ಕೋಲಾರ

ಸಿದ್ದು ರಾಜಿನಾಮೆ ನೀಡಬೇಕಿಲ್ಲ

Published On :

ಕೋಲಾರ: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯವಿಲ್ಲವೆಂದು ಏಳನೇ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿರುವ ಕಾಂಗ್ರೆಸ್ಸಿನ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಚುನಾವಣಾ ಫಲಿತಾಂಶ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಪಡೆಯಲು ಸಿದ್ದರಾಮಯ್ಯ ಕಾರಣರಲ್ಲ, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿನ ಕಾಂಗ್ರೆಸೆ ನೇತೃತ್ವದ ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮತದಾರರು ಬದಲಾವಣೆ ಬಯಸಿ ಬಿಜೆಪಿಗೆ ಮತ ನೀಡಿದ್ದು, ರಾಜ್ಯದ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದರು.
ಕೋಲಾರ ಕ್ಷೇತ್ರದಲ್ಲಿನ ಜನತೆ ಅಭಿವೃದ್ಧಿ ಪರ ಮತ ನೀಡಿದ್ದಾರೆ. ವಿರೋಧ ಪಕ್ಷದವರು ಏನೇ ಅಪಪ್ರಚಾರ ಮಾಡಿದರೂ ಮತದಾರ ಮಾತ್ರ ನನ್ನ ಕೈಬಿಟ್ಟಿಲ್ಲ, ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಮುಗಿಸಲು ಹೆಚ್ಚಿನ ಗಮನ ನೀಡುತ್ತೇನೆ, ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂದರು. ಕ್ಷೇತ್ರದ ಜನತೆಯ ಸಹಕಾರದೊಂದಿಗೆ ರೇಲ್ವೆ ಕೋಚ್ ಘಟಕ ನಿರ್ಮಾಣ, ಚಿನ್ನದ ಗಣಿ ಪುನರಾರಂಭ, ಅಂತರಾಷ್ಟ್ರೀಯ ಗುಣಮಟ್ಟದ ಟೂಲ್ ಸೆಂಟರ್ ಇತ್ಯಾದಿ ಅಭಿವೃದ್ಧಿ ಕೆಲಸಗಳು ತ್ವರಿತ ಗತಿಯಲ್ಲಿ ಸಾಗಲು ಕೇಂದ್ರದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರ ಸಹಕಾರದಿಂದ ಕೇಂದ್ರದ ಮೇಲೆ ಒತ್ತಡ ತರುತ್ತೇನೆ, ಮತದಾರರ ಋಣ ತೀರಿಸುತ್ತೇನೆ ಎಂದರು.ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಅನೇಕ ಜನಪರ ಯೋಜನೆಗಳು ಜಾರಿಗೆ ಬಂದಿವೆ. ಮತದಾರ ಬದಲಾವಣೆ ಬಯಸಿ ತೀರ್ಪು ನೀಡಿದ್ದು ಇದಕ್ಕೆ ತಲೆ ಬಾಗಿಸುವುದಾಗಿ ಹೇಳಿದರು.
ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗದಿರಬಹುದು, ಆದರೆ.ಜನತೆಯ ಹಿತಕ್ಕಾಗಿ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಸಮರ್ಥವಾಗಿ ಕೆಲಸ ನಿರ್ವಹಿಸುತ್ತೇವೆ, ಆಡಳಿತ ಪಕ್ಷಕ್ಕೆ ಅಭಿವೃದ್ಧಿ ವಿಚಾರವಾಗಿ ಎಲ್ಲ ರೀತಿಯಲ್ಲಿ ಸಹಕಾರ ನೀಡುತ್ತೇವೆಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಶಾಸಕ ನಾರಾಯಣಸ್ವಾಮಿ,ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ಮುಖಂಡರಾದ ಪಾರ್ಥಸಾರಥಿ, ಚಂದ್ರಾರೆಡ್ಡಿ, ಕುಮಾರ್,ಮಾಜಿ ಶಾಸಕ ಕೃಷ್ಣಯ್ಯಶೆಟ್ಟಿ, ಚನ್ನಕೇಶವ, ಜಿಪಂ ಸದಸ್ಯರಾದ ವಡಗೂರು ಹರೀಶ್, ಅ.ಮು. ಲಕ್ಷ್ಮೀನಾರಾಯಣ, ಕೋಲಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸಾದ್ ಬಾಬು ಇನ್ನಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.