ಕೋಲಾರ

ಎಲ್ಲರ ಚಿತ್ತ ಮತ ಎಣಿಕೆ ಕೇಂದ್ರದತ್ತ

Published On :

ಚಿಕ್ಕಬಳ್ಳಾಪುರ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಬೀಡಗಾನಹಳ್ಳಿ ಕ್ರಾಸ್ ಬಳಿ ಇರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 16 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಮತ ಎಣಿಕೆ ಕೇಂದ್ರ ದತ್ತ ವಾಲಿದೆ.
ಈಗಾಗಲೇ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾ ಚುನಾವಣಾಧಿಕಾರಿ ಡಾ. ಆರ್. ವಿಶಾಲ್ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಯಾವುದೇ ರೀತಿಯಲ್ಲಿ ಲೋಪದೋಷಗಳಿಗೆ ಆಸ್ಪದ ನೀಡದೇ ಮತ ಎಣಿಕೆ ಕಾರ್ಯವನ್ನು ಮುಗಿಸಿ ಫಲಿತಾಂಶವನ್ನು ಘೋಷಿಸಲು ಯೋಜನೆಯನ್ನು ರೂಪಿಸಿಕೊಂಡಿದ್ದು ತಮ್ಮ ಜವಾಬ್ದಾರಿಯನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.  ನಾಗಾರ್ಜುನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಭದ್ರತೆಯನ್ನು ಹೊಂದಿರುವ ಮತ ಎಣಿಕಾ ಕೊಠಡಿಯನ್ನು ಗುರುತಿಸಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಾದ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ನೆಲಮಂಗಲ, ದೊಡ್ಡಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ ಕ್ಷೇತ್ರದ ಸುಗಮ ಮತ ಎಣಿಕೆ ಕಾರ್ಯಕ್ಕೆ ಅನುಕೂಲವಾಗುವಂತೆ ಕೊಠಡಿಗಳನ್ನು ನಿಗದಿಪಡಿಸಲಾಗಿದೆ. ಮುಂಜಾವದಲ್ಲಿಯೇ ಅಗತ್ಯವಿರುವ ಪರಿಶೀಲನಾ ಕಾರ್ಯದ ಮೂಲಕ ಚಾಲನೆ ಸಿಗಲಿದೆ. ಮೊದಲು ಬೆಳಿಗ್ಗೆ 7 ಗಂಟೆಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ನಂತರ ಬೆಳಿಗ್ಗೆ 8 ಗಂಟೆಗೆ ಸಾಮಾನ್ಯ ಮತಗಳ ಎಣಿಕೆ ಕಾರ್ಯ ಶುರುಗೊಳ್ಳಲಿದ್ದು ಒಟ್ಟು 44 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗಾಗಲೇ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗಳ ಏಜೆಂಟರಿಗೆ, ಅಧಿಕಾರಿಗಳಿಗೆ ವಿಶೇಷ ಪ್ರವೇಶ ಪಾಸ್ ಗಳನ್ನು ಕೊಟ್ಟಿದ್ದು ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ.
ಸಕಲ ಸಿದ್ಧತೆ: ಮತ ಎಣಿಕೆ ಕೇಂದ್ರದಲ್ಲಿ 64 ಟೇಬಲ್‌ಗಳನ್ನು ಒಟ್ಟಾರೆ ನಿಗದಿಪಡಿಸಿಕೊಳ್ಳಲಾಗಿದೆ .ಒಂದು ಟೇಬಲ್ ಗೆ ತಲಾ ಒಬ್ಬರು ಸೂಪರ್ ವೈಸರ್, ಕೌಂಟಿಂಗ್ ಅಸಿಸ್ಟೆಂಟ್,  ಮೈಕ್ರೋ ನಿರೀಕ್ಷಕರು ಇರಲಿದ್ದಾರೆ. ಮತ ಎಣಿಕೆಗೆ 80 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಒಟ್ಟು 1500 ಸಿಬ್ಬಂದಿಗಳನ್ನು ಮತ್ತು ಇನ್ನೂ ಸೂಕ್ತ ಭದ್ರತೆಗಾಗಿ 500 ಜನ ಪೊಲೀಸರನ್ನು ನಿಯೋಜಿಸಲಾಗಿದೆ.
ಮದ್ಯ ಮಾರುವಂತಿಲ್ಲ: ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಮೇ 15 ರ ಮಧ್ಯಾಹ್ನ ರಾತ್ರಿ 12 ಗಂಟೆಯಿಂದ ಮೇ16 ರವರೆಗೆ ಕ್ಷೇತ್ರದಲ್ಲಿ ಮದ್ಯ ಮಾರಾಟ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವಿಶಾಲ್ ತಿಳಿಸಿದ್ದಾರೆ.  ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಸಿದ್ಧತೆಗಳ ಬಗ್ಗೆ ಮಾಹಿತಿಯನ್ನು ನೀಡಿದ ಅವರು,ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮುಗಿಸಿದಂತೆ ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿಯೊಬ್ಬರು ಸಹಕಾರ ನೀಡಬೇಕು. ಭದ್ರತಾ ದೃಷ್ಟಿಯಿಂದ ಕೆಲ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗುತ್ತದೆ. ಇದರ ಉಲ್ಲಂಘನೆಗೆ ಯಾರೂ ಅವಕಾಶ ನೀಡಬಾರದೆಂದು ಕೋರಿದರು. ಈ ಸಂದರ್ಭದಲ್ಲಿ ಚುನಾವಣೆಯ ಸಾಮಾನ್ಯ ವೀಕ್ಷಕ ಇಮಾದುಲ್ ಹಕ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.