ಕೊಪ್ಪಳ

ಹಗಲು ವಿದ್ಯುತ್ ಅಪವ್ಯಯ ತಡೆಗಟ್ಟಿ

Published On :

ಕುಷ್ಟಗಿ: ತಾಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ದೀಪಗಳು ಹಗಲು ವೇಳೆಯಲ್ಲಿ ಉರಿಯುತ್ತಿದ್ದು, ಅದನ್ನು ನಿಯಂತ್ರಿಸುವಂತೆ ಸಭೆಯಲ್ಲಿ ಸಾಕಷ್ಟು ಸಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನೆವಾಗಿಲ್ಲ. ಅಲ್ಲದೇ, ಈ ಬಗ್ಗೆ ಯಾರೊಬ್ಬರೂ ಗಮನಹರಿಸುತ್ತಿಲ್ಲ ಎಂದು ತಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆರೋಪಿಸಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರಾದ ಪರಶುರಾಮಪ್ಪ ನಂದಿಹಾಳ, ಸಿದ್ಧಪ್ಪ ಆವಿನ ವಿಷಯ ಪ್ರಸ್ತಾಪಿಸಿದರು.
ರೈತರ ಬೆಳೆಗಳಿಗೆ ಸಮರ್ಪಕ ವಿದ್ಯುತ್ ನೀಡದ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಹಗಲು ವೇಳೆಯಲ್ಲಿ ನಿರಂತರವಾಗಿ ಬೀದಿ ದೀಪಗಳು ಉರಿಯುತ್ತಿದರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಇದನ್ನು ತಡೆಗಟ್ಟದೇ ಇದ್ದರೆ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ತಿನ ಸಮಸ್ಯೆ ತೀವ್ರವಾಗುತ್ತದೆ. ಈಗಾಗಲೇ ವಿದ್ಯುತ್ತಿನ ಕಣ್ಣಾ ಮುಚ್ಚಾಲೆ ಪ್ರಾರಂಭವಾಗಿದೆ. ಇದರಿಂದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳು ಎಚ್ಚರ ವಹಿಸುವುದು ಸೂಕ್ತ ಎಂದರು.
ಅಕ್ಷರ ದಾಸೋಹ ಯೋಜನೆಯಲ್ಲಿ ತಾಲೂಕಿನ ಗ್ರಾಮೀಣ ಭಾಗದ ಶಾಲೆಗಳಿಗೆ ಪೂರೈಕೆಯಾಗುವ ಬಿಸಿ ಊಟದ ಆಹಾರ ಪದಾರ್ಥಗಳ ತೂಕದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಇದರಲ್ಲಿ ಆಹಾರ ಪದಾರ್ಥಗಳನ್ನು ಸಾಗಾಣಿಕೆ ಮಾಡುವ ಆಹಾರ ಇಲಾಖೆಯ ಲೋಪದೋಷವಿದೆಯೋ ಅಥವಾ ಅಧಿಕಾರಿಗಳ ಕೈವಾಡವಿದೆಯೋ ಅರ್ಥವಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿಯೊಂದು ಶಾಲೆಗೆ ತೂಕದ ಯಂತ್ರಗಳನ್ನು ನೀಡುವುದು ಸೂಕ್ತವಾದದ್ದು ಎಂದು ಸಭೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.
ಇನ್ನು ತಾಲೂಕಿನ ಬಹುತೇಕ ಶಾಲಾ ಜಮೀನುಗಳು ಶಿಕ್ಷಣ ಇಲಾಖೆ ಹೆಸರಿನಲ್ಲಿ ನೋಂದಣಿಯಾಗದೇ ಮೂಲ ಜಮೀನು ಮಾಲೀಕರ ಹೆಸರಿನಲ್ಲಿ ಇವೆ. ಹೀಗಾಗಿ, ಅಂತಹ ಶಾಲೆಗಳನ್ನು ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ತಾಪಂ ಅಧ್ಯಕ್ಷ ಶರಣು ತಳ್ಳಿಕೇರಿ ಹೇಳಿದರು.
ಸರ್ಕಾರ ಕೆರೆಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದರೂ ತಾಲೂಕಿನಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಸಮರ್ಪವಾಗಿ ನಡೆಯುತ್ತಿಲ್ಲ. ಅಲ್ಲದೇ, ಅಧಿಕಾರಿಗಳು ಕಾಮಗಾರಿಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ತಾಲೂಕಿನ ವಣಗೇರಿ ಗ್ರಾಮದ ಕೆರೆಗೆ ಸುಮಾರು ರು. 26 ಲಕ್ಷ ಬಿಡುಗಡೆಯಾಗಿದ್ದು, ಈ ಕಾಮಗಾರಿಯೂ ಕಳಪೆಯಾಗಿದೆ. ಈ ಬಗ್ಗೆ ಮಾಹಿತಿ ನೀಡುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷ ಶರಣು ತಳ್ಳಿಕೇರಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರು, ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.