130 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಮಂಡ್ಯ: ಬಡ ಕುಟುಂಬದವರು ಗಂಭೀರವಾದ ಕಾಯಿಲೆಗಳು ಬಂದಾಗ ಆರ್ಥಿಕ ಪರಿಸ್ಥಿತಿ ಬಗ್ಗೆ ಚಿಂತಿಸದೆ ಅತ್ಯುತ್ತಮ ದರ್ಜೆಯ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಮಂತ್ರಿ ಸಿ.ಪಿ. ಯೋಗೇಶ್ವರ್ ಭಾನುವಾರ ತಿಳಿಸಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಅವರು, ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.
ಈ ಯೋಜನೆಯಡಿ ನಡೆಯುತ್ತಿರುವ ಆರೋಗ್ಯ ತಪಾಸಣಾ ಶಿಬಿರವು ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ನಡೆಯಲಿದೆ. ಜಿಲ್ಲೆಯ ಪ್ರತಿಯೊಬ್ಬ ಬಿಪಿಎಲ್ ಕಾರ್ಡ್ದಾರರಿಗೆ ಈ ಯೋಜನೆಯ ಮಾಹಿತಿ ತಲುಪುವಂತಾಗಬೇಕು ಎಂದು ಹೇಳಿದರು.
ರಾಜ್ಯಾದ್ಯಂತ 130ಕ್ಕೂ ಹೆಚ್ಚು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಗುರುತಿಸಿ ಅವುಗಳೆಲ್ಲವನ್ನೂ ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಜಾಲದೊಳಗೆ ತರಲಾಗಿದೆ. ಮಂಡ್ಯ ಜಿಲ್ಲೆಗೆ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳು ಹತ್ತಿರವಿದ್ದು, ಫಲಾನುಭವಿಗಳು ಸುಲಭವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕ ಡಾ.ಪಿ. ಬೋರೆಗೌಡ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 294 ಫಲಾನುಭವಿಗಳು ಈ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ 160 ಮಂದಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಸಿ. ಜಯಣ್ಣ, ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಡಾ.ಎಸ್.ಸಿ. ಶಂಕರೇಗೌಡ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಎಸ್. ವಿಜಯಾನಂದ್, ಮುಡಾ ಅಧ್ಯಕ್ಷ ಬಸವೇಗೌಡ, ನಗರಸಭೆ ಅಧ್ಯಕ್ಷ ಅರುಣ್ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮರೀಗೌಡ ಇದ್ದರು.
ಮಂಡ್ಯ: ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ರೋಗಿಗಳ ತಪಾಸಣೆ ನಡೆಸಲಾಯಿತು.
ಬಡವರಿಗೂ ಉತ್ತಮ ಚಿಕಿತ್ಸೆ ದೊರಕಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ವಾಜಪೇಯಿ ಆರೋಗ್ಯಶ್ರೀ ಯೋಜನೆಯಲ್ಲಿ ಬರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿನ ಅನಾರೋಗ್ಯದಿಂದ ಬಳಲುತ್ತಿರುವವರು ಶಿಬಿರದಲ್ಲಿ ತಪಾಸಣೆಗೆ ಒಳಪಟ್ಟರು.
ಈ ಶಿಬಿರಕ್ಕಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ರೋಗಿಗಳನ್ನು ಕರೆತರಲು ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ತಪಾಸಣೆಗಾಗಿ ಬರುವವರಿಗೆ ಮಾಹಿತಿ ಹಾಗೂ ಸಹಾಯ ಒದಗಿಸಲು ಎನ್ಎಸ್ಎಸ್ ಸ್ಕೌಟ್ಸ್ ವಿದ್ಯಾರ್ಥಿಗಳು ಹಾಗೂ ಗೃಹರಕ್ಷಕ ದಳದವರು ಶ್ರಮಿಸಿದರು.
ತಪಾಸಣೆ ಕಾರ್ಯಕ್ಕೆ ನೋಂದಣಿ ಮಾಡಿಕೊಳ್ಳಲು ಆರೋಗ್ಯ ಮಿತ್ರರು ತಾಲೂಕುವಾರು 14 ಕೌಂಟರ್ಗಳನ್ನು ತೆರೆದಿದ್ದರು. ನೋಂದಣಿಯ ನಂತರ ಪ್ರಾಥಮಿಕ ತಪಾಸಣೆಗೆ ಒಳಪಟ್ಟವರಲ್ಲಿ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ತೊಂದರೆ, ಸುಟ್ಟಗಾಯ, ಅಪಘಾತ ಹಾಗೂ ನವಜಾತ ಶಿಶುಗಳಿಗೆ ಸಂಬಂಧಿಸಿದ ಗಂಭೀರ ಪ್ರಕರಣಗಳು ಕಂಡು ಬಂದವು.
ರೋಗಿಗಳನ್ನು ಉನ್ನತ ತಪಾಸಣೆಗೆ ಒಳಪಡಿಸಲು ವಿಕ್ರಂ ಆಸ್ಪತ್ರೆ, ಬಿಜಿಎಸ್ ಆಸ್ಪತ್ರೆ, ಕಾವೇರಿ ಫೋರ್ಟಿಸ್ ಆಸ್ಪತ್ರೆ , ಭಾರತ್ ಕ್ಯಾನ್ಸರ್ ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ, ಮಲ್ಯ ಆಸ್ಪತ್ರೆ, ಸಾಗರ್ ಆಸ್ಪತ್ರೆಯವರು ಪ್ರತ್ಯೇಕ ವಿಭಾಗ ತೆರೆದಿದ್ದರು.
ತಪಾಸಣೆಯ ನಂತರ ವಾಜಪೇಯಿ ಆರೋಗ್ಯಶ್ರೀ ಚಿಕಿತ್ಸಾ ವ್ಯಪ್ತಿಗೆ ಬರುವ ಗಂಭೀರ ಕಾಯಿಲೆಗಳಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರಗಳಲ್ಲಿ ಚಿಕಿತ್ಸೆ ನೀಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

