ಕೆ.ಆರ್.ಪೇಟೆ: ಬೈಕ್- ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ದೇವೀರಮ್ಮಣ್ಣಿ ಕೆರೆ ಏರಿ ರಸ್ತೆಯಲ್ಲಿ ನಡೆದಿದೆ. ತಾಲೂಕಿನ ವಳಗೆರೆಮೆಣಸ ಗ್ರಾಮದ ದೊರೆಸ್ವಾಮಿ ಪುತ್ರ ರಾಜೇಶ್ (28) ಅಪಘಾತದಲ್ಲಿ ಮೃತ ದುರ್ದೈವಿ. ಕೆ.ಆರ್. ಪೇಟೆ ಪಟ್ಟಣದಿಂದ ರಾತ್ರಿ 9.30ರ ಸಮಯದಲ್ಲಿ ಸ್ವಗ್ರಾಮಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರ್- ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದು ತೀವ್ರ ಸ್ವರೂಪದ ಗಾಯವಾಗಿತ್ತು. ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾಜೇಶ್ ಮೃತಪಟ್ಟಿದ್ದಾನೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪಟ್ಟಣದ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.