ಕೋಲಾರ

ರಾಜಿ ಸಂಧಾನದಲ್ಲಿ ಸಣ್ಣ ಪುಟ್ಟ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ

Published On :

ಚಿಕ್ಕಬಳ್ಳಾಪುರ: ಸಣ್ಣ ಪುಟ್ಟ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ, ಹಣ ಉಳಿತಾಯವಾಗುತ್ತದೆ. ಈ ನಿಟ್ಟಿನಲ್ಲಿ ಸಹಕಾರಿಯಾಗಿರುವ ಸಂಚಾರಿ ಜನತಾ ನ್ಯಾಯಾಲಯವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ.ಎಸ್. ಬೆಳ್ಳುಂಕೆ ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ವಕೀಲರ ಸಂಘ, ಜಿಲ್ಲಾಡಳಿತ, ಜಿ.ಪಂ., ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಜನತಾ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಾನೂನಿನ ಅರಿವಿಲ್ಲದಿರುವ ಹಿನ್ನೆಲೆಯಲ್ಲಿ ಬಡ ಜನರು ಸೇರಿದಂತೆ ಅನೇಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದಂತಹ ಸಣ್ಣಪುಟ್ಟ ವಿವಾದಗಳಿಗೂ ನ್ಯಾಯಾಲಯದ ಮೆಟ್ಟಿಲೇರಿ ತಮ್ಮ ಸಮಯ ಮತ್ತು ಹಣವನ್ನು ಅನವಶ್ಯಕವಾಗಿ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಉಚಿತ ಕಾನೂನು ಸಲಹೆ ನೀಡುತ್ತಿರುವ ಕಾನೂನು ಸೇವಾ ಪ್ರಾಧಿಕಾರವು ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಜನತಾ ನ್ಯಾಯಾಲಯದ ಮೂಲಕ ಅರಿವು ಮೂಡಿಸುತ್ತಿದೆ. ಜನರ ಬಳಿಗೆ ಹೋಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಆದಷ್ಟು ಬೇಗ ಇತ್ಯರ್ಥಪಡಿಸುತ್ತಿದೆ ಎಂದರು.
ಸಂಚಾರಿ ನ್ಯಾಯಾಲಯವು ಜಿಲ್ಲಾದ್ಯಂತ ಸಂಚರಿಸಲಿದೆ. ತಮ್ಮ ಊರುಗಳಿಗೆ ಸಂಚಾರಿ ನ್ಯಾಯಾಲಯ ಬಂದಾಗ ಜನರು ಸದುಪಯೋಗಪಡಿಸಿಕೊಳ್ಳಬೇಕು. ತಮ್ಮಲ್ಲಿ ಅನುಮಾನಗಳೇನಾದರೂ ಇದ್ದಲ್ಲಿ ವಿಷಯವನ್ನು ತಿಳಿಸಿ ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಮಾತನಾಡಿ, ಪ್ರಮುಖವಾಗಿ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ತಿಳಿಸುವಂತಹ ಕೆಲಸ ನಡೆಯಬೇಕು. ಅರಿವಿನ ಕೊರತೆಯಿಂದ ತೊಂದರೆಯನ್ನು ಅನುಭವಿಸುತ್ತಿರುವವರನ್ನು ಗುರುತಿಸಿ ಅವರಿಗೆ ನ್ಯಾಯ ಸಿಗುವಂತೆ ಮಾಡಬೇಕು. ಆಗ ಕಾನೂನಿನ ಮಹತ್ವ ಇನ್ನೂ ಹೆಚ್ಚಾಗುತ್ತದೆ.ಈ ನಿಟ್ಟಿನಲ್ಲಿ ವಕೀಲರು ಮತ್ತು ನ್ಯಾಯಾಧೀಶರ ಪಾತ್ರ ಮಹತ್ತರವಾದದು ಎಂದು ತಿಳಿಸಿದರು.
ಜಿ.ಪಂ. ಸಿಇಓ ನೀಲಾ ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ತಮ್ಮೇಗೌಡ ಮಾತನಾಡಿದರು.
ನ್ಯಾಯಾಧೀಶೆ ಎಸ್. ಶೋಭಾ, ಡಿವೈಎಸ್ಪಿ ಚಿನ್ನಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಜಿತ್ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುರೇಖಾ ವಿಜಯಪ್ರಕಾಶ್, ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ಎನ್. ರಘುರಾಮ್, ಸರ್ಕಾರಿ ಹೆಚ್ಚುವರಿ ವಕೀಲ ಗೋವಿಂದರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.