ಕೋಲಾರ

ಬಾಕಿ ರೇಲ್ವೆ ಕೆಲಸಕ್ಕೆ ಸದಾ ಬೆಂಬಲ

Published On :

ಕೋಲಾರ: ರಾಜ್ಯಕ್ಕೆ ಈ ಹಿಂದಿನ ಕೇಂದ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ರೇಲ್ವೆ ಯೋಜನೆಗಳಿಗೆ ಸಂಪೂರ್ಣ ಬೆಂಬಲ ನೀಡಿ ತ್ವರಿತಗತಿಯಲ್ಲಿ ಅನುಷ್ಠಾನಕ್ಕೆ ತರುವುದಾಗಿ ನಮ್ಮ ರಾಜ್ಯದವರೇ ಆದ ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಭರವಸೆ ನೀಡಿದ್ದಾರೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು. ನಗರದ ತಮ್ಮ ನಿವಾಸದಲ್ಲಿ ಶನಿವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸದಾನಂದಗೌಡರು ರೇಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಭೇಟಿಯಾಗಿ ಕೋಲಾರ ಜಿಲ್ಲೆಗೆ ಮಂಜೂರು ಆಗಿರುವ ರೇಲ್ವೆ ಕೋಚ್ ಘಟಕ ಸೇರಿದಂತೆ ಇನ್ನಿತರ ಯೋಜನೆಗಳ ಕುರಿತು ಚರ್ಚಿಸಿದ್ದೇನೆ, ನೂತನ ರೇಲ್ವೆ ಸಚಿವರು ತಮ್ಮಿಂದ ಎಲ್ಲಾ ಮಾಹಿತಿ ಪಡೆದುಕೊಂಡು ರಾಜ್ಯಕ್ಕೆ ಮಂಜೂರು ಆಗಿರುವ ಎಲ್ಲಾ ರೇಲ್ವೆ ಯೋಜನೆಗಳನ್ನು ಅನಷ್ಠಾನಕ್ಕೆ ತರುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದರು.
ಸಿಎಂ ಆಗಿದ್ದಲೂ ಸಹಕಾರ ಇತ್ತು: ಸದಾನಂದಗೌಡರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ನಾನು ಕೇಂದ್ರದಲ್ಲಿ ರೇಲ್ವೆ ಸಚಿವನಾಗಿದ್ದೆ. ರಾಜ್ಯಕ್ಕೆ ರೇಲ್ವೆ ಇಲಾಖೆಯಿಂದ ಹೆಚ್ಚಿನ ಅನುಕೂಲ ಸಿಗಬೇಕೆಂಬ ಉದ್ದೇಶದಿಂದ ಸಾಕಷ್ಟು ಬೆಂಬಲ ನೀಡಿದ್ದರು. ಅದೇ ರೀತಿ ಈಗ ಅವರೇ ರೇಲ್ವೆ ಖಾತೆ ಹೊಂದಿರುವುದರಿಂದ ಹೆಚ್ಚಿನ ಸಹಕಾರ ನೀಡುವ ವಿಶ್ವಾಸ ತಮಗಿದೆ ಎಂದು ಹೇಳಿದರು.
ಟೂಲ್ ಸಮೂಹ ಮಂಜೂರು: ಕೋಲಾರಕ್ಕೆ ರೇಲ್ವೆ ಕೋಚ್ ಮಾತ್ರವಲ್ಲದೆ ವೇಮಗಲ್‌ನಲ್ಲಿ  ರು.150 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಟೂಲ್ ಸಮೂಹ ಮಂಜೂರಾಗಿದೆ. ಮುಖ್ಯಮಂತ್ರಿಗಳು ಇದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ರಾಜ್ಯದ ನಾಲ್ವರು ಸಚಿವರು ಬಾಕಿ ಇರುವ ಯೋಜನೆಗಳ ಅನುಷ್ಠಾನಕ್ಕೆ ಬೆಂಬಲ ನೀಡುವ ಮೂಲಕ ಅಭಿವೃದ್ಧಿ ಕೆಲಸಗಳು ವೇಗವಾಗಿ ಸಾಗಲು ಸಹಕರಿಸುತ್ತಾರೆಂಬ ನಂಬಿಕೆ ಇದೆ ಎಂದರು.
ಪ್ರತಿ ತಿಂಗಳು ಸಭೆ: ತಮ್ಮ ಕಾಲದಲ್ಲಿ ಮಂಜೂರು ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಪಡೆಯಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಇನ್ನು ಮುಂದೆ ಪ್ರತಿ ತಿಂಗಳು ಸಭೆ ನಡೆಸಿ ವರದಿ ನೀಡುವಂತೆ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದರು.
ಜೂ.11ರ ನಂತರ ಸಿಎಂ ಭೇಟಿ: ಜೂ.11ರಂದು ತಾವು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಆ ನಂತರ ಸಿಎಂ ಭೇಟಿಗೆ ಮುಹೂರ್ತ ನಿಗದಿ ಮಾಡುವುದಾಗಿ ಹೇಳಿದರು.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮಾಜಿಗಳನ್ನು ಒಳಗೊಂಡ ನಿಯೋಗವನ್ನು ಸಿಎಂ ಬಳಿ ಕರೆದೊಯ್ಯಲಾಗುತ್ತದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ಪರಿಣಾಮಕಾರಿಯಾಗಿ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆ ಜಾರಿ ಮಾಡದಂತೆ ವ್ಯಕ್ತಿಯೊಬ್ಬರು ರಾಜ್ಯ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಬಗ್ಗೆಯೂ ಸಿಎಂ ಗಮನಕ್ಕೆ ತಂದು ಕಾನೂನು ಪ್ರಕಾರ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸೋಣ. ಕೆರೆಗಳ ಹೂಳು ತೆಗೆಯುವ ಯೋಜನೆ ನೆನಗುದಿಗೆ ಬಿದ್ದಿದ್ದು ಈ ವಿಚಾರದ ಬಗ್ಗೆಯೂ ಸಿಎಂ ಜೊತೆ ಚರ್ಚಿಸಿ ಕೇಂದ್ರ ಸರ್ಕಾರದ ಮುಂದೆ ಇರುವ ಪ್ರಸ್ತಾವನೆಗೆ ಅಂಗೀಕಾರ ಪಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲೆಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ವಿಚಾರವಾಗಿ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಜೊತೆ ಚರ್ಚಿಸುತ್ತೇನೆಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕೇಂದ್ರ ರೇಲ್ವೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ಬಂಗಾರಪೇಟೆ ಬ್ಲಾಕ್ ಸಮಿತಿ ಅಧ್ಯಕ್ಷ ಪಾರ್ಥಸಾರಥಿ, ಮಾಲೂರು ಕಾಂಗ್ರೆಸ್ ಮುಖಂಡ ಚನ್ನಕೇಶವ, ಕೆಪಿಸಿಸಿ ಎಸ್ಟಿ ವಿಭಾಗ ಸಂಚಾಲಕ ಕುಮಾರ್, ಬಂಗಾರಪೇಟೆ ಪುರಸಭೆ ಮಾಜಿ ಅಧ್ಯಕ್ಷ ಚಂದ್ರಾರೆಡ್ಡಿ ಹಾಗೂ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.