮ ಮಂಜು, ತಾಲೂಕು ಆಡಳಿತ ವೈದ್ಯಾಧಿಕಾರಿ ರವಿಕುಮಾರ್, ಆಸ್ಪತ್ರೆ ಆಡಳಿತಾಧಿಕಾರಿ ಮಂಜೇನಾಯ್ಕ್, ಪುರಸಭೆ ಮುಖ್ಯಾಧಿಕಾರಿ ಆರ್. ಶ್ರೀಕಾಂತ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.