ಸರ್ಕಾರಿ ನೇಮಕದಲ್ಲಿ ಶೇ.50 ಮೀಸಲು
ಗುತ್ತಿಗೆ ಶುಶ್ರೂಷಕರಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಭರವಸೆ
ಶುಶ್ರೂಷಕರ ಬೇಡಿಕೆ ಈಡೇರಿಕೆಗೆ ಚರ್ಚಿಸಲು ಮುಂದಿನ ವಾರ ಸಭೆ
ಕೋಲಾರ: ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಲ್ಲಾ ಶುಶ್ರೂಷಕರನ್ನು ಕಾಯಂ ಮಾಡಲು ಅವಕಾಶಗಳಿಲ್ಲ. ಆದರೆ, ಸರ್ಕಾರಿ ನೇಮಕಾತಿಯ ಸಂದರ್ಭದಲ್ಲಿ ಜೇಷ್ಠತೆಯ ಆಧಾರದ ಮೇಲೆ ಶೇ.50ರಷ್ಟು ಹುದ್ದೆ ಮೀಸಲಿಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ಶುಶ್ರೂಷಕರ ಸಂಘದ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಶುಶ್ರೂಷಕರ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶುಶ್ರೂಷಕರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಂಘದ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆಯನ್ನು ಮುಂದಿನ ವಾರ ಬೆಂಗಳೂರಿನಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಶುಶ್ರೂಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆದ್ಯತೆಯ ಮೇಲೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಕಳೆದ 21 ವರ್ಷಗಳಿಂದ ಶುಶ್ರೂಷಕರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಯನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ. ಆದರೆ ಹಂತ ಹಂತವಾಗಿ ಆದ್ಯತೆಯ ಮೇರೆಗೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಆರೋಗ್ಯ ಇಲಾಖೆಯಲ್ಲಿ ಸ್ಥಿಗತಗೊಂಡಿರುವ ಬಡ್ತಿಗಳನ್ನು ಕೂಡಲೇ ಜಾರಿಗೆ ತರಲು ತಯಾರಿ ನಡೆಯುತ್ತಿದೆ. ಶುಶ್ರೂಷಕರು ಪ್ತಸ್ತುತ ದಿನಕ್ಕೆ 12 ಗಂಟೆ ಕೆಲಸ ಮಾಡುತ್ತಿದ್ದಾರೆ. ಇದನ್ನು 8 ಗಂಟೆಗೆ ಸೀಮಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಹೇಳಿದರು.
ಉತ್ತಮ ಸಾಧನೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಆರೋಗ್ಯ ಇಲಾಖೆ ಎಲ್ಲ ಇಲಾಖೆಗಳಿಗಿಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಸಾಧನೆಯ ಗುರಿ ಸಾಧಿಸಿದೆ. ಇದಕ್ಕೆ ಅಧಿಕಾರಿಗಳು, ಸಿಬ್ಬಂದಿ ಪರಿಶ್ರಮ ಕಾರಣ. ಆರೋಗ್ಯ ಇಲಾಖೆಯ ನೌಕರರು ಒಂದು ಕುಟುಂಬದಂತೆ ಕೆಲಸ ನಿರ್ವಹಿಸಿದ ಹಿನ್ನಲೆಯಲ್ಲಿ ಈ ಸಾಧನೆ ಮಾಡಲು ಸಾಧ್ಯವಾಯಿತ್ತೆಂದು ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರ ಸಾಮಾಜಿಕ ಸೇವೆ ಪರಿಗಣಿಸಿ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸುವುದು ಕರ್ತವ್ಯವಾಗಿದೆ ಎಂದರು
ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಶುಶ್ರೂಷಕರ ಕೇಂದ್ರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ವೈದ್ಯಕೀಯ ಶಿಕ್ಷಣ ನಿದೇಶನಾಲಯದ ಸಹಾಯಕ ನಿರ್ದೇಶಕಿ ಸಿ.ಎನ್.ಸುಮಿತ್ರ, ಸರ್ಕಾರಿ ಶುಶ್ರೂಷಕರ ಸಂಘದ ರಾಜ್ಯಾಧ್ಯಕ್ಷೆ ಬೈರಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಯಾಜ್ ಖಾನ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮುನಿರಾಜು ಇದ್ದರು. ಮಧ್ಯಾಹ್ನ 3.30ಕ್ಕೆ ಇದ್ದ ಕಾರ್ಯಕ್ರಮಕ್ಕೆ ಸಚಿವ ಯು.ಟಿ.ಖಾದರ್ ಸುಮಾರು ಎರಡುವರೆ ಗಂಟೆಗಳ ಕಾಲ ತಡವಾಗಿ ಬಂದಿದ್ದರಿಂದ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಶುಶ್ರೂಷಕರು ಶಕೆ ತಾಳಲಾರದೆ ಪರದಾಡುವಂತಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

