ಕೊಪ್ಪಳ

ಪರಿಹಾರ ಕನ್ನಡಿಯೊಳಗಿನ ಗಂಟಾಗಬಾರದು

Published On :

ಕನ್ನಡಪ್ರಭ ವಾರ್ತೆ, ಕೊಪ್ಪಳ, ಮಾ. 16
ಶೋಷಣೆಗೆ ಒಳಗಾಗಿ ನ್ಯಾಯ ಬೇಡಿಕೊಂಡು ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ಪರಿಹಾರ ಎಂಬುದು ಕನ್ನಡಿಯೊಳಗಿನ ಗಂಟಾಗಬಾರದು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎಸ್.ಎನ್. ಸತ್ಯನಾರಾಯಣ ಹೇಳಿದರು.
ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ ಇತ್ಯರ್ಥಪಡಿಸಲು ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಲೋಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಪೈಕಿ ಮೋಟಾರು ವಾಹನ ಅಪಘಾತಗಳ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ರಾಜಿ ಸಂಧಾನಗಳ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆ-ತಲೆಮಾರುಗಳೇ ಕಳೆದರೂ, ಪ್ರಕರಣಗಳು ಇತ್ಯರ್ಥವಾಗದಿರುವುದನ್ನು ಕಂಡಿದ್ದೇವೆ. ಸಂಸಾರ ನಡೆಸುವ ಪ್ರಮುಖ ವ್ಯಕ್ತಿಯೇ ಅಪಘಾತದಲ್ಲಿ ಮೃತಪಟ್ಟರೆ, ಅಂತಹ ಸಂಸಾರ ಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕುಟುಂಬಗಳಿಗೆ ತ್ವರಿತವಾಗಿ ಪರಿಹಾರ ದೊರಕಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ವಿಳಂಬವಾಗುತ್ತಿರುವುದು ವಿಷಾದದ ಸಂಗತಿ. ಈ ನಿಟ್ಟಿನಲ್ಲಿ ವಕೀಲರು, ನ್ಯಾಯಾಧೀಶರು ಚಿಂತನೆ ನಡೆಸುವ ಅಗತ್ಯವಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ ದಾ. ಬಬಲಾದಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮತ್ತು ಲಾ ಅಕಾಡೆಮಿ ಅಧ್ಯಕ್ಷೆ ಸಂಧ್ಯಾ ಬಿ. ಮಾದಿನೂರು ಕಾರ್ಯಕ್ರಮ ಕುರಿತು ಮಾತನಾಡಿದರು.
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಮೋಟಾರು ವಾಹನಗಳ ಅಪಘಾತಗಳಿಗೆ ಸಂಬಂಧಿತ ಅನೇಕ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ವಕೀಲರ ಸಂಘದ ಕಾರ್ಯದರ್ಶಿ ರವಿ ಬೆಟಗೇರಿ, ಸಿನಿಯರ್ ಸಿವಿಲ್ ಜಡ್ಜ್ ಕೆ. ಶಿವರಾಂ, ಜೆಎಂಎಫ್‌ಸಿ ಕಾವೇರಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್.ಎನ್. ಮುತ್ತಗಿ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.