ಪುರಸಭೆ ಅವ್ಯವಹಾರ ತನಿಖೆಗೆ ಒತ್ತಾಯಿಸುವೆ: ಸ್ವರೂಪ್ ಚಂದ್
ಮದ್ದೂರು: ಪುರಸಭೆಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವ ಮೂಲಕ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸುವುದಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸ್ವರೂಪ್ ಚಂದ್ ತಿಳಿಸಿದ್ದಾರೆ.
ಪಟ್ಟಣದ ಮಹಾವೀರ ಚಿತ್ರಮಂದಿರದ ಬಳಿ ಬಿಜೆಪಿ ಕಚೇರಿ ಉದ್ಘಾಟಿಸಿ, ಪುರಸಭೆ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಸಭೆ ಇಂದಿನ ಅಧ್ಯಕ್ಷರು ಮತ್ತು ಸದಸ್ಯರ ಅವಧಿಯಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕ ಸ್ಥಾಪನೆಗೆ ಸಂಬಂಧಿಸಿದ ಜಮೀನು ಖರೀದಿ, ಹೊಲಿಗೆ ಯಂತ್ರ ವಿತರಣೆಯ ಫಲಾನುಭವಿಗಳ ಆಯ್ಕೆ ಹಾಗೂ ಅಂಗಡಿ ಮಳಿಗೆಗಳ ವಿತರಣೆಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ಎಲ್ಲಾ ಅವ್ಯವಹಾರಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶೀಘ್ರ ತನಿಖೆ ನಡೆಸುವಂತೆ ಮನವಿ ಮಾಡಲಾಗುವುದು ಎಂದರು.
ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ನಾಗರಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಪುರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಆರೋಪಿಸಿದರು.
ಮದ್ದೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ವತಿಯಿಂದ 23 ವಾರ್ಡ್ಗಳ ಪೈಕಿ 16 ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಮಾ.4 ಬೈಕ್ ರ್ಯಾಲಿ: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಮಾ.4 ರಂದು ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಆರ್.ಅಶೋಕ ರ್ಯಾಲಿಗೆ ಚಾಲನೆ ನೀಡುವ ಮೂಲಕ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು. ತಾಲೂಕು ಬಿಜೆಪಿ ಅಧ್ಯಕ್ಷ ಎನ್.ಸತೀಶ್, ಜಿಲ್ಲಾ ಕಾರ್ಯದರ್ಶಿ ರೂಪಾ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಶೆಟ್ಟಿ, ನಗರ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ, ಮುಖಂಡರಾದ ರಮೇಶ್, ಸಿದ್ದು, ಮಲ್ಲೇಶ್, ಅಭ್ಯರ್ಥಿಗಳಾದ ತನುಜ ಮಹದೇವಮ್ಮ, ರಾಜು ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

