ಕೊಪ್ಪಳ

ವಿದ್ಯುತ್ ಕಡಿತ: ಸಮಯ ನಿಗದಿಪಡಿಸಿ

Published On :

ಕನ್ನಡಪ್ರಭ ವಾರ್ತೆ, ಕೊಪ್ಪಳ, ಫೆ.13
ಜಿಲ್ಲೆಯಲ್ಲಿ ವ್ಯಾಪಕ ವಿದ್ಯುತ್ ಕಡಿತವಾಗುತ್ತಿದ್ದು, ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ಗಂಟೆಗೊಮ್ಮೆ ವಿದ್ಯುತ್ ಕಡಿತದಿಂದಾಗಿ ಬೆಳೆಗೆ ನೀರಿಲ್ಲದಂತಾಗಿ ನಾಶವಾಗುತ್ತಿವೆ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಟಿ. ಜನಾರ್ದನ ಜೆಸ್ಕಾಂ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ವಿದ್ಯುತ್ ಕಡಿತಕ್ಕೆ ನಿಗದಿತ ಸಮಯ ನಿಗದಿಪಡಿಸಲಿ ಎಂದು ಒತ್ತಾಯಪಡಿಸಿದ್ದಾರೆ.
ಕೊಪ್ಪಳ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪದೇ ಪದೇ ವಿದ್ಯುತ್ ಕಡಿತಕ್ಕೆ ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆ: ಕೊಪ್ಪಳ ತಾಲೂಕಿನ ಬೂದಗುಂಪಾ ವ್ಯಾಪ್ತಿಯಲ್ಲಿ ಪ್ರತಿ ದಿನ ಪದೇ ಪದೇ ಬೇಕಾಬಿಟ್ಟಿಯಾಗಿ ವಿದ್ಯುತ್ ಕಡಿತವಾಗುತ್ತಿದೆ. ಇದರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕೂ ತೊಂದರೆಯಾಗುತ್ತಿದೆ. ಅಲ್ಲದೇ ಪರೀಕ್ಷೆಗಳು ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಜೆಸ್ಕಾಂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಕಡಿತದಿಂದ ಕುಡಿವ ನೀರಿಗೂ ತೊಂದರೆಯಾಗುತ್ತಿದೆ. ಹೀಗಾಗಿ ಸರ್ಕಾರ ವಿದ್ಯುತ್ ಕಡಿತ ಮಾಡುವುದಕ್ಕೆ ನಿಗದಿತ ಸಮಯ ನಿಗದಿಪಡಿಸಲಿ. ಅದರಂತೆ ವಿದ್ಯುತ್ ಕಡಿತ ಮಾಡಲಿ. ಆದರೆ, ವಿದ್ಯುತ್ ಪೂರೈಕೆ ಮಾಡುವ ವೇಳೆ ಯಾವುದೇ ವಿದ್ಯುತ್ ಕಡಿತವಾಗಬಾರದು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಫೆ. 18ರೊಳಗಾಗಿ ವಿದ್ಯುತ್ ಸಮಸ್ಯೆ ಬಗೆಹರಿಸಲು ಜೆಸ್ಕಾಂ ಇಲಾಖೆ ಮುಂದಾಗಬೇಕು. ಅಷ್ಟು ದಿನದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ, ಇಲ್ಲಿನ ಕೆರೆಳ್ಳಿ ವಿದ್ಯುತ್ ಸ್ಟೇಷನ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೂದಗುಂಪಾ ವ್ಯಾಪ್ತಿಯ ಕೆಲ ಭಾಗಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ರಿಪೇರಿಗೆ ಬಂದರೂ ಯಾವುದೇ ಅಧಿಕಾರಿಗಳು ಅತ್ತ ಬಂದು ನೋಡುತ್ತಿಲ್ಲ. ಹೀಗಾಗಿ ಗ್ರಾಮದ ಕೆಲ ರೈತರೇ ತಮ್ಮ ಸ್ವಂತ ಖರ್ಚಿನಲ್ಲಿ ಸರಿಪಡಿಸಿ ಬಳಕೆ ಮಾಡುತ್ತಿದ್ದಾರೆ. ಇಷ್ಟಾದರು ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ. ಹಳೆ ಟ್ರಾನ್ಸ್‌ಫಾರ್ಮರ್‌ಗಳನ್ನು ದುರಸ್ತಿ ಮಾಡಿದೆ ಎಂದು ಸಣ್ಣ-ಪುಟ್ಟ ಕೆಲಸ ಮಾಡಿರುತ್ತಾರೆ. ಅದು ಕೆಲವೇ ದಿನದಲ್ಲಿ ಮತ್ತೆ ಕೆಟ್ಟು ನಿಂತಿರುತ್ತದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬೂದಗುಂಪಾ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಫಕೀರಪ್ಪ ಹಾಗೂ ಯಮನೂರಪ್ಪ, ಸಿದ್ದಪ್ಪ, ಇತರ ಮುಖಂಡರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.