ಕೋಲಾರ

ತಂಬಾಕಿಗೆ ಹೊಗೆ ಹಾಕಲು ಪೊಲೀಸ್ ಸಿದ್ಧ

Published On :

ಕನ್ನಡಪ್ರಭ ವಾರ್ತೆ, ಕೋಲಾರ, ಮೇ 23
ತಂಬಾಕು ನಿಯಂತ್ರಣಕ್ಕೆ ಶ್ರಮಿಸಲು ಜಿಲ್ಲಾ ಪೊಲೀಸ್ ಇಲಾಖೆ ಸಂಕಲ್ಪ ಮಾಡಿದೆ.
ಕಳೆದ ಕೆಲವು ತಿಂಗಳ ಹಿಂದಷ್ಟೆ ಕೋಟ್ಪಾ ಕಾಯ್ದೆ(ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು, ಅತಿ ಹೆಚ್ಚು ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಂಡ ಪ್ರಥಮ ಜಿಲ್ಲೆ ಎಂಬ ಹೆಗ್ಗಳಿಕೆಗೆ ಗದಗ ಜಿಲ್ಲೆ ಪಾತ್ರವಾಗಿತ್ತು. ಅಲ್ಲದೇ ಕೇಂದ್ರ ಆರೋಗ್ಯ ಇಲಾಖೆಯಿಂದ ಪ್ರಶಸ್ತಿಯನ್ನೂ ಪಡೆದಿತ್ತು. ಈ ನಿಟ್ಟಿನಲ್ಲಿ ಈ ಕಾಯ್ದೆಯನ್ನು ಕೋಲಾರ ಜಿಲ್ಲೆಯಲ್ಲಿಯೂ ಸಮರ್ಪಕವಾಗಿ ಜಾರಿಗೆ ತರಬೇಕೆಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಜಾಗೃತಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನ ಇನ್ಸಿಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಕಾರ್ಯಾಗಾರವನ್ನು ಆಯೋಜಿಸಿತ್ತು. ಈ ಕಾರ್ಯಾಗಾರದಲ್ಲಿ ಜಿಲ್ಲೆಯ 12 ಠಾಣೆಗಳ 26 ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಾಮೀಲ್, ಹಿರಿಯ ಪೊಲೀಸ್ ಅಧಿಕಾರಿಗಳು ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ತರುವ ಸಂಬಂಧ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೋಲಾರ ಜಿಲ್ಲಾ ಎಸ್‌ಪಿ ಅಜಯ್ ಹಿಲೋರಿ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದ ಜಿಲ್ಲೆಗಳ ಪಟ್ಟಿಗೆ ಕೋಲಾರವನ್ನು ಆದಷ್ಟೂ ಶೀಘ್ರ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಕಿವಿಮಾತು ಹೇಳಿದರು. ಈಗಾಗಲೇ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ ಪ್ರಕರಣಗಳ ವರದಿಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಈ ಪ್ರಕ್ರಿಯೆ ಮತ್ತಷ್ಟು ಚುರುಕಾಗಬೇಕು ಎಂದು ಸೂಚಿಸಿದರು. ಇನ್ಸಿಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್‌ನ ಅಧಿಕಾರಿ ಜಾನ್ ಕೆನಡಿ ಅವರು ಮಾತನಾಡಿ, ಕೊಟ್ಪಾ ಕಾಯಿದೆಯ ಮುಖ್ಯ ಅಂಶಗಳನ್ನು ತಿಳಿಸಿದರು. ತಂಬಾಕು ಪೀಡಿತರಾದ ದುರ್ಗಯ್ಯ ಅವರು ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಅಧಿಕಾರಿಗಳು ಕೈಜೋಡಿಸಬೇಕೆಂದು ಕೇಳಿಕೊಂಡರು.
ಈ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪೊಲೀಸ್ ಇಲಾಖೆ ಪಡೆದುಕೊಳ್ಳಲಿದೆ ಎಂದೂ ಅವರು ಹೇಳಿದರು.
ಕೋಲಾರದ ಹೆಚ್ಚುವರಿ ಎಸ್‌ಪಿ ಎಂ.ಐ. ಜಮೀಲ್ ಅವರು ಮಾತನಾಡಿ, ಎಲ್ಲಾ ಠಾಣೆಗಳ ಮಟ್ಟದಲ್ಲಿ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು 10 ದಿನಗಳ ವಿಶೇಷ ಕಾರ್ಯಾಚರಣೆಯನ್ನು ಜಾರಿಗೆ ತರಬೇಕೆಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.