ಕುಡಿವ ನೀರು ಸಮಸ್ಯೆ ನಿವಾರಣೆಗೆ ಆದ್ಯತೆ
ಕೋಲಾರ: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಇನ್ನು ಮುಂದೆ ಹೆಚ್ಚಿನ ಸಮಯ ಮೀಸಲಿಡುವುದಾಗಿ ಸಂಸದ ಕೆ.ಹೆಚ್. ಮುನಿಯಪ್ಪ ಭರವಸೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಕೇಂದ್ರ ಸಚಿವರೂ ಆದ ಕೆ.ಹೆಚ್. ಮುನಿಯಪ್ಪ ತಮ್ಮನ್ನು 7ನೇ ಬಾರಿಗೆ ಆಯ್ಕೆ ಮಾಡಿರುವ ಕ್ಷೇತ್ರದ ಮತದಾರರ ಋಣ ತೀರಿಸಲು ಆದ್ಯತೆ ನೀಡುವುದಾಗಿ ಹೇಳಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎತ್ತಿನಹೊಳೆ ಯೋಜನೆ ಜಾರಿಗಾಗಿ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿದೆ, ಈ ಯೋಜನೆಯ ಮೂಲಕ 24 ಟಿಎಂಸಿ ನೀರು ಸಿಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ, ಲೋಕಸಭಾ ಚುನಾವಣೆಯ ಕಾರಣದಿಂದ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ, ಮೇ 25ರ ನಂತರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಶಾಶ್ವತ ನೀರಾವರಿ ಯೋಜನೆಯ ಸಾಧಕ-ಬಾಧಕಗಳ ಕುರಿತು ಚರ್ಚಿಸುತ್ತೇನೆಂದು ತಿಳಿಸಿದರು.ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು ಒಗ್ಗೂಡಿ ಸರ್ಕಾರದ ಮೇಲೆ ಒತ್ತಡ ತಂದು ನೀರಿನ ಸಮಸ್ಯೆ ಬಗೆಹರಿಸಬೇಕಾಗಿದೆ,ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗಿಲ್ಲ, ಎರಡು ವರ್ಷಗಳಲ್ಲಿ ಯೋಜನೆ ಅನುಷ್ಠಾನಕ್ಕೆ ತರಬಹುದಾಗಿದೆ ಎಂದರು.
ಎರಡು ಜಿಲ್ಲೆಗಳ ಕೆರೆಗಳ ಅಭಿವೃದ್ಧಿಗೆ ಒತ್ತು
ಎರಡೂ ಜಿಲ್ಲೆಗಳಲ್ಲಿನ ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ಕಳುಹಿಸಿರುವ ಪ್ರಸ್ತಾವನೆಯ ಕಡೆ ಗಮನ ಹರಿಸಿ ಅಗತ್ಯವಿರುವಷ್ಟು ಅನುದಾನ ತಂದು ಕೆಲಸ ಪ್ರಾರಂಭಿಸಿದಲ್ಲಿ ಅಂತರ್ಜಲ ಅಭಿವೃದ್ಧಿಗೂ ಸಹಾಯವಾಗುತ್ತದೆ, ಮುಖ್ಯಮಂತ್ರಿಗಳನ್ನು ಭೇಟಿಯಾದಾಗ ಈ ವಿಚಾರವಾಗಿಯೂ ಚರ್ಚಿಸುತ್ತೇನೆಂದು ಹೇಳಿದರು. ಎಲೆಮಲ್ಲಪ್ಪ ಶೆಟ್ಟಿ ಕೆರೆಯಿಂದ ನೀರು ತರಲು ರೂಪಿಸಿರುವ ಯೋಜನೆಗೆ ಡಿಪಿಆರ್ ಮಾಡಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ, ಚುನಾವಣೆ ಮುಗಿದಿರುವುದರಿಂದ ಈ ಯೋಜನೆಯ ಬಗ್ಗೆಯೂ ಗಮನ ಹರಿಸುವಂತೆ ಒತ್ತಾಯಿಸುತ್ತೇನೆಂದರು. ರೇಲ್ವೆ ಕೋಚ್, ಹೊಸ ರೈಲು ಮಾರ್ಗ ಹಾಗೂ ಚಿನ್ನದ ಗಣಿ ಪುನರಾರಂಭಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರವಿದ್ದಾಗ ಆಗಿರುವ ಪ್ರಕ್ರಿಯೆಗಳನ್ನು ಹೊಸ ಸರ್ಕಾರದ ಗಮನಕ್ಕೆ ತಂದು ಬಾಕಿ ಇರುವ ಕೆಲಸಗಳಿಗೆ ತ್ವರಿತಗತಿಯಲ್ಲಿ ಚಾಲನೆ ಸಿಗುವಂತೆ ಮಾಡುತ್ತೇನೆ, ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸಿದಾಗಲೂ ಸಹಾಯ ಸಿಕ್ಕಿದೆ, ನಮ್ಮ ಸರ್ಕಾರದಿಂದಲೂ ಸಹಕಾರ ಸಿಗುತ್ತಿರುವುದರಿಂದ ಬಾಕಿ ಕೆಲಸಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂದಗೌಡ, ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷ ಬಿಸ್ಸೇಗೌಡ, ಜಿಪಂ ಸದಸ್ಯರಾದ ಅ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡ್ಡಿ, ಬೆಳಗಾನಹಳ್ಳಿ ಮುನಿವಂಕಟಪ್ಪ, ಚಂದ್ರಾರೆಡ್ಡಿ, ಮುಖಂಡರಾದ ಅತ್ತಾವುಲ್ಲಾ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

