ಕೋಲಾರ

ಬಚ್ಚೇಗೌಡರ ಪರಾಭವದಿಂದ ಎದೆಗುಂದದಿರಿ

Published On :

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಸೋಲನ್ನಪ್ಪಿರುವುದಕ್ಕೆ ಎದೆಗುಂದಬೇಕಾಗಿಲ್ಲ. ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಪಕ್ಷದ ಸಂಘಟನೆಗೆ ಇನ್ನೂ ಹೆಚ್ಚಿಗೆ ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಪರೀಕ್ಷಿತ್  ರಾಜ್  ಅರಸ್   ಕಾರ್ಯಕರ್ತರಿಗೆ ಸಲಹೆ ನೀಡಿದರು.
ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಪಕ್ಷದ ಬಲವರ್ಧನೆಗೆ ಮುಂದಾಗುವಂತೆ ಕರೆ ನೀಡಿದರು.
ಭ್ರಷ್ಟಾಚಾರ, ಹಗರಣ ಸೇರಿದಂತೆ ದುರಾಡಳಿತ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಯುಪಿಎ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡಿದೆ. ಅದು ಪ್ರತಿಪಕ್ಷ ಸ್ಥಾನದಲ್ಲೂ ಸಹ ಕೂರಲು ಪರದಾಡುವಂತಹ ದುಸ್ಥಿತಿಗೆ ಬಂದಿದೆ. ಚುನಾವಣೆಗೆ ಮುನ್ನಾ ಮೋದಿ ಅಲೆ ಕೇವಲ ಮಾಧ್ಯಮಗಳ ಸಣಷ್ಟಿ, ಈ ಬಾರಿ ತಾವೇ ಅಧಿಕಾರಕ್ಕೆ ಬರುತ್ತೇವೆ ಎನ್ನುತ್ತಿದ್ದ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.
ದೇಶದಲ್ಲಿ ಮೋದಿ ಅಲೆ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು ಸ್ಪಷ್ಟ ಬಹುಮತದ ಮೂಲಕ ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿರುವುದು ಸಂತಸದ ವಿಚಾರ. ಈಗಾಗಲೇ ಗುಜರಾತಿನ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಆ ರಾಜ್ಯದ ಅಭಿವೃದ್ಧಿಯನ್ನು ತೋರಿಸಿದ್ದಾರೆ. ಅದೇ ರೀತಿ ಭಾರತ ದೇಶವು ಸಹ ಇಡೀ ವಿಶ್ವದಲ್ಲಿ ಪ್ರಬಲ ರಾಷ್ಟವಾಗಿ ರೂಪುಗೊಂಡು ಅಭಿವೃದ್ಧಿ ಹೊಂದುವಂತೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕಾಗಿತ್ತು. ಆದರೆ, ಸ್ವಲ್ಪ ಮತಗಳ ಅಂತರದಿಂದ ಕೊನೆಗೆ ಸೋಲನ್ನು ಕಾಣಬೇಕಾಯಿತು. ಇದಕ್ಕೆ ರಾಜಕೀಯ ಕುತಂತ್ರ ಕಾರಣವಾಗಿದೆ ಎಂದು ಆರೋಪಿಸಿದ ಅವರು, ಈ ಬಾರಿ ಮತ ಪ್ರಮಾಣವನ್ನು ಇಲ್ಲಿ ಬಿಜೆಪಿ ಹೆಚ್ಚಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದನ್ನು ಪ್ರೇರಣೆಯಾಗಿ ತೆಗೆದುಕೊಂಡು ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಮುಂದಾಗಬೇಕಾಗಿದೆ. ನರೇಂದ್ರ ಮೋದಿ ಪ್ರಧಾನಿಯಾಗುತ್ತಿದ್ದು ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತರುವ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಈ ಮೂಲಕ ಬಿಜೆಪಿ ಕಡೆಗೆ ಹೆಚ್ಚಿನ ಒಲವು ಬೆಳೆಸಿಕೊಳ್ಳುವಂತೆ ಮಾಡಬೇಕೆಂದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥರೆಡ್ಡಿ, ರಾಜ್ಯ ಸದಸ್ಯರಾದ ಸುರೇಶ್ , ಕಿರಣ್, ಶಶಿಕಾಂತ್ , ವಿನಯ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.