ಸಮರ್ಥರ ಆಯ್ಕೆಗಾಗಿ ಮತದಾನ ಮಾಡಿ
ಮಂಡ್ಯ: ಮತದಾನವು ಉತ್ತಮ ನಾಯಕರನ್ನು ಆಯ್ಕೆ ಮಾಡಲು ಒಂದು ಅತ್ಯುತ್ತಮ ಅವಕಾಶ. ಇದನ್ನು ಯುವಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಲಿಂಗೇಗೌಡ ಶುಕ್ರವಾರ ತಿಳಿಸಿದರು.
ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಯುವಕರು ತಮ್ಮ ಮತಗಳನ್ನು ಪ್ರಜ್ಞಾಪೂರ್ವಕವಾಗಿ ಆಲೋಚಿಸಿ ಉತ್ತಮ ಅಭ್ಯರ್ಥಿಗೆ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಚುನಾವಣೆಯಲ್ಲಿ ಆಯ್ಕೆಯಾಗುವ ಜನಪ್ರತಿನಿಧಿಗಳು ಆಡಳಿತದ ಚುಕ್ಕಾಣಿ ಹಿಡಿಯುವುದರಿಂದ ಉತ್ತಮ ಚಾರಿತ್ರ್ಯ, ನಡತೆ, ಸಮಾಜದ ಬಗ್ಗೆ ಕಾಳಜಿ ಹೊಂದಿರುವ, ಆಡಳಿತದ ಸಾಮರ್ಥ್ಯ ಇರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತ ಚಲಾಯಿಸಬೇಕು ಎಂದು ಹೇಳಿದರು.
ವಜ್ರ ಖಚಿತ ಆಯುಧ: ಮತದಾನ ಎಂಬುದು ಉತ್ತಮ ಸಮಾಜದ ನಿರ್ಮಾಣಕ್ಕೆ ವಜ್ರಖಚಿತ ಆಯುಧವಾಗಿದೆ. ಯುವಜನತೆ ಪ್ರಬುದ್ಧರಾಗಿ ಮತದಾನ ಬಗ್ಗೆ ತಿಳಿವಳಿಕೆ ಪಡೆದು ಮತ ಚಲಾಯಿಸಬೇಕು. ಪೌರರು ಮತ ಚಲಾಯಿಸುವಾಗ ಜಾತಿ, ಧರ್ಮ, ಹಣದ ಆಮಿಷ ಬದಿಗಿಟ್ಟು ಸಮಾಜಸೇವೆಯಲ್ಲಿ ತೊಡಗಿಕೊಳ್ಳುವ ಉತ್ತಮ ನಾಯಕರನ್ನು ಆರಿಸಬೇಕು. ಆಯ್ಕೆಯಾದ ನಾಯಕರು ಆಡಳಿತ ನೀಡುವಾಗ ಜನಸೇವೆಗೆ ಬದ್ಧರಾಗಿದ್ದಲ್ಲಿ ಪ್ರಜಾಪ್ರಭುತ್ವ ಅರ್ಥಗರ್ಭಿತವಾಗಿರುತ್ತದೆ ಎಂದು ತಿಳಿಸಿದರು.
ವೈವಿದ್ಯತೆಯಲ್ಲೂ ಸದೃಢತೆ: ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಮಾತನಾಡಿ, ಜಗತ್ತಿನಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರವಾಗಿದೆ. ಹಲವು ಭಾಷೆ, ಧರ್ಮ, ಸಂಸ್ಕೃತಿಗಳ ವೈವಿಧ್ಯತೆಯ ನಡುವೆಯು ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿದೆ. ಅದರ ಘನತೆ ಹೀಗೆ ಮುಂದುವರಿಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು.
ಪ್ರತಿ ವರ್ಷ ಮತದಾರರ ಪರಿಷ್ಕರಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. 18 ವರ್ಷ ತುಂಬಿದವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ಸಾಲಿನಲ್ಲಿ ಮಂಡ್ಯ ಜಿಲ್ಲೆಯಿಂದ ಹೊಸದಾಗಿ 35,782 ಮತದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 13,62,026 ಮತದಾರರಿದ್ದಾರೆ ಎಂದರು. ಮತದಾರರ ಪ್ರತಿಜ್ಞಾ ವಿಧಿಯನ್ನು ಜಿಪಂ ಸಿಇಒ ಜಯಣ್ಣ ಬೋಧಿಸಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಸುರೇಶ್ ಎಸ್. ಕೋಗಿಲಗೇರಿ, ಜಿಲ್ಲಾ ಎಎಸ್ಪಿ ರಾಜಣ್ಣ, ಅಪರ ಜಿಲ್ಲಾಧಿಕಾರಿ ಶಂಕರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್, ಮಂಡ್ಯ ಉಪವಿಭಾಗಾಧಿಕಾರಿ ಎಂ.ಎಸ್.ಎನ್. ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

